ದೊಡ್ಡಬಳ್ಳಾಪುರ: ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಪತ್ರಕರ್ತರ ಕ್ಷೇಮಾಭಿವೃದ್ದಿ ಟ್ರಸ್ಟ್ ವತಿಯಿಂದ ಅಗಲಿದ ಚೇತನ ನಟ ಪುನೀತ್ ರಾಜಕುಮಾರ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ನಗರ ಪ್ರವಾಸಿ ಮಂದಿರದಲ್ಲಿ ಆಯೋಜಿಸಿದ್ದ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪತ್ರಕರ್ತರು ಪುನೀತ್ ರಾಜ್‍ಕುಮಾರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ಕನ್ನಡ ಚಿತ್ರರಂಗದ ಜನಪ್ರಿಯ ಕಲಾವಿದ, ಸರಳ, ಸಜ್ಜನ ವ್ಯಕ್ತಿತ್ವದ ಪುನೀತ್ ರಾಜಕುಮಾರ್ ಅವರ ಅಗಲಿಕೆ ಇಡೀ ನಾಡನ್ನು ಶೋಕಸಾಗರದಲ್ಲಿ ಮುಳುಗಿಸಿದೆ. ಕನ್ನಡ ಚಿತ್ರರಂಗಕ್ಕೆ ಪುನೀತ್ ರಾಜ್‍ಕುಮಾರ್ ಕೊಡುಗೆ ಅಪಾರವಾಗಿದೆ. ಚಿಕ್ಕ ವಯಸ್ಸಿನಲ್ಲಿಯೇ ಅಸಾಮಾನ್ಯ ಸಾಧನೆ ಮಾಡಿದ್ದ ಪುನೀತ್ ರಾಜ್‍ಕುಮಾರ್ ಅವರ ಅಕಾಲಿಕ ನಿಧನ ಕನ್ನಡ ಚಿತ್ರರಂಗಕ್ಕೆ ಬರಸಿಡಿಲು ಬಡಿದಂತಾಗಿದೆ. ಸಾಮಾಜಿಕ ಕಳಕಳಿ ಹಾಗೂ ಜೀವನ ಮೌಲ್ಯಗಳನ್ನು ಬಿಂಬಿಸುವ ಪುನೀತ್ ರಾಜ್‍ಕುಮಾರ್ ಅವರ ಚಿತ್ರಗಳು ಕುಟುಂಬ ಸಮೇತ ನೋಡುವಂತಹ ಚಿತ್ರಗಳಾಗಿವೆ. ಚಿತ್ರರಂಗದ ಹೊರತಾಗಿ ಸರಳ ಸಜ್ಜನಿಕೆಯ ಮಾನವೀಯ ವ್ಯಕ್ತಿಯಾಗಿದ್ದ ಪುನೀತ್ ರಾಜ್‍ಕುಮಾರ್ ಅವರು, ವೃದ್ದಾಶ್ರಮ, ಅನಾಥಾಶ್ರಮ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿಗಳು ಮೊದಲಾದ ಸಾಮಾಜಿಕ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು ಎಂದು ಹಿರಿಯ ಪತ್ರಕರ್ತರು ಸ್ಮರಿಸಿದರು.
ಈ ವೇಳೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಪತ್ರಕರ್ತರ ಕ್ಷೇಮಾಭಿವೃದ್ದಿ ಟ್ರಸ್ಟ್ ಪದಾಧಿಕಾರಿಗಳು, ಪತ್ರಕರ್ತರು, ವರದಿಗಾರರು ಹಾಜರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……