ದೊಡ್ಡಬಳ್ಳಾಪುರ: ಇಂದು ದೇಶದಲ್ಲಿ ಪ್ರಜಾಪ್ರಭುತ್ವದ ನೆಲೆಗಟ್ಟಿನಲ್ಲಿ ದೇಶ ಪ್ರಗತಿ ಹೊಂದುತ್ತಿದೆ ಎಂದರೆ ಅದು ಗಾಂಧೀಜಿಯವರಂತಹ ಮಹಾಮಹಿಮರ ಕೊಡುಗೆಯಾಗಿದೆ ಎಂದು ಶಾಸಕ ಟಿ.ವೆಂಕಟರಮಣಯ್ಯ ತಿಳಿಸಿದರು.
ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ನಗರದ ತಾಲೂಕು ಕಚೇರಿಯಲ್ಲಿ ನಡೆದ ಮಹಾತ್ಮ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ರಕ್ತ ಕ್ರಾಂತಿಯ ಮೂಲಕ ಸ್ವಾತಂತ್ರ್ಯ ಪಡೆಯುತ್ತಿರುವ ಸಂದರ್ಭದಲ್ಲಿ ಅಹಿಂಸಾತ್ಮಕ ಹೋರಾಟದ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಗಾಂಧೀಜಿಯವರ ಮಾದರಿ ಇಡೀ ವಿಶ್ವದಲ್ಲಿಯೇ ಹೆಸರಾಗಿದೆ. ಸ್ವಾತಂತ್ರ್ಯ ಪೂರ್ವದಲ್ಲಿ ಸಾಕ್ಷರತೆ ಪ್ರಮಾಣ ತೀರಾ ಕಡಿಮೆಯಿತ್ತು. ಆದರೆ ದೇಶದಲ್ಲಿ ಈಗ ಸಾಕ್ಷರತೆ ಪ್ರಮಾಣ ಹೆಚ್ಚಾಗುತ್ತಿದೆ. ದೇಶದಲ್ಲಿದ್ದ ಅನಿಷ್ಟ ಪದ್ಧತಿಗಳನ್ನು ಹೋಗಲಾಡಿಸಿ ಸ್ವಾತಂತ್ರ್ಯದ ಅರ್ಥ ಮೂಡಿಸಿದ ಗಾಂಧಿ ಸದಾ ಸ್ಮರಣೀಯರು ಎಂದರು.
ಉಪವಿಭಾಗಾಧಿಕಾರಿ ಅರುಳ್ ಕುಮಾರ್ ಮಾತನಾಡಿ, ಜಾಗತೀಕರಣದ ಇಂದಿನ ದಿನಗಳಲ್ಲಿ ದೇಶಗಳು ಸ್ವಾತಂತ್ರ್ಯವನ್ನು ಕಳೆದುಕೊಳ್ಳುತ್ತಿವೆ. ಈ ಹಿನ್ನೆಲೆಯಲ್ಲಿ ಗಾಂಧೀಜಿಯವರ ಅಹಿಂಸಾತ್ಮಕ ಹೋರಾಟ ಮತ್ತೆ ಪ್ರಸ್ತುತವಾಗುತ್ತಿದೆ. ಗ್ರಾಮಗಳ ಸಬಲೀಕರಣದಿಂದ ದೇಶದ ಪ್ರಗತಿ ಸಾಧ್ಯ ಎಂದು ಗಾಂಧೀಜಿ ಮನಗಂಡಿದ್ದರು. ಅವರ ಜನ್ಮ ದಿನಾಚರಣೆ ಅಂಗವಾಗಿ ಒಂದು ತಿಂಗಳ ಕಾಲ ಸ್ವಚ್ಛತಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ದೇಶದ ಎರಡನೇ ಪ್ರಧಾನಿಯಾಗಿದ್ದ ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಸರಳ ಸಜ್ಜನಿಕೆಯ ವ್ಯಕ್ತಿಯಾಗಿದ್ದು, ಪ್ರಾಮಾಣಿಕವಾಗಿ ದೇಶದ ಆಡಳಿತ ನಡೆಸಿದರು ಎಂದು ಹೇಳಿದರು.
ಕಾನೂನು ಅರಿವು: ಕಾರ್ಯಕ್ರಮದ ಅಂಗವಾಗಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘದ ಸಹಯೋಗದಲ್ಲಿ ನಡೆದ ಕಾನೂನು ಅರಿವು ಕಾರ್ಯಕ್ರಮದಲ್ಲಿ ಲೋಕ ಅದಾಲತ್‍ಗಳ ಪ್ರಯೋಜನದ ಬಗ್ಗೆ ವಕೀಲರಾದ ಕನಕರಾಜು ಮಾತನಾಡಿ, ಲೋಕ ಅದಾಲತ್‍ನಲ್ಲಿ ರಾಜಿ ಮಾಡಿಕೊಳ್ಳುವ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದಾಗಿದ್ದು, ಕಾನೂನು ಸೇವಾ ಸಮಿತಿ ಇದರ ನೇತೃತ್ವ ವಹಿಸಿದೆ ಎಂದರು.
ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಟಿ.ಎಸ್.ಶಿವರಾಜ್, ಸಮಾಜ ಕಲ್ಯಾಣ ಇಲಾಖೆಯ ತಾಲೂಕು ಉಪ ನಿರ್ದೇಶಕ ಸೋಮಶೇಖರ್, ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಶ್ರೀನಿವಾಸ್, ವಕೀಲರ ಸಂಘದ ಅಧ್ಯಕ್ಷ ಡಿ.ಎಂ.ಬೈರೇಗೌಡ, ಪ್ರಧಾನ ಕಾರ್ಯದರ್ಶಿ ಕೃಷ್ಣಮೂರ್ತಿ, ನಗರಸಭೆ ಸದಸ್ಯರು ಸೇರಿದಂತೆ ವಿವಿಧ ಸಂಘಟನೆಗಳ ಪ್ರಮುಖರು ಭಾಗವಹಿಸಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……..