ಬೆಂ.ಗ್ರಾ.ಜಿಲ್ಲೆ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉಪಯೋಜನೆ ಕಾರ್ಯಕ್ರಮಗಳ ಅಡಿಯಲ್ಲಿ ಅರ್ಹ ಫಲಾನುಭವಿಗಳನ್ನು ಗುರುತಿಸಿ, ಸೌಲಭ್ಯಗಳನ್ನು ತಲುಪಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ತಿಳಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ನಡೆದ “ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಗಿರಿಜನ ಉಪಯೋಜನೆ ಕಾರ್ಯಕ್ರಮಗಳ ತ್ರೈ ಮಾಸಿಕ ಪ್ರಗತಿ ಪರಿಶೀಲನಾ ಸಭೆ ಮತ್ತು ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ”ಯ ಅಧ್ಯಕ್ಷತೆ ವಹಿಸಿ, ಅವರು ಮಾತನಾಡಿದರು.
ಫಲಾನುಭವಿಗಳಿಗೆ ವಿವಿಧ ಯೋಜನೆಗಳನ್ನು ತಲುಪಿಸುವ ಮುನ್ನ, ಫಲಾನುಭವಿಗಳ ಆಯ್ಕೆಗೆ ನಿಗದಿತ ಮಾನದಂಡಗಳನ್ನು ಅನುಸರಿಸಬೇಕು ಎಂದು ತಿಳಿಸಿದರಲ್ಲದೆ, ಪ್ರಸಕ್ತ ಹಣಕಾಸು ವರ್ಷದಲ್ಲಿ ಮೀಸಲಿಟ್ಟ ಹಣವನ್ನು ಪೂರ್ಣ ಪ್ರಮಾಣದಲ್ಲಿ ಖರ್ಚು ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ವಿವಿಧ ಇಲಾಖೆಗಳ ಯೋಜನೆಯಡಿಯಲ್ಲಿ ಈಗಾಗಲೇ ಸಲ್ಲಿಸಿರುವ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಬೇಕು ಎಂದರಲ್ಲದೆ, ಹಲವು ಬ್ಯಾಂಕ್‌ಗಳಲ್ಲಿ ಈ ಕುರಿತು ಸಮಸ್ಯೆಗಳಿದ್ದು, ಅಧಿಕಾರಿಗಳು ಖುದ್ದಾಗಿ ಲೀಡ್ ಬ್ಯಾಂಕ್ ವ್ಯವಸ್ಥಾಪಕರ ಬಳಿ ಚರ್ಚಿಸಿ, ಸಮಸ್ಯೆಗಳನ್ನು ಬಗೆಹರಿಸುವ ಮೂಲಕ ಫಲಾನುಭವಿಗಳಿಗೆ ಸೌಲಭ್ಯ ತಲುಪುವಂತೆ ಕ್ರಮ ಕೈಗೊಳ್ಳಬೇಕು ಎಂದರು.
ದೇವನಹಳ್ಳಿ, ನೆಲಮಂಗಲ ಹಾಗೂ ಹೊಸಕೋಟೆ ತಾಲ್ಲೂಕಿನಲ್ಲಿ ಜಾಗೃತಿ ಹಾಗೂ ಉಸ್ತುವಾರಿ ಸಮಿತಿಯ ಸಭೆಗಳನ್ನು ನಡೆಸಬೇಕು ಎಂದರಲ್ಲದೆ, ಸಭೆಗಳನ್ನು ನಡೆಸುವುದರಿಂದ ಹಲವಾರು ದೌರ್ಜನ್ಯದಂತಹ ಸಮಸ್ಯೆಗಳನ್ನು ತಳಮಟ್ಟದಲ್ಲಿಯೇ ಪರಿಹರಿಸಬಹುದು ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೇಲೆ ದೌರ್ಜನ್ಯ ನಡೆದಾಗ, ವಿಳಂಬ ತೋರದೆ ತಕ್ಷಣ ಪ್ರಕರಣಗಳನ್ನು ದಾಖಲಿಸಬೇಕು ಹಾಗೂ ದೌರ್ಜನ್ಯಕ್ಕೆ ಒಳಗಾದವರಿಗೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಶೀಘ್ರ ಪರಿಹಾರಧನ ನೀಡಬೇಕು.
ಅಂತರ್ಜಾತಿ ವಿವಾಹವಾದವರಿಗೆ ಪ್ರೋತ್ಸಾಹಧನವನ್ನು ನಿಗದಿತ ಅವಧಿಯೊಳಗೆ ನೀಡುವಂತೆ ತಿಳಿಸಿದರು.
ಹೊಸಕೋಟೆ ತಾಲ್ಲೂಕಿನ ಕೆಲವು ಗ್ರಾಮಗಳಲ್ಲಿ ಸ್ಮಶಾನಕ್ಕೆ ಭೂಮಿಯನ್ನು ಮಂಜೂರು ಮಾಡುವಂತೆ ಸಭೆಯ ಸದಸ್ಯರು ಮಾಡಿದ ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು ಸ್ಮಶಾನಕ್ಕೆ ಸರ್ಕಾರಿ ಭೂಮಿಯನ್ನು ಗುರುತಿಸಿ, ಇಲ್ಲದಿದ್ದರೆ ಖಾಸಗಿಯವರಿಂದ ಜಮೀನು ಖರೀದಿಸುವಂತೆ ತಹಶೀಲ್ದಾರ್ ಅವರಿಗೆ ಸಲಹೆ ನೀಡಿದರು.
ಹಲವು ಗ್ರಾಮಗಳಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಭೂಮಿ ನೀಡುವಂತೆ ಮನವಿ ಬಂದಿದ್ದು, ಸೂಕ್ತ ಜಾಗ ನೀಡಲಾಗುವುದು ಹಾಗೂ ಅನುದಾನ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದರು.
ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ವೆಂಕಟರಮಣಯ್ಯ ಮಾತನಾಡಿ, ಗಂಗಾ ಕಲ್ಯಾಣ ಯೋಜನೆಯಡಿ ಬೋರ್‌ವೆಲ್, ಪಂಪ್, ಕೇಬಲ್ ಕೊಟ್ಟಿದ್ದಾರೆ ಆದರೆ ಪೈಪ್‌ಗಳನ್ನು ಕೊಟ್ಟಿಲ್ಲ ಎಂದರಲ್ಲದೆ, ಇದರ ಸಲುವಾಗಿ ಟೆಂಡರ್ ಕರೆಯಬೇಕು ಹಾಗೂ ಶೀಘ್ರವಾಗಿ ಫಲಾನುಭವಿಗಳಿಗೆ ಸೌಲಭ್ಯವನ್ನು ತಲುಪಿಸಬೇಕು ಎಂದು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೋನ ವಂಶಿ ಕೃಷ್ಣ, ಅಪರ ಜಿಲ್ಲಾಧಿಕಾರಿ ಡಾ.ಜಗದೀಶ.ಕೆ.ನಾಯಕ, ಎರಡನೇ ಸತ್ರ ನ್ಯಾಯಾಲಯ ಸಾರ್ವಜನಿಕ ಅಭಿಯೋಜಕ ಎಸ್.ಬಿ.ಹಾವೇರಿ, ಉಪ ವಿಭಾಗಾಧಿಕಾರಿ ಅರುಳ್‌ಕುಮಾರ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಕೃಷ್ಣಪ್ಪ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಮುನಿಕೃಷ್ಣಪ್ಪ, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ವಿನುತಾರಾಣಿ, ಡಿವೈಎಸ್ಪಿ ಟಿ.ರಂಗಪ್ಪ, ಡಿಡಿಪಿಐ ಗಂಗಮಾರೇಗೌಡ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಸುಮ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಶ್ರೀಧರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕಿ ಹೇಮಾವತಿ.ಜೆ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು, ತಹಶೀಲ್ದಾರ್‌ಗಳು, ಸಮಾಜ ಕಲ್ಯಾಣ ಇಲಾಖೆಯ ತಾಲ್ಲೂಕು ಸಹಾಯಕ ನಿರ್ದೇಶಕರು ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..