ಬೆಂ.ಗ್ರಾ.ಜಿಲ್ಲೆ: ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಗಿರಿಜನ ಉಪ ಯೋಜನೆ ಕಾರ್ಯಕ್ರಮಗಳಡಿಯಲ್ಲಿ ಬಿಡುಗಡೆಯಾಗಿರುವ ಹಣವನ್ನು ಜಿಲ್ಲೆಯ ಎಲ್ಲಾ ಇಲಾಖೆಗಳು ಪೂರ್ಣ ಪ್ರಮಾಣದಲ್ಲಿ ಖರ್ಚು ಮಾಡುವ ಮೂಲಕ ಶೇ.100 ರಷ್ಟು ಪ್ರಗತಿ ಸಾಧಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ತಿಳಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಡೆದ ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಗಿರಿಜನ ಉಪ ಯೋಜನೆ ಕಾರ್ಯಕ್ರಮಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಯೋಜನೆಗಳಿಗೆ ಸಂಬಂಧಿಸಿದ ಟೆಂಡರ್ ಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಬೇಕು ಎಂದರು.
ವಿವಿಧ ಯೋಜನೆಗಳಿಗೆ ಫಲಾನುಭವಿಗಳನ್ನು ಆಯ್ಕೆ ಮಾಡುವಾಗ, ಇಲಾಖಾವಾರು ನಿಗದಿಪಡಿಸಲಾದ ಮಾನದಂಡಗಳನ್ನು ಅನುಸರಿಸಿ, ಅರ್ಹ ಫಲಾನುಭವಿಗಳನ್ನು ಗುರುತಿಸುವ ಮೂಲಕ ಯೋಜನೆಗಳನ್ನು ತಲುಪಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ವಿನುತಾರಾಣಿ, ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾ ಉಪ ನಿರ್ದೇಶಕರು ಕೃಷ್ಣಪ್ಪ, ಜಿಲ್ಲಾ ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕಿ ಸುಮ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾ ಅಧಿಕಾರಿ ವೆಂಕಟೇಶ್ ರೆಡ್ಡಿ, ಶಿಕ್ಷಣ ಇಲಾಖೆ ಉಪ ನಿರ್ದೇಶಕ ಗಂಗಮಾರೇಗೌಡ, ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಉಪ ನಿರ್ದೇಶಕ ಡಾ. ನಾಗರಾಜ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..