ಕಲಬುರಗಿ: ಉಕ್ಕಿನ ಮನುಷ್ಯ ಎಂದೇ ಖ್ಯಾತರಾಗಿದ್ದ ಸರ್ದಾರ ವಲ್ಲಭ ಭಾಯ್ ಪಟೇಲರ ತತ್ವಾದರ್ಶಗಳ ಮಾರ್ಗದಲ್ಲಿ ನಾವು ಮುನ್ನಡೆಯುತ್ತಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುಣಗಾನ ಮಾಡಿದರು.
ಕಲ್ಯಾಣ ಕರ್ನಾಟಕ ಉತ್ಸವದ ದಿನದ ಅಂಗವಾಗಿ ನಗರದ ಸರ್ದಾರ ವಲ್ಲಭ ಭಾಯ್ ವೃತ್ತದಲ್ಲಿರುವ ಸರ್ದಾರ ವಲ್ಲಭ ಭಾಯ್ ಪಟೇಲರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿ ಅವರು ಮಾತನಾಡುತ್ತಿದ್ದರು.
ಬಾರ್ದೋಲಿ ಸತ್ಯಾಗ್ರಹದ ಮೂಲಕ ರೈತರಲ್ಲಿ ಜಾಗೃತಿ ಮೂಡಿಸಿ, ಸ್ವಾತಂತ್ರ್ಯ ಹೋರಾಟಕ್ಕೆ ನಾಂದಿ ಹಾಡಿದ ಪಟೇಲರು, ಎಲ್ಲಾ ರಾಜ್ಯಗಳ ಒಕ್ಕೂಟಗಳನ್ನು ಒಂದು ಗೂಡಿಸುವ ಮೂಲಕ ಭಾರತವನ್ನು ಒಂದುಗೂಡಿಸಿದರು ಎಂದು ಅವರು ಹೇಳಿದರು.
71ನೇ ಜನ್ಮದಿನ ಆಚರಿಸಿಕೊಳ್ಳುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಈ ಸಂದರ್ಭದಲ್ಲಿ ಶುಭಕೋರಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಮೋದಿಯವರ ಕನಸಿನ ನವ ಭಾರತದ ನಿರ್ಮಾಣದ ಜೊತೆಗೆ ನವ ಕರ್ನಾಟಕ ಹಾಗೂ ನವ ಕಲ್ಯಾಣ ಕರ್ನಾಟಕ ನಿರ್ಮಾಣ ಮಾಡಬೇಕಿದೆ ಎಂದು ಪ್ರತಿಪಾದಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ, ಯೋಜನೆ, ಕಾರ್ಯಕ್ರಮ ಸಂಯೋಜನೆ ಹಾಗೂ ಸಾಂಖ್ಯಿಕ ಮತ್ತು ತೋಟಗಾರಿಕೆ ಸಚಿವ ಮುನಿರತ್ನ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ದತ್ತಾತ್ರೇಯ ಪಾಟೀಲ್ ರೇವೂರ್, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ರಾಜಕುಮಾರ ಪಾಟೀಲ್ ತೇಲ್ಕೂರ್, ಕಲಬುರಗಿ ಲೋಕಸಭಾ ಸದಸ್ಯ ಡಾ. ಉಮೇಶ ಜಾಧವ, ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ಅಧ್ಯಕ್ಷ ಬಾಬುರಾವ್ ಚಿಂಚಿನಸೂರ, ಅಫಜಲಪೂರ ಶಾಸಕ ಎಂ.ವೈ ಪಾಟೀಲ್, ಕಲಬುರಗಿ ಗ್ರಾಮೀಣ ಶಾಸಕ ಬಸವರಾಜ ಮತ್ತಿಮೂಡ, ಕಲ್ಯಾಣ ಕರ್ನಾಟಕ ಉತ್ಸವ ಸಮಿತಿ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಶಾಸಕ ಶಶೀಲ್ ಜಿ. ನಮೋಶಿ, ವಿಧಾನ ಪರಿಷತ್ ಶಾಸಕ ಬಿ.ಜಿ. ಪಾಟೀಲ್, ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತದ ಅಧ್ಯಕ್ಷ ಚಂದು ಪಾಟೀಲ್, ಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಜಿಲ್ಲಾಧಿಕಾರಿ ವಿ.ವಿ ಜ್ಯೋತ್ಸ್ನಾ ಸೇರಿದಂತೆ ಅನೇಕರು ಇದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..