ಬೆಂ.ಗ್ರಾ.ಜಿಲ್ಲೆ: ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 17 ಹೋಬಳಿಗಳ ಸರ್ಕಾರಿ ಶಾಲೆಗಳಲ್ಲಿ ಬೋಧನಾ ಸಾಮರ್ಥ್ಯ ಹೆಚ್ಚಿಸಲು ಸ್ಮಾರ್ಟ್ ಪ್ಯಾನಲ್ ಟಿ.ವಿ. ಅಳವಡಿಸಲಾಗಿದ್ದು, ಇದೊಂದು ಕ್ರಾಂತಿಕಾರಿ ಬೆಳವಣಿಗೆಯಾಗಿದ್ದು, ಈ ವ್ಯವಸ್ಥೆಯು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ವರದಾನವಾಗಲಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಹೇಳಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ನಡೆದ ಸ್ಮಾರ್ಟ್ ಪ್ಯಾನಲ್ ಟಿ.ವಿ.ಯ ಮೂಲಕ ವಿದ್ಯಾರ್ಥಿಗಳಿಗೆ ಬೋಧನೆ ಪ್ರಾಯೋಗಿಕ ಕಾರ್ಯಕ್ರಮದ ವಿಡಿಯೋ ಸಂವಾದದಲ್ಲಿ ಭಾಗವಹಿಸಿ, ಅವರು ಮಾತನಾಡಿದರು.
ಸರ್ಕಾರಿ ಶಾಲೆಗಳಿಗೆ ಹೈಟೆಕ್ ಸ್ಪರ್ಶ ನೀಡುವ ಉದ್ದೇಶದಿಂದ ಈ ವಿನೂತನ ಪ್ರಯೋಗ ಮಾಡಲಾಗಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ 17 ಹೋಬಳಿಗಳ ಸರ್ಕಾರಿ ಶಾಲೆಯೊಂದರಲ್ಲಿ ಈ ಸ್ಮಾರ್ಟ್ ಪ್ಯಾನಲ್ ಟಿ.ವಿ. ಯನ್ನು ಅಳವಡಿಸಲಾಗಿದೆ ಎಂದರಲ್ಲದೆ, ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿಗಳ ಮೂಲಕ ರಾಜ್ಯದ ಜನತೆಗೆ ಈ ಕಾರ್ಯಕ್ರಮವನ್ನು ಪರಿಚಯಿಸಲಾಗುವುದು ಎಂದು ತಿಳಿಸಿದರು.
ಸರ್ಕಾರಿ ಶಾಲೆಗಳಲ್ಲೂ ಸ್ಮಾರ್ಟ್ ಪ್ಯಾನಲ್ ಟಿ.ವಿ ಗಳ ಬಳಸುವಂತಾಗಬೇಕು ಹಾಗೂ ಸ್ವತಃ ವಿದ್ಯಾರ್ಥಿಗಳೇ ಪ್ಯಾನಲ್ ಟಿ.ವಿ. ಗಳನ್ನು ಆಪರೇಟ್ ಮಾಡಲು ಕಲಿಯುವ ಮೂಲಕ ಪಠ್ಯಕ್ಕೆ ಪೂರಕವಾದ ಅಗತ್ಯ ಮಾಹಿತಿಯನ್ನು ಪಡೆಯಲಿ ಎಂಬುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದರು.
ಈ ಹೈಟೆಕ್ ಸ್ಮಾರ್ಟ್ ಪ್ಯಾನಲ್ ಟಿ.ವಿ. ಯ ವೈಟ್ ಬೋರ್ಡ್ ಮೂಲಕ ಒಂದೇ ಬಾರಿಗೆ 20 ವಿದ್ಯಾರ್ಥಿಗಳು ಒಟ್ಟಿಗೆ ಬರೆದು ಶೇರ್ ಮಾಡುವ ಸಾಮರ್ಥ್ಯವಿದೆ. ಅಲ್ಲದೆ, ಜಿಲ್ಲೆಯಲ್ಲಿರುವ ನುರಿತ ಹಾಗೂ ಸಂಪನ್ಮೂಲ ಶಿಕ್ಷಕರ ಬೋಧನೆಯನ್ನು ಒಮ್ಮೆಗೆ 17 ಶಾಲೆಯ ಮಕ್ಕಳು ಕೇಳಲು ಇಲ್ಲಿ ಸಾಧ್ಯವಿದೆ ಎಂದು ತಿಳಿಸಿದರು.
ಸ್ಮಾರ್ಟ್ ಪ್ಯಾನಲ್ ಟಿ.ವಿ.ಯೂ ಐದು ವರ್ಷಗಳ ಖಾತರಿ ಹೊಂದಿದ್ದು, ಇದರೊಂದಿಗೆ ನೆಟ್ ವರ್ಕ್ ಗಾಗಿ ಅನ್ ಲಿಮಿಟೆಡ್ ಡೇಟಾ ದೊಂದಿಗೆ ಸಿಮ್ ಪ್ಲಾನ್ ಅನ್ನು ನೀಡಲಾಗಿದೆ ಎಂದು ತಿಳಿಸಿದರು.
ತರಗತಿಗಳು ಪ್ರತಿ ವಾರವು ನಿರಂತರವಾಗಿ ನಡೆಯಲಿದ್ದು, ಮಕ್ಕಳ ಕಲಿಕೆಗೆ ಅನುಕೂಲವಾಗಲಿದ್ದು, ಎಲ್ಲಾ ಸರ್ಕಾರಿ ಶಾಲೆಗಳಿಗೆ ಈ ಸೌಲಭ್ಯ ತಲುಪಬೇಕು. ಇದರಿಂದಾಗಿ ಪ್ರತಿ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಸಹಾಯವಾಗುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮದ ಕುರಿತು ವಿದ್ಯಾರ್ಥಿಗಳು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.
ಕಾರ್ಯಕ್ರಮದಲ್ಲಿ ಪುರಸಭೆ ಅಧ್ಯಕ್ಷೆ ರೇಖಾ ವೇಣುಗೋಪಾಲ್, ಉಪ ವಿಭಾಗಧಿಕಾರಿ ಅರುಳ್ ಕುಮಾರ್, ಶಿಕ್ಷಣ ಇಲಾಖೆ ಉಪ ನಿರ್ದೇಶಕ ಗಂಗಮಾರೇಗೌಡ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಪ ನಿರ್ದೇಶಕ ಮಹೇಶ್.ಎನ್.ಎಸ್., ದೇವನಹಳ್ಳಿ ತಹಶೀಲ್ದಾರ್ ಅನಿಲ್ ಕುಮಾರ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವಿಡಿಯೋ ಸಂವಾದದ ನಂತರ ಶಾಲೆಯಲ್ಲಿಯೇ ವಿದ್ಯಾರ್ಥಿಗಳೊಂದಿಗೆ ಬಿಸಿಯೂಟ ಸೇವಿಸಿದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….