ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕೋವಿಡ್ ಲಸಿಕೆ ಅಭಾವದಿಂದ ಸಾರ್ವಜನಿಕರು ಪರದಾಡುತ್ತಿದ್ದರೆ, ಮಾಜಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎರಡನೇಯ ಬಾರಿಗೆ ಮೆಗಾ ಲಸಿಕಾ ಮೇಳ ಆಯೋಜಿಸಿರುವುದು ಸಾರ್ವಜನಿಕರ ಅಚ್ಚರಿಗೆ ಕಾರಣವಾಗಿದೆ
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಲಸಿಕಾಕರಣಕ್ಕೆ ವೇಗ ನೀಡಲು ಆ.2 ರಂದು ಜಿಲ್ಲೆಯಾದ್ಯಂತ ಕೋವಿಡ್-19 ರ ಮೆಗಾ ಲಸಿಕಾ ಮೇಳವನ್ನು 18 ವರ್ಷ ಮೇಲ್ಪಟ್ಟ ಎಲ್ಲಾ ವಯೋಮಾನದವರಿಗೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಆರ್.ಲತಾ ಹೇಳಿದ್ದಾರೆ
ಸಂಭಾವ್ಯ ಕೋವಿಡ್ ಮೂರನೇ ಅಲೆಯನ್ನು ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ಲಸಿಕಾಕರಣವೊಂದೇ ತಡೆಗಟ್ಟುವ ಮಾರ್ಗವಾಗಿದ್ದು
ಜಿಲ್ಲೆಯಾದ್ಯಂತ ಜಿಲ್ಲಾ ಆಸ್ಪತ್ರೆ, ಎಲ್ಲಾ ತಾಲ್ಲೂಕು ಆಸ್ಪತ್ರೆಗಳು, ನಗರ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತು ಆಯ್ದ ಗ್ರಾಮ ಪಂಚಾಯಿತಿಗಳಲ್ಲಿನ ಕೋವಿಡ್ ಲಸಿಕಾ ಕೇಂದ್ರಗಳಲ್ಲಿ ಲಸಿಕಾಕರಣಕ್ಕೆ ಅವಕಾಶ ಮಾಡಿಕೊಡಲಾಗಿದೆ.
ಎರಡನೇ ಡೋಸ್ ಗೆ ಆದ್ಯತೆ ನೀಡಲಾಗಿದ್ದು 18+ ವಯೋಮಾನ ಸೇರಿದಂತೆ ಎಲ್ಲರಿಗೂ ಲಸಿಕೆ ಹಾಕಲಾಗುತ್ತದೆ. ನೆರೆರಾಜ್ಯಗಳಲ್ಲಿ ಬದಲಾಗುತ್ತಿರುವ ಪರಿಸ್ಥಿತಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಪುನರಾವರ್ತನೆಯಾಗುವುದನ್ನ ತಡೆಗಟ್ಟಲು ಸಾರ್ವಜನಿಕರು ಲಸಿಕೆ ಹಾಕಿಸಿಕೊಳ್ಳುವ ಮೂಲಕ ಸಹಕರಿಸಬೇಕಾಗಿದೆ.
ಕಳೆದ ಬಾರಿ ಲಸಿಕಾಕರಣ ಆಯೋಜಿಸಿದ್ದ ಸಂದರ್ಭದಲ್ಲಿ ಸಾರ್ವಜನಿಕರು ನೀಡಿದ ಸಹಕಾರದಿಂದ ರಾಜ್ಯಕ್ಕೆ ಜಿಲ್ಲೆಯು ಮೊದಲ ಸ್ಥಾನ ಪಡೆದಿದ್ದು ಸೋಮವಾರ ನಡೆಯುವ ಲಸಿಕಾ ಮೇಳವನ್ನೂ ಅದೇ ರೀತಿ ಯಶಸ್ವಿಗೊಳಿಸಬೇಕೆಂದು ಜಿಲ್ಲಾಧಿಕಾರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿದರು.
45 ವರ್ಷ ಮೇಲ್ಪಟ್ಟ ಫಲಾನುಭವಿಗಳಿಗೆ ಮತ್ತು 2ನೇ ಡೋಸ್ ಬಾಕಿ ಇರುವ ಫಲಾನುಭವಿಗಳಿಗೆ ಲಸಿಕಾಕರಣ ಮೊದಲ ಆದ್ಯತೆ ನಿಡಲಾಗುವುದು ಎಂದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..