ದೊಡ್ಡಬಳ್ಳಾಪುರ: ರಕ್ತಕ್ಕೆ ವರ್ಷವಿಡಿ ನಿರಂತರ ಬೇಡಿಕೆ ಇರುತ್ತದೆ. ಜೀವ ಉಳಿಸುವ ರಕ್ತದಾನಕ್ಕೆ ಎಲ್ಲರೂ ಮುಂದಾಗಬೇಕು ಎಂದು ಸಾಸಲು ಗ್ರಾಮಪಂಚಾಯಿತಿ ಪಿಡಿಒ ತಿರುಪತಿ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಇಲಾಖೆ, ತಾಲೂಕು ಆರೋಗ್ಯ ಕೇಂದ್ರ, ಸಾಸಲು ಗ್ರಾಮಪಂಚಾಯಿತಿ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಕೆ.ಸಿ.ಜನರಲ್ ಆಸ್ಪತ್ರೆ ಸಂಯುಕ್ತ ಆಶ್ರಯದಲ್ಲಿ ತಾಲೂಕಿನ ಸಾಸಲು ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಸ್ವಯಂ ಪ್ರೇರಿತ ರಕ್ತದಾನಿಗಳ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ರಕ್ತದಾನ ಅತ್ಯಂತ ಶ್ರೇಷ್ಠ ದಾನ. ರಕ್ತವನ್ನು ನೀಡುವುದರಿಂದ ಇನ್ನೊಬ್ಬರ ಜೀವವನ್ನು ಉಳಿಸಬಹುದು. ಆ ತೃಪ್ತಿಯೂ ನಮಗೆ ಸಿಗುತ್ತದೆ’ ಎಂದರು.
‘ಸಂಘ ಸಂಸ್ಥೆಗಳು ಹಾಗೂ ಸಾರ್ವಜನಿಕರು ಪುಣ್ಯ ಪುರುಷರ ಜಯಂತಿ ಹಾಗು ಇತರ ವಿಶೇಷ ದಿನಗಳಲ್ಲಿ ರಕ್ತದಾನ ಶಿಬಿರ ಆಯೋಜನೆ ಮಾಡುವ ಮೂಲಕ ಸಂಕಷ್ಟದಲ್ಲಿರುವ ಬಡರೋಗಿಗಳಿಗೆ ಸ್ಪಂದಿಸಲು ಮುಂದಾಗಬೇಕು’ ಎಂದು ಸಲಹೆ ನೀಡಿದರು.
ಕಾರ್ಯಕ್ರಮವನ್ನು ಗ್ರಾಮಪಂಚಾಯಿತಿ ಅಧ್ಯಕ್ಷ ಮಾರೇಗೌಡ ಉದ್ಘಾಟಿಸಿದರು.
ಗ್ರಾಮಪಂಚಾಯಿತಿ ಉಪಾಧ್ಯಕ್ಷ ಆನಂದ್, ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ.ವಿನುತಾ ಹಾಗೂ ಕೆ.ಸಿ.ಜನರಲ್ ಆಸ್ಪತ್ರೆಯ ವೈದ್ಯಕೀಯ ಸಿಬ್ಬಂದಿ ಹಾಜರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..