ಬೆಳಗಾವಿ: ರಾಜ್ಯ ಸರ್ಕಾರದ ಗುಪ್ತಚರ ಇಲಾಖೆ ಸಂಪೂರ್ಣ ವೈಫಲ್ಯ ಅನುಭವಿಸಿದ್ದು, ಸರ್ಕಾರಕ್ಕೆ ಆಡಳಿತದ ಮೇಲೆ ಹಿಡಿತ ಇಲ್ಲ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಬೆಳಗಾವಿಯ ಹನಗೋಳದಲ್ಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆ ಸ್ಥಳಕ್ಕೆ ಭೇಟಿ ನೀಡಿ ಪುಷ್ಪನಮನ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಯನ್ನು ವಿರೂಪಗೊಳಿಸಿರುವುದು ಖಂಡನೀಯ. ಎಂಇಎಸ್‍ನ ಪುಂಡರಿಗೆ ಕಾನೂನು ಇಲ್ಲ. ಯಾವ ನಿಯಮಗಳೂ ಇಲ್ಲ. ಆ ಸಂಘಟನೆಯನ್ನು ನಿಷೇಧ ಮಾಡಬೇಕು ಎಂದು ಜನರು ಒತ್ತಾಯ ಮಾಡಲು ಆರಂಭಿಸಿದ್ದಾರೆ. ನಾವು ಈ ಬಗ್ಗೆ ವಿಧಾನಮಂಡಲದಲ್ಲಿ ಚರ್ಚೆ ಮಾಡುತ್ತೇವೆ ಎಂದರು.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟು ಹೋಗಿದೆ. ಅಧಿಕಾರಿಗಳು ಸಚಿವರು, ಮುಖ್ಯಮಂತ್ರಿಗಳ ಮಾತು ಕೇಳುತ್ತಿಲ್ಲ. ಆಡಳಿತದ ಮೇಲೆ ಹಿಡಿತ ಇಲ್ಲವಾಗಿದೆ. ಹೀಗಾಗಿಯೇ ಕಾನೂನು ಸುವ್ಯವಸ್ಥೆ ಕೂಡ ಹದಗೆಟ್ಟಿದೆ ಎಂದು ಸಿದ್ದರಾಮಯ್ಯ ಆರೋಪಿಸಿದರು.
ಸಂಗೊಳ್ಳಿ ರಾಯಣ್ಣ ಒಂದು ಜಾತಿಗೆ ಸೀಮಿತವಾದ ನಾಯಕರಲ್ಲ. ಅವರ ಪ್ರತಿಮೆಯನ್ನು ಭಗ್ನಗೊಳಿಸುರುವುದು ವಿಕೃತ ಮನೋಭಾವ. ಎಂಇಎಸ್‍ನ ಪುಂಡರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕಿದೆ. ಅವರು ಬಹಿರಂಗವಾಗಿ ಆಯುಧಗಳನ್ನು ಹಿಡಿದುಕೊಂಡು ಸುತ್ತಾಡುತ್ತಿದ್ದಾರೆ. ಯಾವುದೇ ಭಯ ಇಲ್ಲವಾಗಿದೆ.
ಈಗ ಕನ್ನಡ ಪರ ಸಂಘಟನೆಗಳು ಪ್ರತಿಭಟನೆಗಿಳಿದಿವೆ. ಅವರಿಗೆ ಪ್ರತಿಭಟನೆ ಮಾಡುವ ಹಕ್ಕಿದೆ. ಅನ್ಯಾಯವನ್ನು ಪ್ರತಿಭಟಿಸಲು ತಡೆಯಬಾರದು ಎಂದು ಒತ್ತಾಯಿಸಿದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….