ಬೆಂ.ಗ್ರಾ.ಜಿಲ್ಲೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಪದವಿ ಕಾಲೇಜು ವಿದ್ಯಾರ್ಥಿಗಳು, ಬೋಧಕ ಸಿಬ್ಬಂದಿ ಹಾಗೂ ಬೆಂಬಲ ಸಿಬ್ಬಂದಿಗೆ ಲಸಿಕಾಕರಣವನ್ನು ಆದ್ಯತೆ ಮೇರೆಗೆ ನಡೆಸಲಾಗುತ್ತಿದ್ದು, ಕಾಲೇಜು ವಿದ್ಯಾರ್ಥಿಗಳು ಇದರ ಉಪಯೋಗ ಪಡೆದುಕೊಳ್ಳಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ತಿಳಿಸಿದ್ದಾರೆ.
ಜಿಲ್ಲೆಯಾದ್ಯಂತ 18 ವರ್ಷ ಪೂರೈಸಿದ ಸರ್ಕಾರಿ, ಖಾಸಗಿ ಪದವಿ ಕಾಲೇಜುಗಳು, ಐ.ಟಿ.ಐ ಕಾಲೇಜುಗಳು, ಡಿಪ್ಲೋಮಾ ಕಾಲೇಜುಗಳು, ಇಂಜಿನಿಯರಿಂಗ್ ಕಾಲೇಜುಗಳು, ಅರೆವೈದ್ಯಕೀಯ ಶಿಕ್ಷಣ ಸಂಸ್ಥೆಗಳು, ವೈದ್ಯಕೀಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಆದ್ಯತೆ ಮೇರೆಗೆ ಸರ್ಕಾರದ ಮಾರ್ಗಸೂಚಿಗಳನ್ವಯ ಯಶಸ್ವಿಯಾಗಿ ಕೋವಿಡ್-19 ಲಸಿಕಾಕರಣವನ್ನು ಎಲ್ಲಾ ಕಾಲೇಜುಗಳ ಲಸಿಕಾ ಕೇಂದ್ರಗಳಲ್ಲಿ ನಡೆಸಲಾಗುತ್ತಿದೆ.
ಆದಾಗ್ಯೂ ಜಿಲ್ಲೆಯಲ್ಲಿ ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಲಸಿಕೆಯನ್ನು ಪಡೆಯಬೇಕಾಗಿರುವುದರಿಂದ ಎಲ್ಲಾ ಪ್ರಾಂಶುಪಾಲರು ತಮ್ಮ ಕಾಲೇಜಿನಲ್ಲಿ ಇನ್ನು ಲಸಿಕೆಯನ್ನು ಪಡೆಯದೇ ಇರುವ ವಿದ್ಯಾರ್ಥಿಗಳಿಗೆ ಹತ್ತಿರದ ಲಸಿಕಾ ಕೇಂದ್ರಗಳಲ್ಲಿ ಆದ್ಯತೆಯ ಮೇರೆಗೆ ಲಸಿಕೆಯನ್ನು ಪಡೆಯಲು ತಿಳಿಸಬೇಕು.
ವಿದ್ಯಾರ್ಥಿಗಳು ಕೋವಿಡ್-19 ಲಸಿಕೆಯನ್ನು ತೆಗೆದುಕೊಳ್ಳಲು ಲಸಿಕಾ ಕೇಂದ್ರಗಳಿಗೆ ತೆರಳಿದಾಗ ಕಾಲೇಜಿನ ಅಧಿಕೃತ ಗುರುತಿನ ಚೀಟಿಯನ್ನು ತಮ್ಮೊಂದಿಗೆ ತೆಗೆದುಕೊಂಡು ಹೋಗುವುದು ಹಾಗೂ ಲಸಿಕೆಯನ್ನು ಪಡೆಯದ ವಿದ್ಯಾರ್ಥಿಗಳಿಗೆ ಶಾಲಾ ದಾಖಲಾತಿ ಮತ್ತು ಯಾವುದೇ ಪರೀಕ್ಷೆಗೆ ಪ್ರವೇಶವಿರುವುದಿಲ್ಲವೆಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..