ಬೆಂ.ಗ್ರಾ.ಜಿಲ್ಲೆ: ಕೋವಿಡ್-19 ಸಂಕಷ್ಟದ ಸಂದರ್ಭದಲ್ಲಿ ಕಾನೂನು ಸೇವಾ ಪ್ರಾಧಿಕಾರ ಹಾಗೂ ಸರ್ಕಾರ ಕಾರ್ಮಿಕರ ನೆರವಿಗೆ ನಿಂತಿದ್ದು, ಕಾರ್ಮಿಕರೆಲ್ಲರೂ ಕಾರ್ಮಿಕ ಇಲಾಖೆಯಲ್ಲಿ ನೋಂದಣಿ ಮಾಡಿಸಿಕೊಳ್ಳುವ ಮೂಲಕ ಸರ್ಕಾರಿ ಸೌಲಭ್ಯಗಳನ್ನು ಬಳಸಿಕೊಳ್ಳಬೇಕು ಹಾಗೂ ಕಾರ್ಮಿಕರ ಸುರಕ್ಷತೆಯೇ ನಮ್ಮ ಆದ್ಯತೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಸಂದೀಪ್ ಸಾಲಿಯಾನ ಅವರು ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಮಿಕ ಇಲಾಖೆ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಹಾಗೂ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿಯಮಿತ, ಎಲ್ಅಂಡ್‌ಟಿ ಲಿಮಿಟೆಡ್ ಇವರ ಸಂಯುಕ್ತಾಶ್ರಯದಲ್ಲಿ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿಂದು ಏರ್ಪಡಿಸಲಾಗಿದ್ದ ಕಟ್ಟಡ ಕಾರ್ಮಿಕರಿಗೆ ಆಹಾರ ಮತ್ತು ಸುರಕ್ಷತಾ ಕಿಟ್ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ, ಅವರು ಮಾತನಾಡಿದರು.
ದೇಶದಲ್ಲಿ ಶೇ.40 ರಷ್ಟು ಅಸಂಘಟಿತ ವಲಯದ ಕಾರ್ಮಿಕರಿದ್ದು, ಅವರ ಏಳಿಗೆಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ ಎಂದರು.
ಕಾರ್ಮಿಕರು ಹೆಚ್ಚಾಗಿ ಗ್ರಾಮೀಣ ಪ್ರದೇಶ ಹಾಗೂ ಉತ್ತರ ಕರ್ನಾಟಕದ ಭಾಗದಿಂದ ಕುಟುಂಬವನ್ನು ಬಿಟ್ಟು ವಲಸೆ ಬಂದು ಕೆಲಸ ನಿರ್ವಹಿಸುತ್ತಿರುವ, ನಗರ ಪ್ರದೇಶದಲ್ಲಿ ದುಡಿಯುವ ಕಾರ್ಮಿಕರಿಗೆ ಯಾವುದೇ ತೊಂದರೆ ಉಂಟಾದ್ದಲ್ಲಿ, ನೆರವು ಪಡೆಯಲು ಕಾರ್ಮಿಕ ಇಲಾಖೆ ಅಡಿಯಲ್ಲಿ ಕಡ್ಡಾಯವಾಗಿ ನೊಂಣಿಯಾಗಿರಬೇಕು ಎಂದು ಹೇಳಿದರು.
ಗುತ್ತಿಗೆದಾರರು ನೀಡುವ ಕಡಿಮೆ ಸಂಬಳಕ್ಕೆ ಕಾರ್ಮಿಕರು ಕೆಲಸ ಮಾಡುತ್ತಿರುತ್ತಾರೆ. ಇಂತಹ ಸಂದರ್ಭದಲ್ಲಿ ಕಾರ್ಮಿಕರು ತಮಗಿರುವ ಇರುವ ಹಲವಾರು ಕಾನೂನುಗಳನ್ನು ತಿಳಿದುಕೊಳ್ಳಬೇಕು ಎಂದರಲ್ಲದೆ, ಕೆಲಸದ ಸ್ಥಳದಲ್ಲಿ ಉತ್ತಮ ವಾತಾವರಣ ಇರುವಂತೆ ನೋಡಿಕೊಳ್ಳಬೇಕು, ಮಹಿಳಾ ಕಾರ್ಮಿಕರು ಇರುವಂತಹ ಸ್ಥಳಗಳಲ್ಲಿ ಅವರಿಗೆ ವಿಶ್ರಾಂತಿ ಸ್ಥಳ ಹಾಗೂ ಪ್ರತ್ಯೇಕ ಶೌಚಾಲಯ ವ್ಯವಸ್ಥೆ ಇರುವಂತೆ ನೋಡಿಕೊಳ್ಳಬೇಕು ಇದನ್ನು ಉಲ್ಲಂಘಿಸುವ ಗುತ್ತಿಗೆದಾರರ ವಿರುದ್ದ ದೂರು ದಾಖಲಿಸಬಹುದು ಎಂದು ಸಲಹೆ ನೀಡಿದರು.
ಕಾರ್ಮಿಕರು ಮಾದಕ ವ್ಯಸನಕ್ಕೆ ದಾಸರಾಗಿ ಆರೋಗ್ಯ ಹಾನಿ ಮಾಡಿಕೊಳ್ಳಬಾರದು ಎಂದರಲ್ಲದೆ, ಮಾದಕ ವಸ್ತುಗಳನ್ನು ಸೇವಿಸಿ ಕೆಲಸ ನಿರ್ವಹಿಸುವಾಗ ಅನಾಹುತಗಳು ಸಂಭವಿಸಿದ್ದಲ್ಲಿ, ಅಂತಹವರಿಗೆ ಸರ್ಕಾರದಿಂದ ಯಾವುದೇ ಹಣಕಾಸಿನ ನೆರವು ದೊರೆಯುವುದಿಲ್ಲ, ಆದ್ದರಿಂದ ಎಲ್ಲರೂ ಉತ್ತಮ ಮನಸ್ಥಿತಿ, ಆರೋಗ್ಯ ಮತ್ತು ಸುರಕ್ಷತೆಯಿಂದಿರಬೇಕು ಎಂದು ತಿಳಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಮಾತನಾಡಿ, ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಅಭಿವೃದ್ಧಿ ಕಾಮಗಾರಿಗಳಲ್ಲಿ 7000 ಕಾರ್ಮಿಕರು ಕರ್ತವ್ಯ ನಿರ್ವಹಿಸುತ್ತಿದ್ದು, ಈಗಾಗಲೇ 1700 ಕ್ಕೂ ಹೆಚ್ಚು ಜನರ ನೋಂದಣಿ ಹಾಗೂ ಆಧಾರ್ ಜೋಡಣೆ ಪ್ರಕ್ರಿಯೆ ನಡೆಯುತ್ತಿದೆ. ಕಾರ್ಮಿಕ ಇಲಾಖೆಯಲ್ಲಿ ನೋಂದಣಿಯಾದಾಗ ಮಾತ್ರ ಸರ್ಕಾರದ ಸೌಲಭ್ಯಗಳನ್ನು ಅರ್ಹ ಕಾರ್ಮಿಕರಿಗೆ ತಲುಪಿಸಲು ಸಾಧ್ಯ ಎಂದು ತಿಳಿಸಿದರು.
ಕಟ್ಟಡ ಕಾರ್ಮಿಕರು ಸೇರಿದಂತೆ ಅಸಂಘಟಿತ ವಲಯದ ಕಾರ್ಮಿಕರ ಆರೋಗ್ಯ ಮತ್ತು ಮಕ್ಕಳ ಶಿಕ್ಷಣಕ್ಕೆ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಹಣಕಾಸಿನ ನೆರವು ಸೇರಿದಂತೆ ಹಲವು ಸೇವೆಗಳನ್ನು ನೀಡಲಾಗುತ್ತಿದೆ ಎಂದರಲ್ಲದೆ, ನೀವು ನೋಂದಣಿ ಮಾಡಿಸಿ ಹಾಗೂ ನಿಮ್ಮ ಜೊತೆಯಲ್ಲಿರುವ ಕಾರ್ಮಿಕರಿಗೂ ನೋಂದಣಿ ಮಾಡಿಸಲು ತಿಳಿಸಿ ಎಂದರು.
ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಕೆಲಸ ಕಳೆದುಕೊಂಡ ಕಾರ್ಮಿಕರಿಗೆ ರಾಜ್ಯ ಸರ್ಕಾರ ಅಸಂಘಟಿತ ವಲಯ ರೂ.2 ಸಾವಿರ ಸಹಾಯಧನ ಘೋಷಿಸಲಾಗಿದ್ದು, ಅರ್ಹ ಫಲಾನುಭವಿಗಳಿಗೆ ತಲುಪಿಸಲಾಗುತ್ತಿದೆ ಎಂದರು.
ಕಾರ್ಮಿಕರಿಗೆ ಈಗಾಗಲೇ ಆಹಾರ ಮತ್ತು ಸುರಕ್ಷತಾ ಕಿಟ್‌ಗಳನ್ನು ನೀಡಲಾಗುತ್ತಿದ್ದು, ಅರ್ಹ ಫಲಾನುಭವಿಗಳಿಗೆ ಸೌಲಭ್ಯಗಳನ್ನು ತಲುಪಿಸುವ ನಿಟ್ಟಿನಲ್ಲಿ ಕಾರ್ಮಿಕ ಇಲಾಖೆ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದರು.
ಅಪರ ಕಾರ್ಮಿಕ ಆಯುಕ್ತರಾ ನರಸಿಂಹಮೂರ್ತಿ ಅವರು ಮಾತನಾಡಿ, ವಿಶ್ವವೇ ಕೋವಿಡ್-19 ಸಾಂಕ್ರಾಮಿಕ ರೋಗದಿಂದ ಈಗಷ್ಟೇ ಚೇತರಿಸಿಕೊಳ್ಳತ್ತಿದ್ದು, ನ್ಯಾಯಾಲಯಗಳು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವಾರು ಆದೇಶಗಳನ್ನು, ಮಾರ್ಗಸೂಚಿಗಳನ್ನು ಹೊರಡಿಸಿ, 25 ವರ್ಗದ ಕಾರ್ಮಿಕರಿಗೆ ರೂ.3000 ಆರ್ಥಿಕ ನೆರವು ನೀಡುವ ಮೂಲಕ ಕಾರ್ಮಿಕರ ಪರವಾಗಿ ನಿಂತಿದೆ ಎಂದು ಹೇಳಿದರು.
ರಾಜ್ಯದಲ್ಲಿ ಈಗಾಗಲೇ 22 ಲಕ್ಷ ಕಾರ್ಮಿಕರು ನೋಂದಣಿಯಾಗಿದ್ದು, ನೋಂದಣಿಯಾಗಿರುವ ಎಲ್ಲ ಕಾರ್ಮಿಕರಿಗೂ ನೇರವಾಗಿ ಅವರ ಬ್ಯಾಂಕ್ ಖಾತೆಗೆ ಸಹಾಯಧನವನ್ನು ಜಮಾ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಈಗಾಗಲೇ 14000 ಕ್ಕೂ ಹೆಚ್ಚು ಆಹಾರದ ಕಿಟ್ ವಿತರಿಸಲಾಗಿದ್ದು, ಸರ್ಕಾರ ಹೊರಡಿಸಿರುವ ಕೊರೋನಾ ಮಾರ್ಗಸೂಚಿಗಳನ್ನು ಎಲ್ಲರೂ ಪಾಲಿಸುವ ಮೂಲಕ ಆರೋಗ್ಯ ಕಾಪಾಡಿಕೊಳ್ಳುವಂತೆ ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಜಗದೀಶ. ಕೆ.ನಾಯಕ, ಸಹಾಯಕ ಕಾರ್ಮಿಕ ಆಯುಕ್ತರಾದ ಎ.ಸಿ.ತಮ್ಮಣ್ಣ, ದೇವನಹಳ್ಳಿ ತಹಶೀಲ್ದಾರ್ ಅನಿಲ್‌ಕುಮಾರ್ ಆರೊಲೀಕರ್, ಬಿ.ಐ.ಎ.ಎಲ್.ನ ಮುಖ್ಯ ಮಾನವ ಸಂಪನ್ಮೂಲ ಅಧಿಕಾರಿ ಟಿ.ಸಿ.ಸಜಿತ್, ಜಿಲ್ಲಾ ಕಾರ್ಮಿಕ ಅಧಿಕಾರಿ ನಾಗೇಂದ್ರ, ಬಾಲ ಕಾರ್ಮಿಕ ಸೊಸೈಟಿಯ ಯೋಜನಾ ನಿರ್ದೇಶಕ ಸುಬ್ಬರಾವ್ ಸೇರಿದಂತೆ ಮತ್ತಿತರ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..