ರಾಯಚೂರು: ರಾಜ್ಯದಲ್ಲಿ ಕೋವಿಡ್-19ರ ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ರಾಜ್ಯಕ್ಕೆ ಸುಮಾರು 1.50 ಕೋಟಿ ಕೋವಿಡ್ ವ್ಯಾಕ್ಸಿನ್ ಬರುತ್ತಿದ್ದು, ಪ್ರತಿಯೊಬ್ಬರು ಲಸಿಕಾ ಕೇಂದ್ರಕ್ಕೆ ಹೋಗಿ ಕೋವಿಡ್ ಲಸಿಕೆಯನ್ನು ಪಡೆಯಬೇಕು. ಅಲ್ಲದೆ ಸಾರ್ವಜನಿಕರಿಗೆ ಲಸಿಕೆ ಕೊಡಿಸುವಲ್ಲಿ ಅಧಿಕಾರಿಗಳು ಶ್ರಮವಹಿಸಬೇಕೆಂದು ವಸತಿ ಮೂಲಭೂತ ಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ಸೂಚಿಸಿದರು.
ಅವರು ಶನಿವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲೆಯ ಪ್ರವಾಹ ಪರಿಸ್ಥಿತಿ ಹಾಗೂ ಕೋವಿಡ್ ನಿರ್ವಹಣೆ ಪರಿಶೀಲನೆಗೆ, ಪ್ರವಾಹ ಪರಿಸ್ಥಿತಿ ಕುರಿತು ನಡೆದ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ನೆರೆ ಹಾಗೂ ಕೋವಿಡ್ ಮೂರನೇ ಅಲೆ ನಿಯಂತ್ರಣಕ್ಕೆ ಸರ್ಕಾರ ದಿಂದ ಮೊದಲ ಆದ್ಯತೆಯಾಗಿದ್ದು, ಕೋವಿಡ್ ನಿಯಂತ್ರಕ್ಕಾಗಿ ತಾಲೂಕ ಮಟ್ಟದಲ್ಲಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ವಾರ್ ರೂಮ್‌ಗಳನ್ನು ಆರಂಭಿಸಲು ಕ್ರಮಕೈಗೊಳ್ಳಲಾಗುತ್ತದೆ ಎಂದರು.
ಮುಂದಿನ ಪ್ರಗತಿ ಪರಿಶೀಲನಾ ಸಭೆಯ ವೇಳೆಯಲ್ಲಿ ಮೂರುದಿಗಳ ಕಾಲ ಜಿಲ್ಲೆಯಲ್ಲಿ ವಾಸ್ತವ್ಯ ಹೂಡಿ ನೆರೆ ಹಾವಳಿಯಿಂದಾಗಿ ಹಾನಿಗೊಳಗಾದ ಪ್ರದೇಶದ ಸೂಕ್ತ ಮಾಹಿತಿಯೊಂದಿಗೆ ಸಭೆಗೆ ಹಾಜರಾಗಬೇಕೆಂದು ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.
ಈ ವೇಳೆ ಜಿಲ್ಲಾಧಿಕಾರಿ ಡಾ.ಬಿ.ಸಿ. ಸತೀಶ್ ಕುಮಾರ್ ಅವರು ಮಾತನಾಡಿ, ಜಿಲ್ಲೆಯ ಭೌಗೋಳಿಕ ಪ್ರದೇಶ, ವಿದ್ಯಾರ್ಥಿ ನಿಲಯ, ಶಾಲೆಗಳು, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೃಷಿ ಮಾರಾಟ ಇಲಾಖೆ, ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಯ ಪ್ರಗತಿವಾರು ಮಾಹಿತಿಯನ್ನು ನೀಡಿದರು.
ಈ ವೇಳೆ ಮಾತನಾಡಿದ ದೇವದುರ್ಗ ಕ್ಷೇತ್ರದ ಶಾಸಕ ಕೆ.ಶಿವನಗೌಡ ನಾಯಕ ಅವರು ಮಾತನಾಡಿ, ನೆರೆ ಪ್ರವಾಹದಿಂದ ಹಾನಿಗೊಳಗಾದ ಹೋಲ-ಗದ್ದೆ, ರಸ್ತೆ, ಸೇತುವೆ ಸೇರಿದಂತೆ ಕಟ್ಟಡ ಕಾಮಗಾರಿಗಳ ದುರಸ್ತಿಗಾಗಿ ಹಾಗೂ ಪರಿಹಾರಕ್ಕೆ ಅಗತ್ಯ ಕ್ರಮವಹಿಸುವಂತೆ ಸಚಿವ ಗಮನಕ್ಕೆ ತಂದರು.
ಈ ವೇಳೆ ಸಿಂಧನೂರು ಕ್ಷೇತ್ರ ಶಾಸಕ ವೆಂಕಟರಾವ್ ನಾಡಗೌಡ, ಲಿಂಗಸೂಗುರು ಕ್ಷೇತ್ರದ ಶಾಸಕ ಡಿ. ಹುಲಿಗೇರಿ, ರಾಯಚೂರು ನಗರ ಕ್ಚೇತ್ರದ ಶಾಸಕ ಡಾ. ಶಿವರಾಜ್ ಪಾಟೀಲ್, ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಶೇಖ್ ತನ್ವೀರ್ ಆಶೀಫ್, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಪ್ರಕಾಶ್ ಅಮೃತ್ ನಿಕ್ಕಂ ವೇದಿಕೆಯಲ್ಲಿ ಇದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..ಆ