ಬೆಂ.ಗ್ರಾ.ಜಿಲ್ಲೆ: ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕರಪತ್ರಗಳನ್ನು ಹಂಚುವುದು ಮತ್ತು ಐಇಸಿ ಚಟುವಟಿಕೆಯಡಿ ಧ್ವನಿ ಮುದ್ರಿತ (ಆಡಿಯೋ) ಪ್ರಚಾರ ಕೈಗೊಳ್ಳುವ ಮೂಲಕ ಹೆಚ್.ಐ.ವಿ. ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಮೂಲಕ ಹೆಚ್.ಐ.ವಿ. ತಡೆಗಟ್ಟಬಹುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ತಿಳಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ನಡೆದ ಹೆಚ್.ಐ.ವಿ. ಸೋಂಕಿತರಿಗೆ ಸಾಮಾಜಿಕ ಸವಲತ್ತುಗಳ ಕುರಿತು ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಮುಖ್ಯಸ್ಥರ ಸಮನ್ವಯ ಸಭೆಯ ಅಧ್ಯಕ್ಷತೆ ವಹಿಸಿ, ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಒಟ್ಟು 787 ಹೆಚ್.ಐ.ವಿ. ಸೋಂಕಿತರಿದ್ದು ಅವರಿಗೆ ಅಗತ್ಯದ ಚಿಕಿತ್ಸೆ ನೀಡಲಾಗುತ್ತಿದೆ ಎಂದರಲ್ಲದೆ, ಜನಸಂದಣಿ ಹೆಚ್ಚಿರುವ ಪ್ರದೇಶದಲ್ಲಿ ಭಿತ್ತಿಪತ್ರಗಳು ಹಾಗೂ ಜನಪದ ನಾಟಕಗಳ ಮೂಲಕ ಅರಿವು ಮೂಡಿಸಬೇಕು ಎಂದು ತಿಳಿಸಿದರು.
ಹೆಚ್ಚು ಹೆಚ್.ಐ.ವಿ. ಸೋಂಕಿತರಿರುವ ಪ್ರದೇಶದಲ್ಲಿ ವಿಶೇಷ ಕ್ಯಾಂಪ್ಗಳನ್ನು ನಡೆಸಬೇಕು ಹಾಗೂ ಶಾಲಾ – ಕಾಲೇಜು ವಿದ್ಯಾರ್ಥಿಗಳಲ್ಲಿ ಹೆಚ್.ಐ.ವಿ. ಕುರಿತು ಉಪನ್ಯಾಸ ಕಾರ್ಯಕ್ರಮಗಳನ್ನು ಕಡ್ಡಾಯವಾಗಿ ನಡೆಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಹೆಚ್.ಐ.ವಿ. ಸೋಂಕು ಹರಡದಂತೆ ತಡೆಯುವ ನಿಟ್ಟಿನಲ್ಲಿ ಸೋಂಕಿತರಿಗೆ ಅಗತ್ಯ ಚಿಕಿತ್ಸೆ ನೀಡುವುದರಿಂದ ತಾಯಿಯಿಂದ ಮಗುವಿಗೆ ಸೋಂಕು ಹರಡುವಿಕೆ ತಡೆಯಬಹುದು ಹಾಗೂ ಅಗತ್ಯದ ಚಿಕಿತ್ಸೆ ಪಡೆಯುವುದರಿಂದ ಹೆಚ್.ಐ.ವಿ ಸೋಂಕಿತರು ಸಹ ಸಾಮಾನ್ಯರಂತೆ ಜೀವನ ನಡೆಸಬಹುದಾಗಿದ್ದು, ಸೋಂಕಿತರಿಗೆ ಸಿಗಬೇಕಾದ ಎಲ್ಲಾ ಅಗತ್ಯ ಸೌಲಭ್ಯಗಳನ್ನು ಒದಗಿಸುವಂತೆ ಸಂಬಂಧಿಸಿದ ಇಲಾಖಾಧಿಕಾರಿಗಳಿಗೆ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ವಿನುತಾರಾಣಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ತಿಪ್ಪೇಸ್ವಾಮಿ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವ ಘಟಕದ ಸಂಚಾಲಕ ಡಾ.ನಾಗೇಶ್, ಪಶುಸಂಗೋಪನಾ ಇಲಾಖೆಯ ಸಹಾಯಕ ನಿರ್ದೇಶಕ ಅನಿಲ್ ಕುಮಾರ್ ಸೇರಿದಂತೆ ತಾಲ್ಲೂಕು ವೈದ್ಯಾಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……