ದೊಡ್ಡಬಳ್ಳಾಪುರ: ವಿಧಾನ ಪರಿಷತ್ತಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡಿದೆ ಎನ್ನುವ ಊಹಾಪೋಹಗಳು ಎದ್ದಿದ್ದು, ಮತದಾರರು ಗೊಂದಲಕ್ಕೊಳಗಾಗಬಾರದು. ಯಾರೊಂದಿಗೂ ಮೈತ್ರಿ ಮಾಡಿಕೊಳ್ಳದೇ ತಾವು ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದು, ಕಣದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ವಿಧಾನ ಪರಿಷತ್ ಬಿಜೆಪಿ ಅಭ್ಯರ್ಥಿ ಬಿ.ಸಿ.ನಾರಾಯಣಸ್ವಾಮಿ ಹೇಳಿದ್ದಾರೆ.
ಅವರು ನಗರದ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ರಾಷ್ಟ್ರಮಟ್ಟದಲ್ಲಿ ಪ್ರಧಾನಿ ಮೋದಿ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಭೇಟಿ ಮಾಡಿರುವುದು ಸೌಹಾರ್ದವಷ್ಟೆ. ರಾಜ್ಯದಲ್ಲಿ ಯಡಿಯೂರಪ್ಪ ಅವರನ್ನು ಎಚ್.ಡಿ.ಕುಮಾರಸ್ವಾಮಿ ಭೇಟಿ ಮಾಡಿ ಮೈತ್ರಿ ಬಗ್ಗೆ ಮಾತನಾಡಿದ್ದಾರೆ ಎಂದು ಹೇಳುತ್ತಾ, ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಹಿಂದೆ ಸರಿಯುತ್ತಿದ್ದಾರೆ ಎಂದು ಗಾಳಿ ಮಾತು ಹಬ್ಬಿಸುತ್ತಿದ್ದಾರೆ. ನಮಗೆ ಕುಮಾರಸ್ವಾಮಿ ಅವರ ಮೇಲೆ ಗೌರವವಿದೆ. ಆದರೆ ಅವರ ಪಕ್ಷದ ಮತ ಹಾಗೂ ಪ್ರಚಾರ ಅವರದ್ದು, ನಮ್ಮ ಪ್ರಚಾರ ಹಾಗೂ ಮತಗಳು ನಮ್ಮದು. ಇದರಲ್ಲಿ ಯಾವುದೇ ಹೊಂದಾಣಿಕೆಯಿಲ್ಲ. ಪ್ರಸ್ತುತ ಜೆಡಿಎಸ್ ಅಭ್ಯರ್ಥಿ ರಮೇಶ್ ಗೌಡ ಅವರಿಗೆ ಇನ್ನೂ 1.5 ವರ್ಷ ಕಾಲಾವಕಾಶವಿದೆ. ಹಾಗಾಗಿ ರಾಷ್ಟ್ರೀಯ ಪಕ್ಷವಾದ ನಮಗೆ ಅವರೇ ಬೆಂಬಲಿಸಲಿ. ಕ್ಷೇತ್ರದಲ್ಲಿ ಎಲ್ಲಿಯೂ ಬಿಜೆಪಿ ಶಾಸಕರಿಲ್ಲ. ಹಾಗಾಗಿ ವಿಧಾನ ಪರಿಷತ್ ಸದಸ್ಯರ ಅಗತ್ಯ ಇದೆ. ಹೊಂದಾಣಿಕೆ ಬಗ್ಗೆ ಅಪಪ್ರಚಾರ ಮಾಡುತ್ತಿದ್ದು, ಮತದಾರರು ಕಿವಿಗೊಡಬಾರದು. ವಿಧಾನ ಪರಿಷತ್ ಕ್ಷೇತ್ರಕ್ಕೆ ಎರಡು ಬಾರಿ ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾಗಿದ್ದ ರವಿ ಅವರ ಕೊಡುಗೆ ಕ್ಷೇತ್ರಕ್ಕೆ ಏನು ಇಲ್ಲದಾಗಿದೆ. ಸ್ಥಳೀಯ ಸಂಸ್ಥೆಗಳಾದ ಗ್ರಾಮ ಪಂಚಾಯಿತಿ ಹಾಗೂ ನಗರಸಭೆಗಳಿಗೆ ಬಿಜೆಪಿ ಅಕಾರಾವಯಲ್ಲಿ ಹೆಚ್ಚಿನ ಅನುದಾನ ಹಾಗೂ ಅಕಾರವನ್ನು ನೀಡಲಾಗಿದೆ.ಮುಂದೆಯೂ ಹೆಚ್ಚಿನ ಅನುದಾನಗಳನ್ನು ನೀಡಲು ಶ್ರಮಿಸಲಾಗುವುದು ಎಂದರು.
ಸುದ್ದಿಗೋಷ್ಠಿಯಲ್ಲಿ ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಟಿ.ವಿ.ಲಕ್ಷ್ಮೀನಾರಾಯಣ್, ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಶಿವಾನಂದ ರೆಡ್ಡಿ, ಜಿಲ್ಲಾ ಬಿಜೆಪಿ ಕಾರ್ಯಾಲಯದ ವ್ಯವಸ್ಥಾಪಕ ಮಂಜುನಾಥ್ ಮತ್ತಿತರರು ಹಾಜರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….