ಬೆಂ.ಗ್ರಾ.ಜಿಲ್ಲೆ: ನಿಗದಿತ ಸಮಯಕ್ಕೆ ಗರ್ಭಿಣಿ ಹಾಗೂ ಮಕ್ಕಳಿಗೆ ಅಗತ್ಯವಿರುವ ರೋಗ ನಿರೋಧಕ ಶಕ್ತಿ ಹೆಚ್ಚಿಸುವಂತಹ ಚುಚ್ಚು ಮದ್ದುಗಳನ್ನು ನೀಡುವ ಮೂಲಕ ಅವರನ್ನು ರೋಗಗಳಿಂದ ರಕ್ಷಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ತಿಳಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ನಡೆದ ‘ಜಿಲ್ಲಾ ಮಟ್ಟದ ಲಸಿಕಾ ಕಾರ್ಯಪಡೆಯ ಸಭೆ’ಯ ಅಧ್ಯಕ್ಷತೆ ವಹಿಸಿ, ಅವರು ಮಾತನಾಡಿದರು.
ಲಸಿಕೆ ಪಡೆಯದೇ ಇರುವ ಮಕ್ಕಳನ್ನು ಗುರುತಿಸಿ, ಲಸಿಕೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರಲ್ಲದೆ, ಶೀಘ್ರವೇ ಶಾಲಾ ಕಾಲೇಜುಗಳು ಆರಂಭವಾಗಲಿದ್ದು, ಆರೋಗ್ಯ ಸಿಬ್ಬಂದಿಗಳ ತಂಡಗಳು ಅಂಗನವಾಡಿ ಹಾಗೂ ಶಾಲೆಗಳಿಗೆ ತೆರಳಿ, ಮಕ್ಕಳಿಗೆ ಚುಚ್ಚುಮದ್ದು ನೀಡಬೇಕು ಎಂದು ತಿಳಿಸಿದರು.
ಖಾಸಗಿ ಆಸ್ಪತ್ರೆಗಳು ಗರ್ಭಿಣಿಯರ ವಿವರಗಳನ್ನು ಸರಿಯಾಗಿ ನೋಂದಾಯಿಸಿಕೊಂಡು, ಚುಚ್ಚುಮದ್ದು ನೀಡಬೇಕು ಹಾಗೂ ಅದರ ಮಾಹಿತಿಯನ್ನು ಆರೋಗ್ಯ ಇಲಾಖೆಗೆ ನೀಡಬೇಕು ಎಂದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಮ್ಮಿಕೊಂಡಿರುವ ಎಲ್ಲಾ ಲಸಿಕಾ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದರಲ್ಲದೆ, ನ್ಯುಮೋನಿಯಾ ತಡೆಗಟ್ಟುವ ಉದ್ದೇಶದಿಂದ ತಾಲ್ಲೂಕು ಮಟ್ಟದಲ್ಲಿ ಆರೋಗ್ಯ ಸಿಬ್ಬಂದಿಗಳಿಗೆ ಸೂಕ್ತ ಕಾರ್ಯಗಾರಗಳನ್ನು ಏರ್ಪಡಿಸಬೇಕು ಎಂದು ಸಲಹೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಮುನಿಕೃಷ್ಣಪ್ಪ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಪ್ಪೇಸ್ವಾಮಿ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಶ್ರೀನಿವಾಸ್, ಆಯುಷ್ ಇಲಾಖೆ ವೈದ್ಯಾಧಿಕಾರಿ ಡಾ. ಅಕ್ಕಿಮ್, ಕ್ಷಯ ರೋಗ ನಿರ್ಮೂಲನಾಧಿಕಾರಿ ಡಾ.ನಾಗೇಶ್, ಜಿಲ್ಲಾ ಹಿಂದುಳಿದ ವರ್ಗಗಳ ಇಲಾಖೆ ಉಪ ನಿರ್ದೇಶಕಿ ಭವ್ಯಾ, ಜಿಲ್ಲಾ ಅಲ್ಪಸಂಖ್ಯಾತ ಉಪ ನಿರ್ದೇಶಕ ಮೈಲಾರಪ್ಪ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನಿರೂಪಣಾಧಿಕಾರಿ ವೆಂಕಟರೆಡ್ಡಿ ಹಾಗೂ ತಾಲ್ಲೂಕು ವೈದ್ಯಾಧಿಕಾರಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..