ಚಿಕ್ಕಬಳ್ಳಾಪುರ: ಜಿಲ್ಲೆಯಾದ್ಯಂತ ಮುಂಗಾರು ಮಳೆ ಆರಂಭಗೊಂಡಿದ್ದು, ಎಲ್ಲೆಡೆ ಕೃಷಿ ಚಟುವಟಿಕೆಗಳು ಆರಂಭಗೊಂಡು ಭಿತ್ತನೆ ಕಾರ್ಯ ಚುರುಕಾಗಿ ನಡೆಯುತ್ತಿದೆ. ಹಾಗಾಗಿ ರೈತರಿಗೆ ಭಿತ್ತನೆ ಭೀಜ, ರಸಗೊಬ್ಬರ ಹಾಗೂ ಯಂತ್ರೋಪಕರಣಗಳ ಸಮಸ್ಯೆಯಾಗದಂತೆ ಕ್ರಮ ವಹಿಸಬೇಕು. ರೈತ ಸಂಪರ್ಕ ಕೇಂದ್ರಗಳಲ್ಲಿ ಅಗತ್ಯವಾದಷ್ಟು ಭಿತ್ತನೆ ಬೀಜ, ರಸಗೊಬ್ಬರ ದಾಸ್ತಾನು ಮಾಡಿಟ್ಟುಕೊಳ್ಳಬೇಕು ಎಂದು ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ವಸತಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಕುಮಾರ್ ಮೀನಾ ಅವರು ಕೃಷಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಎಲ್ಲೆಡೆ ಉತ್ತಮ ಮಳೆಯಾಗುತ್ತಿದೆ. ರೈತರು ತಮ್ಮ ಜಮೀನುಗಳನ್ನು ಹದ ಮಾಡಿ ಭಿತ್ತನೆ ಮಾಡುವ ಕೆಲಸದಲ್ಲಿ ನಿರತರಾಗಿದ್ದು, ಈ ಸಂದರ್ಭದಲ್ಲಿ ರೈತರಿಗೆ ಉಳಿಮೆ ಹಾಗೂ ಬಿತ್ತನೆಗೆ ಸಂಬಂಧಿಸಿದ ಹಲವು ಯಂತ್ರೋಪಕರಣಗಳು ಬೇಕಾಗುತ್ತವೆ. ಇವುಗಳನ್ನು ಎಲ್ಲಾ ರೈತ ಸಂಪರ್ಕ ಕೇಂದ್ರಗಳಿಂದ ಸಕಾಲಕ್ಕೆ ಒದಗಿಸಬೇಕು. ಇದಲ್ಲದೆ, ರೈತರಿಗೆ ಅಗತ್ಯವಾದ ಗುಣಮಟ್ಟದ ಭಿತ್ತನೆ ಬೀಜ, ರಸಗೊಬ್ಬರವನ್ನು ಮೊದಲೇ ದಾಸ್ತಾನು ಮಾಡಿಟ್ಟುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಜಂಟಿ ಕೃಷಿ ನಿರ್ದೇಶಕಿ ಎಲ್.ರೂಪ ಮಾತನಾಡಿ, ಜಿಲ್ಲೆಯಲ್ಲಿ ಮೇ ತಿಂಗಳಲ್ಲಿ 67.0 ಮಿ.ಮೀ. ವಾಡಿಕೆ ಮಳೆಯಿದ್ದು, ಮೇ ಅಂತ್ಯಕ್ಕೆ 76.5 ಮಿ.ಮೀ. ಮಳೆಯಾಗಿದ್ದು, ಶೇ.14.2 ರಷ್ಟು ಹೆಚ್ಚುವರಿಯಾಗಿ ಮಳೆಯಾಗಿದೆ. ಜೂನ್ ತಿಂಗಳಲ್ಲಿ 63.1 ವಾಡಿಕೆ ಮಳೆಯಿದ್ದು, ಮಾಸದ ಅಂತ್ಯಕ್ಕೆ 102 ಮಿ.ಮೀ. ಮಳೆಯಾಗಿ, ಶೇ.61.6 ಮಿ.ಮೀ.ನಷ್ಟು ಹೆಚ್ಚು ಮಳೆಯಾಗಿದೆ. ಅದೇ ರೀತಿ ಜುಲೈ ತಿಂಗಳಲ್ಲಿ 17.8 ಮಿ.ಮೀ. ವಾಡಿಕೆ ಮಳೆಯಾಗಬೇಕಿದ್ದು, ಈ ಪೈಕಿ ಈಗಾಗಲೇ 76.7 ಮಿ.ಮೀ. ಮಳೆಯಾಗುವ ಮೂಲಕ ಶೇ.330.9 ಮಿ.ಮೀ. ಹೆಚ್ಚುವರಿಯಾಗಿ ಮಳೆಯಾಗಿದೆ. ಒಟ್ಟಾರೆಯಾಗಿ ಜುಲೈ 9 ಅಂತ್ಯಕ್ಕೆ ಜಿಲ್ಲೆಯಾದ್ಯಂತ 349.3 ಮಿ.ಮೀ ಮಳೆಯಾಗಿದೆ. ಜೂನ್ ಮತ್ತು ಜುಲೈನಲ್ಲಿ ನೆಲಗಡಲೆ, ಮುಸುಕಿನ ಜೋಳ, ರಾಗೀ ಬೆಳೆ ಬಿತ್ತನೆ ಕಾರ್ಯ ನಡೆಯಲಿದ್ದು, ಜಿಲ್ಲೆಯಲ್ಲಿ ಈವರೆಗೆ ಶೇ. 22 ರಷ್ಟು ಬಿತ್ತನೆ ಕಾರ್ಯ ಮುಗಿದಿದೆ ಎಂದು ತಿಳಿಸಿದರು.
ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಒಟ್ಟು 1.54 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಲಾಗಿದೆ. ಈ ಪೈಕಿ ಶೇ.14.86 ರಷ್ಟು ನೆಲಗಡಲೆ, ಶೇ.12.97ರಷ್ಟು ರಾಗಿ, ಶೇ.26.91 ರಷ್ಟು ಮುಸುಕಿನ ಜೋಳ, ಶೇ.22.98 ರಷ್ಟು ತೊಗರಿ ಬಿತ್ತನೆ ಪೂರ್ಣಗೊಂಡಿದೆ ಎಂದು ಮಾಹಿತಿ ನೀಡಿದರು.
ಬಸವ, ಅಂಬೇಡ್ಕರ್, ಆಶ್ರಯ ಸೇರಿದಂತೆ ವಿವಿಧ ವಸತಿ ಯೋಜನೆಗಳಡಿ ಒಟ್ಟು 46,671 ಮನೆಗಳು ಮಂಜೂರಾಗಿದ್ದು, ಈ ಪೈಕಿ 33101 ಮನೆಗಳ ಸಂಪೂರ್ಣ ಕಾಮಗಾರಿ ಮುಗಿದಿದೆ. ಉಳಿದಂತೆ 7505 ಮನೆಗಳು ಪೌಂಡೇಷನ್, 1752 ಮನೆಗಳು ಲಿಂಟಲ್ ಮಟ್ಟ, 4313 ಮನೆಗಳು ರೂಫ್ ಹಂತದಲ್ಲಿ ಕಾಮಗಾರಿ ನಡೆಯತ್ತಿದ್ದು, ಬಾಕಿ ಉಳಿದ ಮನೆಗಳ ಕಾಮಗಾರಿ ಶೀಘ್ರವೇ ಮುಗಿಸಬೇಕು. ಈ ಸಂಬಂಧ ತಾಲೂಕಿನ ಇಒಗಳು ಎಲ್ಲಾ ಗ್ರಾಪಂಗಳ ಪಿಡಿಒಗಳಿಗೆ ಸೂಚನೆ ನೀಡಬೇಕು. ಗ್ರಾಮ ಸಭೆಗಳನ್ನು ನಡೆಸಿ ಹೊಸದಾಗಿ ಫಲಾನುಭವಿಗಳ ಆಯ್ಕೆಯನ್ನು ಮಾಡಬೇಕು. ಅದನ್ನು ಆಶ್ರಯ ಸಮಿತಿ ಸಭೆಯಲ್ಲಿಟ್ಟು ಆಯಾ ಕ್ಷೇತ್ರ ಶಾಸಕರಿಂದ ಅಂತಿಮ ಪಟ್ಟಿಗೆ ಅನುಮೋದನೆ ಪಡೆದು ಶೀಘ್ರವೇ ವಸತಿ ಸೌಲಭ್ಯ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಅಲ್ಲದೆ ವಿವಿಧ ಆಶ್ರಯ ಯೋಜನೆಗಳಲ್ಲಿ ಯಾವುದೇ ಫಲಾನುಭವಿಗಳು ಮನೆ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸಿ ಜಿಪಿಆರ್ ಎಸ್ ತಂತ್ರಾಂಶದಲ್ಲಿ ಅಳವಡಿಸಿದ್ದರೂ ಹಣ ಪಾವತಿ ಆಗದ ಪ್ರಕರಣಗಳಿದ್ದಲ್ಲಿ ಅಂತಹ ವಿವರವನ್ನು ಕೂಡಲೇ ನೀಡುವಂತೆ ಎಲ್ಲಾ ಇಒಗಳಿಗೆ ಸೂಚಿಸಿದರು.
ನರೇಗಾ ಯೋಜನೆಯಡಿ ಜಿಲ್ಲೆಯಲ್ಲಿ ಉತ್ತಮ ಕೆಲಸಗಳನ್ನು ಮಾಡಲಾಗಿದೆ. ಪ್ರಸಕ್ತ ಕ್ರಿಯಾ ಯೋಜನೆಯಡಿ ಜಿಲ್ಲೆಯಾದ್ಯಂತ ಈಗಾಗಲೇ 53 ಅಂಗನವಾಡಿ ಕೇಂದ್ರಗಳನ್ನು ಅಭಿವೃದ್ಧಿ ಮಾಡಲಾಗಿದೆ. ಇದಲ್ಲದೆ, 845 ಕೊಳವೆಬಾವಿ ಮರುಪೂರಣ ಘಟಕಗಳ ನಿರ್ಮಾಣ, 87 ಕಾಲುವೆಗಳು, 35 ಕಲ್ಯಾಣಿಗಳ ಅಭಿವೃದ್ಧಿ, 85 ಮಲ್ಟಿ ಆರ್ಚ್ ಚೆಕ್ ಡ್ಯಾಂ ನಿರ್ಮಾಣ ಮಾಡಲಾಗಿದ್ದು, ಇದಲ್ಲದೆ, ಹಲವು ಕಡೆ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಉದ್ಯಾನವನ ಅಭಿವೃದ್ದಿ, 7333 ಬಚ್ಚಲು ಇಂಗು ಗುಂಡಿಗಳ ನಿರ್ಮಾಣ ಮಾಡಲಾಗಿದೆ ಎಂದು ಜಿ.ಪಂ. ಸಿಇಒ ಪಿ.ಶಿವಶಂಕರ್ ಮಾಹಿತಿ ನೀಡಿದರು.
ಲಾಕ್ ಡೌನ್ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಪಡಿತರ ಚೀಟಿದಾರರಿಗೆ ತಲಾ ಒಬ್ಬರಿಗೆ 5 ಕೆಜಿಯಂತೆ ಅಕ್ಕಿಯನ್ನು ಉಚಿತವಾಗಿ ನೀಡಲಾಗುತ್ತಿದ್ದು, ಅದನ್ನು ಮುಂದಿನ ನವೆಂಬರ್ ತಿಂಗಳವರೆಗೂ ವಿಸ್ತರಿಸಲಾಗಿದೆ. ಬಡವರು ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಇದೇ ವೇಳೆ ಮನೋಜ್ ಕುಮಾರ್ ಮೀನಾ ಅವರು ತಿಳಿಸಿದರು.
ಜಿಲ್ಲೆಯಲ್ಲಿ ವಾಡಿಕೆಗಿಂತ ಮಳೆ ಪ್ರಮಾಣ ಜಾಸ್ತಿ ಆಗಿದ್ದರೂ ಸಹ ಅಂತರ್ಜಲ ವೃದ್ದಿಯಾಗುತ್ತಿಲ್ಲ. ಮುಂದಿನ ದಿನಗಳಲ್ಲಿ ಇದಕ್ಕೆ ಶಾಶ್ವತ ಪರಿಹಾರ ಕಲ್ಪಿಸುವತ್ತ ಚಿಂತನೆ ಮಾಡಿ ಕುಡಿಯುವ ನೀರಿನ ಸಮಸ್ಯೆ ಎಲ್ಲಿಯೂ ತಲೆದೊರದಂತೆ ಗಮನ ಹರಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕಿ ರೇಣುಕಾ ಅವರು, ಕುಡಿಯುವ ನೀರಿನ ಸಮಸ್ಯೆ ಜಿಲ್ಲೆಯ ನಗರ ಪ್ರದೇಶಗಳಲ್ಲಿ ಇರುವುದಿಲ್ಲ. ಪ್ರಸ್ತುತ ಚಿಕ್ಕಬಳ್ಳಾಪುರ ನಗರಕ್ಕೆ ಜಕ್ಕಲಮಡುಗು ಜಲಾಶಯದಿಂದ, ಬಾಗೇಪಲ್ಲಿ ಪಟ್ಟಣಕ್ಕೆ ಚಿತ್ರಾವತಿ ಜಲಾಶಯದಿಂದ ನೀರು ಸರಬರಾಜು ಮಾಡಲಾಗುತ್ತಿದೆ. ಇತರೆ ನಗರಗಳಿಗೆ ಕೊಳವೆ ಭಾವಿ ಮೂಲದಿಂದ ನೀರು ಪೂರೈಕೆ ಮಾಡಲಾಗುತ್ತಿದೆ. ಚಿಂತಾಮಣಿ ನಗರಕ್ಕೆ ಕನ್ನಂಪಲ್ಲಿ ಕೆರೆಯಿಂದ ನೀರು ಸರಬರಾಜು ಮಾಡಲಾಗುತ್ತಿದೆ. ಹಾಗೂ ಮುನ್ನೆಚ್ಚರಿಕಾ ಕ್ರಮವಾಗಿ ಹೊಸದಾಗಿ ಭಕ್ತರಹಳ್ಳಿ ಅರಸೀಕೆರೆಯಿಂದ ನೀರು ಸರಬರಾಜು ಮಾಡಲು ಕಾಮಕಾರಿ ನಡೆಯುತ್ತಿದ್ದು, ಶೇ.80ರಷ್ಟು ಕಾಮಗಾರಿ ಪೂರ್ಣಗೊಂಡಿರುತ್ತದೆ. ಶೀಘ್ರದಲ್ಲಿ ಆ ಕೆರೆಯಿಂದ ಸರಬರಾಜಾಗುವ ನಿರೀಕ್ಷೆ ಇದೆ ಎಂದು ವಿವರ ನೀಡಿದರು.
ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಕಾರ್ಯಪಾಲಕ ಅಭಿಯಂತರ ಶಿವಕುಮಾರ್ ಅವರು ಮಾತನಾಡಿ, ಜಿಲ್ಲೆಯಲ್ಲಿ ಪ್ರಸ್ತುತ 6 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, ಟ್ಯಾಂಕರ್ ಗಳ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ. ಉಳಿದ ಗ್ರಾಮಗಳಲ್ಲಿ ಯಾವುದೇ ನೀರಿನ ಸಮಸ್ಯೆ ಇಲ್ಲ ಎಂದು ತಿಳಿಸಿದರು.
ಈ ಎಲ್ಲಾ ಸಮಗ್ರ ಮಾಹಿತಿಯನ್ನು ಪಡೆದ ಕಾರ್ಯದರ್ಶಿಗಳು ಜಿಲ್ಲೆಯಲ್ಲಿನ 39,000 ತೋಟಗಾರಿಕಾ ಬೆಳೆ ಪ್ರದೇಶದಲ್ಲಿ ಶೇ.100ರಷ್ಟು ಹನಿ ನೀರಾವರಿ ಪದ್ಧತಿಯನ್ನು ಅಳವಡಿಸಲು ಯೋಜನೆ ರೂಪಿಸಿ, ಶೀಘ್ರವಾಗಿ ಅನುಷ್ಠಾನಗೊಳಿಸುವಂತೆ ಹಾಗೂ ಸಂಭವಿತ ಕೋವಿಡ್ ನ ಮೂರನೇ ಅಲೆ ಎದುರಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿರುವ ಮಕ್ಕಳಿಗೆ ಪೌಷ್ಠಿಕ ಆಹಾರ ವಿತರಿಸಿ ಅಪೌಷ್ಠಿಕತೆ ನಿವಾರಿಸುವ ಕಾರ್ಯಕ್ರಮಗಳನ್ನು ಹೆಚ್ಚಾಗಿ ಅನುಷ್ಠಾನಗೊಳಿಸಬೇಕು. ಹೆರಿಗೆ ಸಂದರ್ಭದಲ್ಲಿ ತಾಯಿ ಮತ್ತು ಮಗುವಿನ ಸಾವು ಸಂಭವಿಸದಂತೆ ಎಚ್ಚರ ವಹಿಸಬೇಕು. ಈ ಮೂಲಕ ಜಿಲ್ಲೆಯ ಸುಸ್ಥಿರ ಅಭಿವೃದ್ಧಿಗೆ ತಾವೆಲ್ಲರೂ ಶ್ರಮ ವಹಿಸಿ ಕೆಲಸ ಮಾಡಬೇಕೆಂದು ಎಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಆರ್.ಲತಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಜಿಲ್ಲಾ ಪಂಚಾಯಿತಿ ಯೋಜನಾಧಿಕಾರಿ ಧನುರೇಣುಕ, ಜಿಲ್ಲೆಯ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..