ದೊಡ್ಡಬಳ್ಳಾಪುರ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪರಿಶಿಷ್ಟ ಜಾತಿಯವರ ಅಭಿವೃದ್ಧಿಗಾಗಿ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳಿಗೆ ಸಂಬಂಧಿಸಿದಂತೆ ಪ್ರಯೋಜನ ಪಡೆಯುವಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಾರ್ವಜನಿಕರು, ಪೋಷಕರು ಹಾಗೂ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳ ಪರಿಹಾರಕ್ಕಾಗಿ “ಫೋನ್-ಇನ್-ನೇರ ಸಂವಾದ ಕಾರ್ಯಕ್ರಮ”ವನ್ನು 2021ರ ನವೆಂಬರ್ 06ರಂದು ಬೆಳಿಗ್ಗೆ 11.30 ಗಂಟೆಯಿಂದ ಮಧ್ಯಾಹ್ನ 1.00 ಗಂಟೆಯವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರ ಕಚೇರಿಯಲ್ಲಿ ಏರ್ಪಡಿಸಲಾಗಿದೆ.

ಸಮಾಜ ಕಲ್ಯಾಣ ಇಲಾಖೆಯ ಯೋಜನೆಗಳ ಶೇ.100 ರಷ್ಟು ಪ್ರಗತಿ ಸಾಧಿಸಲು ಹಾಗೂ ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ 2021ರ ಅಕ್ಟೋಬರ್ 28 ರಿಂದ ನವೆಂಬರ್ 17 ರವರೆಗೆ ರಾಜ್ಯಾದ್ಯಂತ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಇದರಡಿಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ “ಫೋನ್-ಇನ್-ನೇರ ಸಂವಾದ ಕಾರ್ಯಕ್ರಮ”ವನ್ನು ಏರ್ಪಡಿಸಲಾಗಿದೆ.
ಈ ಕಾರ್ಯಕ್ರಮದ ಮೂಲಕ ವಿದ್ಯಾರ್ಥಿ ವೇತನ, ಪ್ರೋತ್ಸಾಹಧನ, ಅಂತರ್‌ಜಾತಿ ವಿವಾಹ, ಸರಳ ವಿವಾಹ, ವಿಧವಾ ವಿವಾಹ, ಒಳಪಂಗಡ ವಿವಾಹ, ದೌರ್ಜನ್ಯದಲ್ಲಿ ನೊಂದ ಸಂತ್ರಸ್ಥರಿಗೆ ಪರಿಹಾರಧನ ವಿತರಣೆ ಮುಂತಾದ ಯೋಜನೆಗಳಿಗೆ ಸಂಬಂಧಿಸಿದ ಸಮಸ್ಯೆಗಳಿಗೆ ಪರಿಹಾರವನ್ನು ಪಡೆಯಬಹುದಾಗಿದೆ.
“ಫೋನ್-ಇನ್-ನೇರ ಸಂವಾದ ಕಾರ್ಯಕ್ರಮ”ವನ್ನು ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಕೊಠಡಿ ಸಂಖ್ಯೆ: 217, ಎರಡನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು, ಪೋಷಕರು ಹಾಗೂ ವಿದ್ಯಾರ್ಥಿಗಳು ದೂರವಾಣಿ ಸಂಖ್ಯೆ: 080-29787447 ಹಾಗೂ ಮೊಬೈಲ್ ಸಂಖ್ಯೆ: 9480843020 ಇಲ್ಲಿಗೆ ಕರೆ ಮಾಡುವ ಮೂಲಕ ತಮ್ಮ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಹೆಚ್.ಕೆ.ಸೋಮಶೇಖರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…