ದೊಡ್ಡಬಳ್ಳಾಪುರ: ಅಪ್ರಾಪ್ತ ವಯಸ್ಸಿನ ಮಕ್ಕಳನ್ನು ದುಡಿಸಿಕೊಳ್ಳುತ್ತಿರುವ ಕುರಿತು ಆರೋಪಿಸಿ, ಮಕ್ಕಳ ಸಹಾಯವಾಣಿಗೆ ಕರೆ ಬಂದ ಹಿನ್ನೆಲೆ, ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆಯ ಅಧಿಕಾರಿಗಳು ಜಂಟಿ ತಪಾಸಣೆ ನಡೆಸಿದರು.
ತಪಾಸಣೆಯ ವೇಳೆ ಐದು ಜನ ಮಕ್ಕಳು ಕಂಡುಬಂದಿದ್ದು, ತಮ್ಮ ಪೋಷಕರಿಗೆ ಸಹಾಯ ಮಾಡಲು ಬಂದಿರುವುದಾಗಿ ಹೇಳಿಕೆಯನ್ನು ನೀಡಿದ ಹಿನ್ನೆಲೆ, ಮಕ್ಕಳ ಶಾಲೆಯ ಮುಖ್ಯೋಪಾಧ್ಯಾಯರಿಗೆ ಸ್ಥಳದಲ್ಲಿಯೇ ದೂರವಾಣಿ ಮುಖಾಂತರ ಸಂಪರ್ಕಿಸಿದ ವೇಳೆ, ಮಕ್ಕಳು ಶಾಲೆಗೆ ದಾಖಲಾಗಿದ್ದು, ಪ್ರತಿನಿತ್ಯ ಶಾಲೆಗಳಿಗೆ ಹಾಜರಾಗುತ್ತಿರುವ ಬಗ್ಗೆ ಖಚಿತಪಡಿಸಿಕೊಳ್ಳಲಾಯಿತು.
ಇದೇ ವೇಳೆ, ಮಕ್ಕಳ ಪೋಷಕರಿಗೆ ಹಾಗೂ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ನೆರೆದಿದ್ದ ಸಾರ್ವಜನಿಕರಿಗೆ ಬಾಲಕಾರ್ಮಿಕ ಕಾಯ್ದೆಯ ಬಗ್ಗೆ ಜಾಗೃತಿಯನ್ನು ಮೂಡಿಸಿ, ಭಿತ್ತಿಪತ್ರಗಳನ್ನು ನೀಡುವ ಮೂಲಕ ಅರಿವು ಮೂಡಿಸಲಾಯಿತು.
ತಪಾಸಣೆಯಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿ ಹೆಚ್.ಆರ್.ನಾಗೇಂದ್ರ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕ ಎಸ್.ಸುಬ್ಬಾರಾವ್, ದೊಡ್ಡಬಳ್ಳಾಪುರ ತಾಲ್ಲೂಕು ಕಾರ್ಮಿಕ ನಿರೀಕ್ಷಕ ಪ್ರದೀಪ್, ಸ್ನೇಹ ಭಾರತಿ ಸಂಸ್ಥೆಯ ಧರಣೇಶ್, ಸೇರಿದಂತೆ ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……