ಬೆಂ.ಗ್ರಾ.ಜಿಲ್ಲೆ: ನ್ಯುಮೋನಿಯಾ ಖಾಯಿಲೆಗೆ ಹೆಚ್ಚು ಮಕ್ಕಳು ಸಾವನ್ನಪ್ಪುತ್ತಿರುವುದು ಕಳವಳಕಾರಿ ಸಂಗತಿಯಾಗಿದ್ದು, ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ನ್ಯುಮೋನಿಯಾ ತಡೆಗಟ್ಟುವ ಉದ್ದೇಶದಿಂದ ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ, ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತವಾಗಿ ಲಸಿಕೆ ನೀಡಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ತಿಳಿಸಿದರು.
ವಿಶ್ವ ಆರೋಗ್ಯ ಸಂಸ್ಥೆ, ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿಂದು ನಡೆದ “ನ್ಯುಮೋಕಾಕಲ್ ಕಾಂಜುಗೇಟ್ ಲಸಿಕೆ(ಪಿಸಿವಿ) ಪರಿಚಯಕ್ಕಾಗಿ ಜಿಲ್ಲಾ ಮಟ್ಟದ ಕಾರ್ಯಾಗಾರ”ವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮೊದಲು ಕೇವಲ ಶ್ರೀಮಂತರಿಗೆ ಹಾಗೂ ಖಾಸಗಿ ಆಸ್ಪತ್ರೆಯಲ್ಲಿ ಮಾತ್ರ ಲಭ್ಯವಾಗುತ್ತಿದ್ದ ಈ ಲಸಿಕೆ, ಪ್ರಸ್ತುತ ಅಗತ್ಯವಿರುವ ಎಲ್ಲಾ ಮಕ್ಕಳಿಗೂ ಉಚಿತವಾಗಿ ನೀಡಲಾಗುವುದು ಎಂದರು.
ಜಿಲ್ಲೆಯ ನಾಲ್ಕು ತಾಲ್ಲೂಕುಗಳಲ್ಲಿ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ನ್ಯುಮೋಕಾಕಲ್ ಕಾಂಜುಗೇಟ್ ಲಸಿಕೆ ಕುರಿತು ಉಪನ್ಯಾಸ ಕಾರ್ಯಾಗಾರವನ್ನು ಏರ್ಪಡಿಸುವ ಮೂಲಕ ಸೂಕ್ತ ಮಾಹಿತಿ ನೀಡಬೇಕು ಎಂದರಲ್ಲದೆ, ಸ್ಥಳೀಯ ಸಂಸ್ಥೆಗಳ ಮೂಲಕ ಐಇಸಿ ಚಟುವಟಿಕೆ ನಡೆಸಿ, ಜಿಲ್ಲೆಯ ಜನರಿಗೆ ಲಸಿಕೆ ಕುರಿತು ಅರಿವು ಮೂಡಿಸಬೇಕು ಎಂದು ಸಲಹೆ ನೀಡಿದರು.
ಸಾರ್ವಜನಿಕರೊಂದಿಗೆ ಹೆಚ್ಚು ಒಡನಾಟ ಹೊಂದಿರುವ ಬೀದಿ ಬದಿ ವ್ಯಾಪಾರಿಗಳು ಸೇರಿದಂತೆ ಕೋವಿಡ್ ಲಸಿಕೆಯ ಎರಡನೇ ಡೋಸ್ ಪಡೆಯದೇ ಇರುವವರನ್ನು ಗುರುತಿಸಿ, ವಿಶೇಷ ಅಭಿಯಾನ(ಡ್ರೈವ್)ದ ಮೂಲಕ ಆದ್ಯತೆ ಮೇರೆಗೆ ಲಸಿಕೆ ನೀಡಬೇಕು ಹಾಗೂ ಜಿಲ್ಲೆಯಲ್ಲಿ ಕೋವಿಡ್ ಪರೀಕ್ಷೆಯನ್ನು ಹೆಚ್ಚಿಸುವುದರ ಮೂಲಕ ಕೋವಿಡ್ ಮೂರನೇ ಅಲೆಯೂ ಬರದಂತೆ ತಡೆಯಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಆರ್. ರವಿಕುಮಾರ್ ಅವರು ಮಾತನಾಡಿ, ಕೋವಿಡ್ ಮೊದಲ ಹಾಗೂ ಎರಡನೇ ಅಲೆಯನ್ನು ನಿಯಂತ್ರಿಸುವಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಯಶಸ್ವಿಯಾಗಿದ್ದು, ಅವರ ಸೇವೆ ಶ್ಲಾಘನೀಯವಾದದ್ದು ಎಂದರಲ್ಲದೆ, 75ನೇ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮದಲ್ಲಿ ಕೋವಿಡ್ ನಿಯಂತ್ರಣಕ್ಕೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ವೈದ್ಯರು ಹಾಗೂ ಸಿಬ್ಬಂದಿಯ ಕುರಿತು ಮಾತನಾಡಬೇಕು ಎಂದು ಕೇಂದ್ರ ಸರ್ಕಾರ ಸೂಚನೆ ನೀಡಿರುವುದು ಆರೋಗ್ಯ ಇಲಾಖೆಗೆ ಸೂಚಿಸಿದ ಗೌರವವವಾಗಿದೆ ಎಂದರು.ಅಪರ ಜಿಲ್ಲಾಧಿಕಾರಿ ವಿಜಯಾ.ಈ.ರವಿಕುಮಾರ್ ಅವರು ಮಾತನಾಡಿ, ನ್ಯುಮೋನಿಯಾ ತಡೆಗಟ್ಟಲು ಸರ್ಕಾರದಿಂದಲೇ ಉಚಿತವಾಗಿ ಲಸಿಕೆ ನೀಡಲಾಗುತ್ತಿದ್ದು, ಪೋಷಕರು ಆತಂಕ ಪಡದೆ ಮಕ್ಕಳಿಗೆ ಲಸಿಕೆ ಹಾಕಿಸಿ ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ತೀಪ್ಪೆಸ್ವಾಮಿ ಪಿಸಿವಿ ಲಸಿಕೆ ಕುರಿತು ಮಾಹಿತಿ ನೀಡಿದರು.
ಡಬ್ಲ್ಯೂಎಚ್ಒ ಆರೋಗ್ಯ ಸಲಹೆಗಾರ ಡಾ. ಶ್ರೀನಿವಾಸ್, ಜಿಲ್ಲಾ ಹಿರಿಯ ವೈದ್ಯಾಧಿಕಾರಿ ಡಾ.ಶ್ರೀನಿವಾಸ್, ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಅರುಳ್ ಕುಮಾರ್, ಜಿಲ್ಲಾ ಮಟ್ಟದ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರು, ಪ್ರಾಥಮಿಕ ಮತ್ತು ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು ಸೇರಿದಂತೆ ಆರೋಗ್ಯ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..