ಹಾವೇರಿ: ವಿದ್ಯಾರ್ಥಿಗಳಿಗೆ ಜ್ಞಾನದ ಜೊತೆಗೆ ಜೀವನ ಮೌಲ್ಯಗಳ ಬೆಳೆಸಲು ಉತ್ತಮ ಮಾರ್ಗದರ್ಶನ ನೀಡಿ, ಸರ್ವತೋಮುಖ ಬೆಳವಣಿಗೆಗೆ ಶಿಕ್ಷಕರು ಶ್ರಮಿಸಬೇಕು ಎಂದು ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿಗಳಾದ ಬಸವರಾಜ ಹೊರಟ್ಟಿ ಹೇಳಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘದ ತಾಲೂಕಾ ಘಟಕ ಇವರ ಸಹಯೋಗದಲ್ಲಿ ನಗರದ ಗೆಳೆಯರ ಬಳಗ ಪ್ರೌಢಶಾಲೆ ಆವರಣದಲ್ಲಿ ಸೋಮವಾರ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಪ್ರದಾನಮಾಡಿ ಶಿಕ್ಷಕರು ತಮಗೆ ಏರ್ಪಡಿಸಿದ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶಿಕ್ಷಣ ಸಂಸ್ಥೆಗಳು, ಶಿಕ್ಷಣ ಇಲಾಖೆ, ಶಿಕ್ಷಕರು ಒಂದು ಕುಟುಂಬದಂತೆ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.
ಸರ್ಕಾರದಿಂದ ವೇತನ ಪಡೆಯುವ ಪ್ರತಿಯೊಬ್ಬ ಶಿಕ್ಷಕನಮೇಲೂ ಸಮಾಜದ ಋಣವಿದೆ. ನಿ ಆ ಋಣವನ್ನು ತೀರಿಸಲು ಮಕ್ಕಳಿಗೆ ಉತ್ತಮವಾದ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಕೆಲಸಮಾಡಬೇಕು ಎಂದು ಕರೆ ನೀಡಿದರು.
ಸಂಸ್ಕಾರ ಹಾಗೂ ಶಿಕ್ಷಣ ಒಂದು ನಾಣ್ಯದ ಎರಡು ಮುಖಗಳು ಇದ್ದಂತೆ. ವಿದ್ಯಾರ್ಥಿಗಳು ಜ್ಞಾನದ ಜೊತೆಗೆ ಸಂಸ್ಕಾರವನ್ನು ಕಲಿಯಬೇಕು. ತಂದೆ-ತಾಯಿಗಳ ಶ್ರಮವನ್ನು ನೆನಪಿಸಿಕೊಂಡು ವಿದ್ಯಾಭ್ಯಾಸ ಮಾಡಬೇಕು. ತಂದೆ ತಾಯಿಯನ್ನು ಚೆನ್ನಾಗಿ ನೋಡಿಕೊಳ್ಳಬೇಕು ಎಂದು ಹೇಳಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಅಂದಾನೆಪ್ಪ ವಡಗೇರಿ ಮಾತನಾಡಿ, ಕೋವಿಡ್ ಸಂದರ್ಭದಲ್ಲೂ ವಿದ್ಯಾರ್ಥಿಗಳ ಹಾಗೂ ಶಿಕ್ಷಕರ ಪರಿಶ್ರಮದಿಂದ ಜಿಲ್ಲೆಯ 15 ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಸ್ಥಾನಪಡೆದುಕೊಂಡಿದ್ದಾರೆ. ಕೋವಿಡ್ ಸಂದರ್ಭದಲ್ಲಿ ವಿದ್ಯಾರ್ಥಿಗಳ ಕಲಿಕೆ ಹಾವೇರಿ ತಾಲೂಕಿನಲ್ಲಿ ಪರಿಚಯಿಸಲಾದ ವರದಾ ಜ್ಞಾನವಾಹಿನಿ ಯೂಟೂಬ್ ಚಾನಲ್ ಜಿಲ್ಲೆಯಾದ್ಯಂತ ವಿಸ್ತರಿಸಿ ವಿದ್ಯಾರ್ಥಿಗಳ ಕಲಿಕೆಗೆ ಅನುಕೂಲಮಾಡಿಕೊಡಲಾಗುವುದು ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್. ಪಾಟೀಲ ಮಾತನಾಡಿ, ಶಿಕ್ಷಕರು ಇನ್ನೂ ಹೆಚ್ಚು ಶ್ರಮ ವಹಿಸಿ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸುವಂತಹ ಕೆಲಸವನ್ನು ಮಾಡಲಾಗುವುದು ಎಂದು ತಿಳಿಸಿದರು.
ಡಿಡಿಪಿಯು ಉಮೇಶ, ಶಿಕ್ಷಕರ ಸಂಘದ ಪದಾಧಿಕಾರಿಗಳಾದ ಎಂ.ಬಿ.ರಮೇಶ, ಎಚ್.ಪಿ. ಬಣಕಾರ, ಅಭಿವೃದ್ಧಿ ಉಪನಿರ್ದೇಶಕ ಝಡ್.ಎಂ.ಖಾಜಿ, ಜಿ.ಆರ್.ಭಟ್, ಎನ್.ಆಯ್.ಇಚ್ಚಂಗಿ, ಎಂ.ಎಸ್. ಕೆಂಚನಗೌಡ್ರ, ಸುರೇಶ ಮೂಡಲದವರ, ಎಂ.ಎಸ್. ಮರಿಗೌಡ್ರ, ಎನ್.ಎನ್ ಕುಂದೂರ, ಸಾಹಿತಿ ಸತೀಶ ಕುಲಕರ್ಣಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..