ಚಿಕ್ಕಬಳ್ಳಾಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 66ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಅಂಗವಾಗಿ ಕನ್ನಡ ಭಾಷೆ ಮತ್ತು ನಾಡಿನ ಸಂಸ್ಕೃತಿಯ ಶ್ರೇಷ್ಠತೆಯನ್ನು ಸಾರುವ ನಿಟ್ಟಿನಲ್ಲಿ ಸಾಮೂಹಿಕ ಗೀತ ಗಾಯನ ಜಿಲ್ಲಾ ಮಟ್ಟದ ಕಾರ್ಯಕ್ರಮವು ಗುರುವಾರ ಚಿಕ್ಕಬಳ್ಳಾಪುರ ತಾಲ್ಲೂಕಿನ ಬೋಗನಂದೀಶ್ವರ ದೇವಾಲಯದ ಆವರಣದಲ್ಲಿ ನಡೆಯಿತು.
ಈ ಕಾರ್ಯಕ್ರಮದಲ್ಲಿ ವಿವಿಧ ಕಾಲೇಜಿನ ವಿದ್ಯಾರ್ಥಿಗಳು, ಕಲಾವಿಧರು ವಿವಿಧ ಕನ್ನಡ ಪರ ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು, ಸಾರ್ವಜನಿಕರು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು/ಸಿಬ್ಬಂದಿ ಸಹ ಸಾಮೂಹಿಕ ಕನ್ನಡ ಗೀತ ಗಾಯನಕ್ಕೆ ಧ್ವನಿಗೂಡಿಸಿದರು.
ನಾಡ ಗೀತೆಯನ್ನು ಹಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ನಂತರ ಕನ್ನಡದ ಶ್ರೇಷ್ಠತೆಯನ್ನು ಸಾರುವ ಕುವೆಂಪುರವರ “ಬಾರಿಸು ಕನ್ನಡ ಡಿಂಡಿಮವ” ಮತ್ತು “ಜೋಗದ ಸಿರಿ ಬೆಳಕಿನಲ್ಲಿ ಹಾಗೂ “ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು”, ಈ ಮೂರು ಗೀತೆಗಳನ್ನು ಹಾಡುವ ಸಾಮೂಹಿಕ ಗೀತ ಗಾಯನ ಕಾರ್ಯಕ್ರಮದಲ್ಲಿ ನಗರದ ವಿವಿಧ ಕಾಲೇಜಿನ ವಿದ್ಯಾರ್ಥಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು, ಆಸಕ್ತ ಕಲಾವಿದರು ಮತ್ತು ಸ್ಥಳೀಯ ಜನ ಪ್ರತಿನಿಧಿಗಳು ಸೇರಿದಂತೆ ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಈ ವೇಳೆ ಜಿಲ್ಲಾಧಿಕಾರಿ ಆರ್.ಲತಾ ಕಾರ್ಯಕ್ರಮದಲ್ಲಿ ಭಾಗವಹಿಸಿದವರಿಗೆ ಕನ್ನಡ ಮಾತನಾಡುವ ಹಾಗೂ ಬಳಕೆ ಮಾಡುವ ಬಗ್ಗೆ ಪ್ರತಿಜ್ಞಾವಿಧಿಯನ್ನು ಬೋಧಿಸಿದರು.
ಈ ಸಂಧರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಶಿವಶಂಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಅಪರ ಜಿಲ್ಲಾಧಿಕಾರಿ ಹೆಚ್.ಅಮರೇಶ್, ಕನ್ನಡ ಪರ ಸಂಘಟನೆಗಳ ವಿವಿಧ ಮುಖಂಡರು, ಪದಾಧಿಕಾರಿಗಳು, ಕಲಾವಿಧರು, ವಿವಿಧ ಇಲಾಖೆಯ ಅಧಿಕಾರಿಗಳು/ಸಿಬ್ಬಂದಿ, ವಿವಿಧ ಶಾಲಾ ಕಾಲೇಜುಗಳ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……