ಬೆಂ.ಗ್ರಾ.ಜಿಲ್ಲೆ: ವಿದೇಶಗಳಲ್ಲಿ ಒಮಿಕ್ರಾನ್ ರೂಪಾಂತರಿ ತಳಿಯ ವೈರಸ್ ವ್ಯಾಪಕವಾಗಿ ಹಬ್ಬುತ್ತಿರುವ ಹಿನ್ನೆಲೆ, ದೇವನಹಳ್ಳಿ ತಾಲ್ಲೂಕಿನಲ್ಲಿರುವ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಭೇಟಿ ನೀಡಿ, ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆಯಿಂದ ಕೈಗೊಳ್ಳಲಾಗಿರುವ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಪರಿಶೀಲನೆ ನಡೆಸಿ, ಅವರು ಮಾತನಾಡಿದರು.
ಬೋಟ್ಸ್‌ವಾನ್ ದೇಶದಲ್ಲಿ ಬಿ.1.1.529 ಎಂಬ ಹೊಸ ವೈರಸ್ ಪತ್ತೆಯಾಗಿದ್ದು, ವಿದೇಶಗಳಲ್ಲಿ ವೇಗವಾಗಿ ಹರಡುತ್ತಿರುವುದರಿಂದ, ರಾಜ್ಯ ಸರ್ಕಾರವು ಮುನ್ನೆಚ್ಚರಿಕೆಯಾಗಿ ನವೆಂಬರ್ 26ರಂದು ಮಾರ್ಗದರ್ಶನ ನೀಡಿರುವ ಹಿನ್ನೆಲೆ, ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಂತರರಾಷ್ಟ್ರೀಯ ಪ್ರಯಾಣಿಕರ ಮೇಲೆ ತೀವ್ರ ನಿಗಾ ವಹಿಸಲಾಗಿದೆ ಎಂದರಲ್ಲದೆ, ವೈದ್ಯರು ಹಾಗೂ ಸ್ಟಾಫ್ ನರ್ಸ್‌ಗಳ ತಂಡವು ದಿನದ 24 ಗಂಟೆಗಳ ಕಾಲ ಪ್ರಯಾಣಿಕರನ್ನು ಮಾನಿಟರಿಂಗ್ ಮಾಡುತ್ತಿದ್ದಾರೆ ಎಂದು ತಿಳಿಸಿದರು.
ದಕ್ಷಿಣ ಆಫ್ರಿಕಾ ಸೇರಿದಂತೆ ಹೈರಿಸ್ಕ್ ದೇಶಗಳ ಪಟ್ಟಿಯಲ್ಲಿರುವ ಹತ್ತು ದೇಶಗಳಿಂದ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಪ್ರಯಾಣಿಕರಿಗೆ ಕೋವಿಡ್-19 ಪರೀಕ್ಷೆ ಕಡ್ಡಾಯಗೊಳಿಸಲಾಗಿದೆ ಎಂದರಲ್ಲದೆ, ಉಳಿದ 94 ದೇಶಗಳಿಂದ ಆಗಮಿಸುವ ಪ್ರಯಾಣಿಕರು ಎರಡು ಡೋಸ್ ಕೋವಿಡ್ ಲಸಿಕೆ ಪಡೆದಿರಬೇಕು ಎಂದರು.
ಹೈರಿಸ್ಕ್ ದೇಶಗಳ ಪಟ್ಟಿಯಲ್ಲಿರುವ ಹತ್ತು ದೇಶಗಳಿಂದ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇವರೆಗೂ 584 ಪ್ರಯಾಣಿಕರು ಆಗಮಿಸಿದ್ದು, ಇದರಲ್ಲಿ 94 ಜನರು ದಕ್ಷಿಣ ಆಫ್ರಿಕಾದಿಂದ ಆಗಮಿಸಿದ್ದಾರೆ. 94 ಜನರ ಪೈಕಿ ಇಬ್ಬರಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ವೈರಸ್‌ನ ತಳಿ ಕಂಡುಹಿಡಿಯಲು ಟೆಸ್ಟಿಂಗ್‌ಗೆ ಕಳುಹಿಸಲಾಗಿದೆ ಎಂದು ತಿಳಿಸಿದರು.
ಇಬ್ಬರು ಸೋಂಕಿತರನ್ನು ಬೆಂಗಳೂರು ನಗರದಲ್ಲಿರುವ ಖಾಸಗಿ ಹೋಟೆಲ್‌ಗಳಲ್ಲಿ ಕ್ವಾರಂಟೈನ್‌ನಲ್ಲಿರಿಸಲಾಗಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಇವರ ಮೇಲೆ ನಿಗಾ ವಹಿಸಿದ್ದಾರೆ ಎಂದು ತಿಳಿಸಿದರು.
ಈ ವೇಳೆ ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಪ್ಪೇಸ್ವಾಮಿ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಶ್ರೀನಿವಾಸ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಧರ್ಮೇಂದ್ರ, ದೇವನಹಳ್ಳಿ ತಹಶೀಲ್ದಾರ್ ಅನಿಲ್‌ಕುಮಾರ್ ಅರೋಲಿಕರ್ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……
ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….