ಬೆಂ.ಗ್ರಾ.ಜಿಲ್ಲೆ: ಅನಕ್ಷರತೆ, ಆರ್ಥಿಕ ದುರ್ಬಲತೆ ಹಾಗೂ ವಲಸೆಯಂತಹ ಸಮಸ್ಯೆಗಳಿಂದಾಗಿ ಮಾನವ ಕಳ್ಳಸಾಗಾಣಿಕೆಯಂತಹ ಹೀನ ಕೃತ್ಯಗಳು ನಡೆಯುತ್ತಿದ್ದು, ಮಾನವ ಕಳ್ಳಸಾಗಾಣಿಕೆ ಮುಕ್ತ ಸಮಾಜ ನಿರ್ಮಾಣಕ್ಕೆ ಅಧಿಕಾರಿಗಳೊಂದಿಗೆ ಸಾರ್ವಜನಿಕರು ಕೈಜೋಡಿಸಬೇಕೆಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ತಿಳಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿಂದು ನಡೆದ ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಗಟ್ಟುವಿಕೆ ಕುರಿತು “ಕ್ರಮಬದ್ಧ ಕಾರ್ಯವಿಧಾನ ಮಾರ್ಗಸೂಚಿಗಳ ಕಾರ್ಯಾಗಾರ” ಮತ್ತು ಬಾಲ್ಯ ವಿವಾಹದಿಂದ ಆಗುವ ದುಷ್ಪರಿಣಾಮಗಳು ಹಾಗೂ ತಡೆಗಟ್ಟುವ ಕ್ರಮಗಳ ಬಗ್ಗೆ ಅರಿವು ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ, ಅವರು ಮಾತನಾಡಿದರು.
ಜನರು ಕೆಲಸವನ್ನು ಅರಸುತ್ತಾ ವಲಸೆ ಹೋಗುವುದನ್ನು ತಡೆಯಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಜಾಬ್ ಕಾರ್ಡ್ ನೀಡಿ, ಉದ್ಯೋಗ ಒದಗಿಸುತ್ತಿರುವುದು ಉತ್ತಮ ಕಾರ್ಯ ಎಂದರಲ್ಲದೆ, ದೇವದಾಸಿ ಪದ್ಧತಿಗೆ ಒಳಗಾದ ಮಹಿಳೆಯರನ್ನು ರಕ್ಷಿಸುವ ಉದ್ದೇಶದಿಂದ ಹಾಗೂ ಅವರನ್ನು ಸಶಕ್ತಗೊಳಿಸಲು ಮಾಶಾಸನ ನೀಡಲಾಗುತ್ತಿದೆ ಎಂದು ಹೇಳಿದರು.
ಸಮಾಜ ಘಾತುಕವಾಗಿರುವ ಮೂಢನಂಬಿಕೆಗಳ ಅಡಿಯಲ್ಲಿ ನಡೆಯುವಂತಹ ಬಾಲ್ಯವಿವಾಹಗಳ ನಿಷೇಧದ ಬಗ್ಗೆ ಜಿಲ್ಲೆಯ ಪ್ರತಿಯೊಂದು ಶಾಲೆಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಕಡ್ಡಾಯವಾಗಿ ಏರ್ಪಡಿಸಿ, ಸಾಧಕ-ಭಾದಕಗಳ ಬಗ್ಗೆ ಮಕ್ಕಳಲ್ಲಿ ಮೊದಲು ಅರಿವು ಮೂಡಿಸುವ ಕೆಲಸವಾಗಬೇಕು ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ರೇವಣಪ್ಪ ಅವರು, ಮಾನವ ಕಳ್ಳಸಾಗಾಣಿಕೆಗೆ ತಡೆಗಟ್ಟಲು ಕೇಂದ್ರ ಸರ್ಕಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಒಬ್ಬ ರಕ್ಷಣಾಧಿಕಾರಿ ಹುದ್ದೆ ಸೃಜನೆ ಮಾಡಿ, ಪೊಲೀಸ್ ಇಲಾಖೆಯ ನೆರವಿನೊಂದಿಗೆ ಎಫ್.ಐ.ಆರ್. ದಾಖಲಿಸಿ, ತನಿಖೆ ಕೈಗೊಳ್ಳಲು ಆದೇಶಿಸಿದ್ದಾರೆಂದು ಹೇಳಿದರು.
ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ಧತಿ ಹಾಗೂ ಮಾನವ ಕಳ್ಳಸಾಗಾಣಿಕೆ ಕುರಿತು ಅರಿವು ಮೂಡಿಸುವಲ್ಲಿ ಸರ್ಕಾರೇತರ ಸಂಸ್ಥಗಳ ಪಾತ್ರ ಪ್ರಮುಖವಾಗಿದ್ದು, ಆಶಾ ಕಾರ್ಯಕರ್ತೆಯರ ಮೂಲಕ ಬಾಲ್ಯ ವಿವಾಹದ ದುಷ್ಪರಿಣಾಮಗಳ ಬಗ್ಗೆ ಜನರಿಗೆ ಮತ್ತು ಶಾಲೆಗಳಲ್ಲಿ ಬೀದಿ ನಾಟಕಗಳ ಮೂಲಕ ಜಾಗೃತಿ ಮೂಡಿಸಬೇಕು ಎಂದರು.
ಅಪರ ಜಿಲ್ಲಾಧಿಕಾರಿ ವಿಜಯ.ಈ.ರವಿಕುಮಾರ್ ಅವರು ಮಾತನಾಡಿ, ಮಾನವ ಕಳ್ಳಸಾಗಾಣಿಕೆ ಒಂದು ಸಂಘಟಿತ ಅಪರಾಧವಾಗಿದ್ದು, ದುರ್ಬಲ, ಅಶಕ್ತ, ಅನಕ್ಷರಸ್ಥ ಹಾಗೂ ಕೊಳಚೆ ಪ್ರದೇಶಗಳಲ್ಲಿ ವಾಸಿಸುವ ಮಹಿಳೆಯರು, ಮಕ್ಕಳು ಇಂತಹ ಜಾಲಕ್ಕೆ ಒಳಗಾಗುತ್ತಿದ್ದು, ಅವರ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಗಟ್ಟುವಿಕೆ, ಬಾಲ್ಯವಿವಾಹದ ನಿಷೇಧ ಮತ್ತು ಮಕ್ಕಳ ರಕ್ಷಣೆಯ ಬಗ್ಗೆ ಜಿಲ್ಲೆಯ ನಾಲ್ಕು ತಾಲ್ಲೂಕುಗಳಲ್ಲಿನ ಸಾರ್ವಜನಿಕ ಆಸ್ಪತ್ರೆ, ಮದುವೆ ಮಂಟಪ, ಶಾಲೆ, ಸಮುದಾಯ ಭವನ, ಬಸ್‌ನಿಲ್ದಾಣ, ಸರ್ಕಾರಿ ಕಚೇರಿ, ಸಿನಿಮಾ ಮಂದಿರ, ನ್ಯಾಯಬೆಲೆ ಅಂಗಡಿ ಮತ್ತು ಗ್ರಾಮ ಪಂಚಾಯತಿಗಳಲ್ಲಿ ಅರಿವು ಮೂಡಿಸಿ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಮುನಿಕೃಷ್ಣಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎ.ತಿಪ್ಪೇಸ್ವಾಮಿ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ರಾಮು ಜೋಗಿಹಳ್ಳಿ, ಜಿಲ್ಲಾ ಮಟ್ಟದ ಸ್ಥಳೀಯ ದೂರು ನಿವಾರಣಾ ಸಮಿತಿ ಅಧ್ಯಕ್ಷ ಅಮಲಿ ನಾಯಕ್, ಸಂಪನ್ಮೂಲ ವ್ಯಕ್ತಿಗಳಾಗಿ ಸ್ಟೇಟ್ ಹೈ ಪವರ್ ಕಮಿಟಿ ಆನ್ ಹ್ಯೂಮನ್ ಟ್ರ್ಯಾಪಿಕಿಂಗ್ ಸದಸ್ಯೆ ಡಾ.ಮೀನಾ ಜೈನ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಪ್ಯಾರಾ ಲೀಗಲ್ ಸದಸ್ಯೆ ಚಿನ್ನಮ್ಮ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಪ ನಿರ್ದೇಶಕ ಎಸ್.ನಟರಾಜ್, ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ಜಗದೀಶ್, ಸಾಂತ್ವನ, ಉಜ್ವಲಾ, ಸ್ವಧಾರ್ ಎನ್.ಜಿ.ಓ.ಗಳ ಸಿಬ್ಬಂದಿಗಳು ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….