
ದೊಡ್ಡಬಳ್ಳಾಪುರ: ಇತ್ತೀಚೆಗೆ ಘಾಟಿ ಸುಬ್ರಹ್ಮಣ್ಯ ದೇವಾಲಯದ ಸಮೀಪ ಮದುವೆ ಬಸ್ ಅಪಘಾತದಲ್ಲಿ ಗಾಯಗೊಂಡು, ನಗರದ ಮೇಕ್ ಶಿಫ್ಟ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಆರೋಗ್ಯವನ್ನು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ವಿಚಾರಿಸಿದರು.
ಈ ವೇಳೆ ಜಿಲ್ಲಾಧಿಕಾರಿಯವರಿಗೆ ಮಾಹಿತಿ ನೀಡಿದ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ರಮೇಶ್, ಘಟನೆಯಲ್ಲಿ ಗಾಯಗೊಂಡು ಚಿಕಿತ್ಸೆಗೆ ದಾಖಲಾಗಿದ್ದ 24 ಮಂದಿಯಲ್ಲಿ 19 ಮಂದಿ ಸ್ವಗ್ರಾಮಗಳಿಗೆ ಮರಳಿದ್ದು, ಮೂವರು ಶಸ್ತ್ರಚಿಕಿತ್ಸೆಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದರೆ, ಇಬ್ಬರಿಗೆ ಶಸ್ತ್ರಚಿಕಿತ್ಸೆ ಬಾಕಿ ಉಳಿದಿದೆ ಎಂದು ತಿಳಿಸಿದರು.
ಚಿಕಿತ್ಸೆಗೆ ದಾಖಲಾಗಿರುವವರಿಗೆ ಸೂಕ್ತ ಚಿಕಿತ್ಸೆ ಹಾಗೂ ಊಟದ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಉಪ ವಿಭಾಗಾಧಿಕಾರಿ ಅರುಳ್ ಕುಮಾರ್, ತಹಶೀಲ್ದಾರ್ ಟಿ.ಎಸ್.ಶಿವರಾಜ್ ಇತರೆ ಅಧಿಕಾರಿಗಳು ಇದ್ದರು.
ಘಟನೆ ವಿವರ: ಗೌರಿಬಿದನೂರು ತಾಲೂಕಿನ ಬೆಳಚಿಕ್ಕನಹಳ್ಳಿ ಗ್ರಾಮದವರ ಮದುವೆಯೊಂದು ಘಾಟಿ ಕಲ್ಯಾಣ ಮಂಟಪದಲ್ಲಿ ಕಳೆದ ಶನಿವಾರ – ಮತ್ತು ಭಾನುವಾರ ನಿಗದಿಯಾಗಿತ್ತು. ಈ ಹಿನ್ನೆಲೆಯಲ್ಲಿ ಶನಿವಾರ ಸಂಜೆ ಆರತಕ್ಷತೆಗೆ ಬಂದವರು, ಮರಳಿ ಸ್ವಗ್ರಾಮಕ್ಕೆ ತೆರಳುವಾಗ ಚಾಲಕನ ನಿಯಂತ್ರಣ ತಪ್ಪಿದ ಬಸ್ ಉರುಬಿದ್ದು ದುರ್ಘಟನೆ ಸಂಭವಿಸಿ ಇಬ್ಬರು ಸಾವನಪ್ಪಿ, ಹಲವು ಮಂದಿ ಗಾಯಗೊಂಡಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……