ದೊಡ್ಡಬಳ್ಳಾಪುರ: ಕೋವಿಡ್ ಮಾರ್ಗಸೂಚಿ ಪಾಲನೆಯೊಂದಿಗೆ ಶಾಂತಿಯುತವಾಗಿ ಗಣೇಶೋತ್ಸವ ಆಚರಿಸಲು ಡಿವೈಎಸ್ಪಿ ಟಿ.ರಂಗಪ್ಪ ನೇತೃತ್ವದಲ್ಲಿ ಜರುಗಿದ ಶಾಂತಿ ಸಭೆಯಲ್ಲಿ ನಿರ್ಧರಿಸಲಾಯಿತು.
ನಗರ ಪೊಲೀಸ್ ಠಾಣೆ ಆವರಣದಲ್ಲಿ ಬುಧವಾರ ಪೋಲಿಸ್ ಇಲಾಖೆ ಆಯೋಜಿಸಿದ ಗಣೇಶ ಹಬ್ಬದ ಶಾಂತಿ ಸಭೆಯಲ್ಲಿ ತಾಲೂಕಿನ ವಿವಿಧ ಸಮುದಾಯ, ಧರ್ಮಗಳ ಮುಖಂಡರು, ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಭಾಗವಹಿಸಿ ಅಭಿಪ್ರಾಯ ವ್ಯಕ್ತಪಡಿಸಿದರು.
ಡಿವೈಎಸ್ಪಿ ಟಿ.ರಂಗಪ್ಪ ಮಾತನಾಡಿ, ಗಣೇಶ ಚತುರ್ಥಿ ಹಬ್ಬವನ್ನು ಸರಳ ರೀತಿಯಲ್ಲಿ ಸಾಮರಸ್ಯದಿಂದ ಆಚರಿಸಬೇಕು. ಮನುಷ್ಯನ ಆರೋಗ್ಯ ಹಾಗೂ ಪರಿಸರಕ್ಕೆ ಹಾನಿಕಾರಕವಾದ ಪಿಒಪಿ ಮೂರ್ತಿಗಳು ಬಳಸಬಾರದು. ಪರಿಸರ ಸ್ನೇಹಿ ಗಣೇಶ ವಿಗ್ರಹಗಳನ್ನು ಮಾತ್ರ ಪ್ರತಿಷ್ಠಾಪನೆ ಮಾಡಬೇಕು. ಪಿಒಪಿ ಮೂರ್ತಿಗಳ ಮಾರಾಟ ಕಂಡುಬಂದಲ್ಲಿ ಸೀಜ್ ಮಾಡಿ ಕಠಿಣ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.
ಸಾರ್ವಜನಿಕ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲು ಸ್ಥಳೀಯ ಆಡಳಿತದಿಂದ ಕಡ್ಡಾಯವಾಗಿ ಪೂರ್ವಾನುಮತಿ ಪಡೆಯಬೇಕು. ಅನುಮತಿ ಪಡೆಯಲು ನಗರ ತಾಲೂಕು ಕಚೇರಿಯಲ್ಲಿ ಏಕಗವಾಕ್ಷಿ ವ್ಯವಸ್ಥೆಯಡಿ ಅವಕಾಶ ಕಲ್ಪಿಸಿ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಒಂದೆಡೆ ಅನುಮತಿಯನ್ನು ನೀಡುವರು. ಸಾರ್ವಜನಿಕರಿಗೆ ಹಾಗೂ ವಾಹನ ಸಂಚಾರಕ್ಕೆ ಯಾವುದೇ ಅಡ್ಡಿಯಾಗದಂತೆ ಗಣೇಶ ಪ್ರತಿಷ್ಠಾಪನೆ ಮಾಡಬೇಕು. ಸರ್ಕಾರದ ನಿಯಮದಂತೆ ಐದು ದಿನಗಳ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶವಿದೆ ಎಂದು ತಿಳಿಸಿದರು.
ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಹಾಗೂ ವಿಸರ್ಜನೆ ಸಂದರ್ಭದಲ್ಲಿ ಡಿಜೆ ಬಳಸಲು ಅವಕಾಶ ಇರುವುದಿಲ್ಲ. ಗಣೇಶೋತ್ಸವದಲ್ಲಿ ನೃತ್ಯ, ಸಂಗೀತ ಸೇರಿದಂತೆ ಸಾಂಸ್ಕೃತಿಕ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸಲು ಅವಕಾಶವಿರುವುದಿಲ್ಲ. ಗಣೇಶ ಮೂರ್ತಿಗಳನ್ನು ತರುವಾಗ ಹಾಗೂ ವಿಸರ್ಜಿಸುವಾಗ ಮೆರವಣಿಗೆ ಮಾಡುವಂತಿಲ್ಲ. ಈಗಾಗಲೇ ಸರ್ಕಾರದ ಮಾರ್ಗಸೂಚಿಗಳನ್ನು ಪ್ರಕಟಿಸಲಾಗಿದೆ. ಪ್ರತಿಯೊಬ್ಬರೂ ನಿಯಮಗಳನ್ನು ಪಾಲಿಸುವಂತೆ ತಿಳಿಸಿದರು.
ಸರ್ಕಲ್ ಇನ್ಸ್ ಪೆಕ್ಟರ್ ಎಂ.ಬಿ.ನವೀನ್ ಕುಮಾರ್ ಮಾತನಾಡಿ, ದೇವಸ್ಥಾನ ಹಾಗೂ ತಮ್ಮ ತಮ್ಮ ಮನೆಗಳಲ್ಲಿ, ಖಾಸಗಿ ಸಾರ್ವಜನಿಕ ಬಯಲು ಪ್ರದೇಶಗಳಲ್ಲಿ ಕನಿಷ್ಠ ಸಂಖ್ಯೆಯೊಂದಿಗೆ ಗಣೇಶ ಹಬ್ಬ ಆಚರಿಸಬೇಕು. ಗುಂಪುಗೂಡಲು ಅವಕಾಶವಿರುವುದಿಲ್ಲ. ನಿಯಮದಂತೆ ಸಾರ್ವಜನಿಕ ಸ್ಥಳಗಳಲ್ಲಿ ನಾಲ್ಕು ಅಡಿ ಹಾಗೂ ಮನೆಯೊಳಗೆ ಎರಡು ಅಡಿ ಮೀರದಂತೆ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಬೇಕು ಎಂದು ತಿಳಿಸಿದರು.
ಕರೊನಾ ಎರಡನೇ ಅಲೆಯಲ್ಲಿ ಸಂಬಂಧಿಕರು ಹಾಗೂ ಸ್ನೇಹಿತರನ್ನು ಕಳೆದುಕೊಂಡಿದ್ದೇವೆ. ಅಲ್ಲದೆ ಮೂರನೇ ಅಲೆಯ ಆರ್ಭಟ ಹೆಚ್ಚಾಗಿದೆ. ಹೀಗಾಗಿ ಗಣೇಶೊತ್ಸವ ಹಬ್ಬವನ್ನು ಸರ್ಕಾರದ ಮಾರ್ಗಸೂಚಿಯಂತೆ ಸರಳವಾಗಿ ಆಚರಿಸಬೇಕು ಎಂದು ಮನವಿ ಮಾಡಿದರು.
ಸಭೆಯಲ್ಲಿ ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್, ಬೆಸ್ಕಾಂ ಎಇಇ ರೋಹಿತ್, ಮಹಿಳಾ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಶಬರೀಶ್, ನಗರ ಠಾಣೆ ಸಬ್ ಇನ್ಸ್ಪೆಕ್ಟರ್ ಗೋವಿಂದ್, ಅಗ್ನಿಶಾಮಕ ದಳ ಸಿಬ್ಬಂದಿ ಮತ್ತಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..