ದೊಡ್ಡಬಳ್ಳಾಪುರ: ಕೇಂದ್ರ ಸರ್ಕಾರದ ವಿವಾದಿತ ಮೂರು ಕೃಷಿ ಕಾಯ್ದೆಯ ವಿರುದ್ಧ ರೈತರು ಸತತ ಒಂದು ವರ್ಷದಿಂದ ಹೋರಾಟ ನಡೆಸುತ್ತಿದ್ದಾರೆ. ಆದರೆ, ರೈತರ ಹೋರಾಟದ ಬಗ್ಗೆ ಕೇಂದ್ರ ಸರ್ಕಾರ ಈವರೆಗೆ ಯಾವುದೇ ಕ್ರಮ ಜರುಗಿಸಿಲ್ಲ. ಅಲ್ಲದೆ, ರೈತರ ಬೇಡಿಕೆಗೂ ಮಣಿಯವ ಯಾವುದೇ ಲಕ್ಷಣ ಕಾಣಿಸುತ್ತಿಲ್ಲ ಎಂದು ಪ್ರಜಾ ವಿಮೋಚನಾ ಚಳುವಳಿ PVC – ಸ್ವಾಭಿಮಾನದ ರಾಜ್ಯಾಧ್ಯಕ್ಷ ಮುನಿಆಂಜನಪ್ಪ ಬೇಸರ ವ್ಯಕ್ತಪಡಿಸಿದರು.
ನಗರದ ತಾಲೂಕು ಕಚೇರಿ ಆವರಣದಲ್ಲಿ ರೈತ ವಿರೋಧಿ ಮೂರು ಕೃಷಿ ಕಾಯ್ದೆಗಳು, ಎಪಿಎಂಸಿ ಕಾಯ್ದೆ, ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ, ಬೆಲೆ ಏರಿಕೆ ಖಂಡಿಸಿ ರೈತರು ಕರೆ ನೀಡಿರುವ ಭಾರತ್ ಬಂದ್ ಬೆಂಬಲಿಸಿ ನಡೆಸಲಾದ ಪ್ರತ್ಯೇಕ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.
ದೇಶದ ಕೃಷಿ ವ್ಯವಸ್ಥೆಯನ್ನೇ ಬುಡಮೇಲು ಮಾಡುವ ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ಇದುವರೆಗೂ ಯಾವುದೇ ರಾಜ್ಯ ಸರ್ಕಾರಗಳು ಜಾರಿಗೊಳಿಸಿಲ್ಲ. ಆದರೆ ರಾಜ್ಯದಲ್ಲಿನ ಬಿಜೆಪಿ ಸರ್ಕಾರ ಮಾತ್ರ ತರಾತುರಿಯಲ್ಲಿ ಕಾಯ್ದೆಗಳನ್ನು ಜಾರಿಗೊಳಿಸುವ ಮೂಲಕ ರೈತ ವಿರೋಧಿ ಆಡಳಿತಕ್ಕೆ ಮುಂದಾಗಿದೆ. ಸದಸ್ಯದಲ್ಲೇ ಕೃಷಿಗೆ ನೀಡಲಾಗುತ್ತಿರುವ ಉಚಿತ ವಿದ್ಯುತ್ ಹಾಗೂ ನೇಕಾರರಿಗೆ ಸಬ್ಸಿಡಿದರದಲ್ಲಿ ನೀಡಲಾಗುತ್ತಿರುವ ವಿದ್ಯುತ್ ಎಲ್ಲವು ಸಹ ಸ್ಥಗಿತಗೊಳ್ಳಲಿವೆ. ವಿದ್ಯುತ್ ವಲಯ ಸಂಪೂರ್ಣವಾಗಿ ಖಾಸಗಿಯವರ ಪಾಲಾಗಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾ ಅಧ್ಯಕ್ಷ ಹನುಮಣ್ಣ ಗೂಳ್ಯ ಮಾತನಾಡಿ, ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳಿಂದ ಕೇವಲ ರೈತರ ಬದುಕು ಮಾತ್ರ ಬೀದಿಗೆ ಬರುವುದಿಲ್ಲ.ಕೃಷಿಯನ್ನು ನಂಬಿ ಜೀವನ ನಡೆಸುತ್ತಿರುವ ಇತರರು ಸಹ ಜೀವನ ನಡೆಸುವುದು ಕಷ್ಟವಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.
ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ತಳಗವಾರ ಪುನಿತ್ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಜನ ವಿರೋಧಿ ನೀತಿಯಿಂದಾಗಿ ಜನತೆ ಬಸವಳಿಯುತ್ತಿದ್ದಾರೆ. ಡೀಸೆಲ್, ಪೆಟ್ರೋಲ್, ಅಡುಗೆ ಅನಿಲ, ಅಡುಗೆ ಎಣ್ಣೆ, ಬೇಳೆ ಸೇರಿದಂತೆ ದಿನ ಬಳಕೆ ವಸ್ತುಗಳ ಬೆಲೆ ಗಗನಕ್ಕೇರಿದ್ದು ಮಧ್ಯಮ ಹಾಗೂ ಬಡ ವರ್ಗದ ಜನತೆ ನರಳುವಂತಾಗಿದೆ ಎಂದರು.
ಈ ವೇಳೆ ತಹಶೀಲ್ದಾರ್ ಟಿ.ಎಸ್.ಶಿವರಾಜ್ ಮೂಲಕ ಹಕ್ಕೊತ್ತಾಯ ಮನವಿ ಪತ್ರವನ್ನು ಪ್ರಧಾನ ಮಂತ್ರಿಯವರಿಗೆ ಕಳುಹಿಸಲಾಯಿತು.
ಬೆಂಗಳೂರು ನಗರ ಅಧ್ಯಕ್ಷ ಆಯುಬ್ ಖಾನ್, ಪ್ರಧಾನ ಕಾರ್ಯದರ್ಶಿ ಚನ್ನ ಮರಿಯಪ್ಪ, ಹೊಸಕೋಟೆ ತಾಲೂಕು ಅಧ್ಯಕ್ಷ ಶಿವಕುಮಾರ್, ಉಪಾಧ್ಯಕ್ಷ ರಾಜಶೇಖರ್, ಮಹಿಳಾ ಘಟಕದ ಅಧ್ಯಕ್ಷೆ ರತ್ನಮ್ಮ, ಕಾರ್ಮಿಕ ಘಟಕದ ಅಧ್ಯಕ್ಷ ಅಶೋಕ್ ಮತ್ತಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……