ಬೆಂ.ಗ್ರಾ.ಜಿಲ್ಲೆ: 2021ರ ಜುಲೈ 19 ಹಾಗೂ ಜುಲೈ 22 ರಂದು ಎಸ್.ಎಸ್.ಎಲ್.ಸಿ. ಪರೀಕ್ಷೆ ನಡೆಯಲಿದ್ದು, ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿ, ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆ ಸುಗಮವಾಗಿ ನಡೆಸುವಂತೆ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅಧಿಕಾರಿಗಳಿಗೆ ಸೂಚಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ನಡೆದ “2020-21ನೇ ಸಾಲಿನ ಎಸ್.ಎಸ್.ಎಲ್.ಸಿ ಮುಖ್ಯ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಸುರಕ್ಷತಾ ಹಿತದೃಷ್ಟಿಯಿಂದ ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಭದ್ರತಾ ವ್ಯವಸ್ಥೆ ಮಾಡುವ ಕುರಿತ ಸಭೆ”ಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆಯುವ ಜಿಲ್ಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಮಾಸ್ಕ್, ಸ್ಯಾನಿಟೈಸರ್ ವಿತರಿಸಬೇಕು ಹಾಗೂ ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಥರ್ಮಲ್ ಸ್ಕ್ರೀನಿಂಗ್ ಮಾಡಲು ಆರೋಗ್ಯ ಇಲಾಖೆಯ ಸಿಬ್ಬಂದಿಗಳನ್ನು ನಿಯೋಜಿಸುವಂತೆ ಜಿಲ್ಲಾ ಆರೋಗ್ಯಾಧಿಕಾರಿಗೆ ತಿಳಿಸಿದರು.
ಪರೀಕ್ಷೆ ಕೇಂದ್ರಗಳಿಗೆ ಪ್ರಶ್ನೆ ಪತ್ರಿಕೆಗಳನ್ನು ಖಜಾನೆಯಿಂದ ಸೂಕ್ತ ಭದ್ರತೆಯೊಂದಿಗೆ ತಲುಪಿಸಬೇಕು ಹಾಗೂ ಪರೀಕ್ಷಾ ಕೇಂದ್ರಗಳ ಸುತ್ತ ಭದ್ರತೆ ಕಲ್ಪಿಸುವಂತೆ ಪೆÇಲೀಸ್ ಇಲಾಖೆಗೆ ಸೂಚಿಸಿದರು. ಅಲ್ಲದೆ, ಪ್ರತಿ ತಾಲ್ಲೂಕಿನಲ್ಲಿ ಪ್ರಶ್ನೆ ಪತ್ರಿಕೆ ತಲುಪಿಸಲು ಸೂಕ್ತ ವಾಹನ ವ್ಯವಸ್ಥೆ ಮಾಡುವಂತೆ ಆರ್‍ಟಿಓ ಅಧಿಕಾರಿಗಳಿಗೆ ತಿಳಿಸಿದರು.
2021ರ ಜುಲೈ 19 ಹಾಗೂ ಜುಲೈ 22 ರಂದು ನಡೆಯಲಿರುವ ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ವಿದ್ಯಾರ್ಥಿಗಳು ಸರಿಯಾದ ಸಮಯಕ್ಕೆ ಪರೀಕ್ಷಾ ಕೇಂದ್ರವನ್ನು ತಲುಪಲು ಜಿಲ್ಲಾದ್ಯಂತ ಕೆಎಸ್‍ಆರ್‍ಟಿಸಿ ಬಸ್ ಸಂಚಾರ ಹೆಚ್ಚಿಸಲು ಕ್ರಮವಹಿಸಿ ಎಂದರಲ್ಲದೆ, ಪರೀಕ್ಷೆಯ ಪ್ರವೇಶ ಪತ್ರ ಹೊಂದಿರುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಬೇಕು ಎಂದರು.
ಪರೀಕ್ಷಾ ಕೇಂದ್ರ, ಪ್ರಶ್ನೆ ಪತ್ರಿಕೆ, ಉತ್ತರ ಪತ್ರಿಕೆಗಳ ಕುರಿತಾಗಿ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ಗೊಂದಲವುಂಟಾಗದಂತೆ ಶಿಕ್ಷಕರು ನೋಡಿಕೊಳ್ಳಬೇಕು. ಶುದ್ಧ ಕುಡಿಯುವ ನೀರು, ಶೌಚಾಲಯದ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸಬೇಕು ಹಾಗೂ ಕೋವಿಡ್ ಸೋಂಕು ದೃಢಪಟ್ಟ ವಿದ್ಯಾರ್ಥಿಗಳಿಗೆ ತಾಲ್ಲೂಕಿಗೊಂದರಂತೆ ಪ್ರತ್ಯೇಕ ಪರೀಕ್ಷಾ ಕೇಂದ್ರದ ವ್ಯವಸ್ಥೆ ಕಲ್ಪಿಸಬೇಕು ಎಂದು ತಿಳಿಸಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಗಂಗಮಾರೇಗೌಡ ಮಾತನಾಡಿ, ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಜಿಲ್ಲೆಯಲ್ಲಿ ಒಟ್ಟು 13,989 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, ಜಿಲ್ಲಾದ್ಯಂತ 106 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗುತ್ತಿದೆ. 100 ಮಕ್ಕಳಿಗೆ ಒಂದು ಪರೀಕ್ಷಾ ಕೇಂದ್ರದ ವ್ಯವಸ್ಥೆ ಮಾಡಲಾಗಿದ್ದು, 650 ಪುನರಾವರ್ತಿತ ಮಕ್ಕಳು ಪರೀಕ್ಷೆ ಬರೆಯಲಿದ್ದಾರೆ ಎಂದು ಸಭೆಗೆ ಮಾಹಿತಿ ನೀಡಿದರು.
ವಿದ್ಯಾರ್ಥಿಗಳಿಗೆ ಪರೀಕ್ಷೆಯ ಕುರಿತು ಯಾವುದೇ ಗೊಂದಲವಿರದಂತೆ ಈಗಾಗಲೇ ಶಿಕ್ಷಕರ ಮೂಲಕ ಮಾರ್ಗದರ್ಶನ ನೀಡಲಾಗಿದ್ದು, ಪರೀಕ್ಷೆ ನಡೆಸಲು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಜಗದೀಶ.ಕೆ.ನಾಯಕ, ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಮುನಿ ಕೃಷ್ಣಪ್ಪ, ಉಪ ವಿಭಾಗಾಧಿಕಾರಿ ಅರುಳ್ ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ. ತಿಪ್ಪೇಸ್ವಾಮಿ, ಡಿವೈಎಸ್ಪಿ ಟಿ.ರಂಗಪ್ಪ, ಡಯಟ್ ಪ್ರಾಂಶುಪಾಲೆ ಅನಿತಾ ನಜಾರೇ, ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳು ಸೇರಿದಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..