
ಬೆಂ.ಗ್ರಾ.ಜಿಲ್ಲೆ: ಕೋವಿಡ್ ನಿಯಮಗಳನ್ನು ಅನುಸರಿಸಿ, ಸ್ವಾತಂತ್ರ್ಯ ದಿನಾಚರಣೆಯ ಆಚರಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಎಂದು ವಿವಿಧ ಇಲಾಖೆ ಅಧಿಕಾರಿಗಳಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಸೂಚಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ನಡೆದ “75ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ನಡೆದ ಪೂರ್ವಭಾವಿ ಸಭೆ”ಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಾರ್ಯಕ್ರಮ ನಡೆಯಲಿರುವ ದೇವನಹಳ್ಳಿ ತಾಲ್ಲೂಕು ಕ್ರೀಡಾಂಗಣದಲ್ಲಿ ಆರೋಗ್ಯ ಇಲಾಖೆಯು ಕೋವಿಡ್-19 ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚನೆ ನೀಡಿದರಲ್ಲದೆ, ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಹಾಜರಾಗಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿರುವ ಸ್ವಾತಂತ್ರ್ಯ ಹೋರಾಟಗಾರರನ್ನು ಸನ್ಮಾನಿಸಲಾಗುವುದು ಹಾಗೂ ಕೋವಿಡ್ ಸಂದರ್ಭದಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಿದ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಹಾಗೂ ಪೌರ ಕಾರ್ಮಿಕರನ್ನು ಗುರುತಿಸಿ ಅವರನ್ನು ಗೌರವಿಸಲಾಗುವುದು ಎಂದರು.
ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸಲಿದ್ದು, ಅಗತ್ಯ ಪೊಲೀಸ್ ಬಂದೋಬಸ್ತ್ ಮಾಡುವಂತೆ ಪೋಲಿಸ್ ಇಲಾಖೆ ಅಧಿಕಾರಿಗೆ ತಿಳಿಸಿದ ಅವರು, ಕ್ರೀಡಾಂಗಣ ಸೇರಿದಂತೆ ಸುತ್ತಮುತ್ತಲಿನ ಪ್ರದೇಶದಲ್ಲಿ ಸ್ವಚ್ಛತೆ ಕಾಪಾಡಬೇಕು ಎಂದು ಪುರಸಭೆ ಮುಖ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.
ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಯ ಅಭಿವೃದ್ಧಿಯ ಕುರಿತು ಭಾಷಣ ಮಾಡಲಿದ್ದು, ಎಲ್ಲಾ ಇಲಾಖೆಗಳು ನಿಗದಿತ ದಿನಾಂಕದೊಳಗೆ ತಮ್ಮ ಇಲಾಖೆಯ ಅಭಿವೃದ್ಧಿ ಮಾಹಿತಿಯನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ ಸಲ್ಲಿಸಬೇಕು ಎಂದರು.ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಪೊಲೀಸ್ ಇಲಾಖೆಯಿಂದ ಕವಾಯತು ನಡೆಯಲಿದ್ದು, ಕವಾಯತು ಅಭ್ಯಾಸದ ಸಂದರ್ಭದಲ್ಲಿ ಪೋಲಿಸರಿಗೆ ಅಗತ್ಯ ಮೂಲ ಸೌಕರ್ಯ ಹಾಗೂ ಊಟದ ವ್ಯವಸ್ಥೆ ಒದಗಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗೆ ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಜಗದೀಶ.ಕೆ.ನಾಯಕ, ಅಪರ ಪೊಲೀಸ್ ಅಧೀಕ್ಷಕ ಲಕ್ಷ್ಮೀ ಗಣೇಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ತಿಪ್ಪೇಸ್ವಾಮಿ, ನಗರಾಭಿವೃದ್ಧಿ ಪ್ರಾಧಿಕಾರದ ಯೋಜನಾ ನಿರ್ದೇಶಕಿ ಸುಮಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಶ್ರೀಧರ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಭವ್ಯ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಕೃಷ್ಣಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥ ಆರಾಧ್ಯ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕಿ ಹೇಮಾವತಿ.ಜೆ. ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….