ಬೆಂ.ಗ್ರಾ.ಜಿಲ್ಲೆ: ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯ ಪ್ರಗತಿಯಲ್ಲಿದ್ದು, ಸಂಬಂಧಿಸಿದ ಅಧಿಕಾರಿಗಳು ಸಮರ್ಪಕ ನಿರ್ವಹಣೆ ಮಾಡುವ ಮೂಲಕ ದೋಷಮುಕ್ತ ಮತದಾರರ ಪಟ್ಟಿ ಸಿದ್ಧಪಡಿಸಲು ಅಗತ್ಯ ಕ್ರಮ ವಹಿಸಬೇಕೆಂದು ಸಕಾಲ ಮಿಷನ್‌ನ ಹೆಚ್ಚುವರಿ ನಿರ್ದೇಶಕರು ಹಾಗೂ ಬೆಂಗಳೂರು ಗ್ರಾಮಾಂತರ ಮತದಾರರ ಪಟ್ಟಿ ವೀಕ್ಷಕರಾದ ಡಾ. ಬಿ.ಆರ್.ಮಮತ ಅವರು ಹೇಳಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿಂದು ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ, ಅವರು ಮಾತನಾಡಿದರು.
ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಕೈಗೊಳ್ಳಲಾಗುತ್ತಿದ್ದು, ಜನವರಿ 1, 2022 ಅನ್ನು ಅರ್ಹತಾ ದಿನಾಂಕವನ್ನು ಆಧರಿಸಿ ಈ ದಿನಾಂಕಕ್ಕೆ 18 ವರ್ಷ ಪೂರೈಸುವವರ ಹೆಸರನ್ನು ನೋಂದಣಿ, ತಿದ್ದುಪಡಿ, ಒಂದು ಮತಕ್ಷೇತ್ರದಿಂದ ಮತ್ತೊಂದು ಮತಕ್ಷೇತ್ರಕ್ಕೆ ವರ್ಗಾವಣೆ, ನಮೂನೆ 6, 7, 8 ಹಾಗೂ 8 ಎ ಮೂಲಕ ಸಾರ್ವಜನಿಕರು ಅರ್ಜಿ ಸಲ್ಲಿಸಬಹುದಾಗಿದೆ ಎಂದು ತಿಳಿಸಿದರು.
ಡಿಸೆಂಬರ್ 27ರವರೆಗೆ ಹಕ್ಕು ಮತ್ತು ಆಕ್ಷೇಪಣೆಗಳ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದ್ದು, ಅಂತಿಮ ಮತದಾರರ ಪಟ್ಟಿಯನ್ನು 2022ರ ಜನವರಿ 13ರಂದು ಪ್ರಕಟಿಸಲಾಗುವುದು ಎಂದು ತಿಳಿಸಿದರು.
ನೆಲಮಂಗಲ ಹಾಗೂ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಮತದಾರರ ಪಟ್ಟಿಗೆ ನೋಂದಣಿ ಹಾಗೂ ತಿದ್ದುಪಡಿ ಕೋರಿ ಸಲ್ಲಿಕೆಯಾಗಿರುವ ಅರ್ಜಿಗಳ ಪೈಕಿ, ಹೆಚ್ಚು ಅರ್ಜಿಗಳು ಬಾಕಿ ಉಳಿದಿದ್ದು, ಶೀಘ್ರ ವಿಲೇವಾರಿ ಮಾಡುವಂತೆ ತಿಳಿಸಿದರಲ್ಲದೆ, ಹಕ್ಕು ಮತ್ತು ಆಕ್ಷೇಪಣೆ ಹಂತದಲ್ಲಿ ಯಾವುದೇ ತರಹದ ನ್ಯೂನ್ಯತೆಗಳು ಗಮನಕ್ಕೆ ಬಂದಲ್ಲಿ, ಆಯಾ ತಾಲ್ಲೂಕಿನ ತಹಶೀಲ್ದಾರರು ಶೀಘ್ರವಾಗಿ ಕ್ರಮ ಕೈಗೊಳ್ಳುವಂತೆ ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ವಿಜಯ.ಈ.ರವಿಕುಮಾರ್, ಉಪವಿಭಾಗಾಧಿಕಾರಿ ಅರುಳ್ ಕುಮಾರ್ ಹಾಗೂ ದೊಡ್ಡಬಳ್ಳಾಪುರ ತಹಶೀಲ್ದಾರ್ ಟಿ.ಎಸ್.ಶಿವರಾಜ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಸಭೆಯ ನಂತರ ಅರ್ಜಿ ವಿಲೇವಾರಿ ಹೆಚ್ಚಿರುವ ಹೊಸಕೋಟೆ ತಾಲ್ಲೂಕಿನ ಗಾಣಿಗರ ಪೇಟೆ ಮತ್ತು ಕಿಲಾರಿಪೇಟೆ ಹಾಗೂ ಕಡಿಮೆ ಅರ್ಜಿ ವಿಲೇವಾರಿ ಮಾಡಲಾಗಿರುವ ಅತ್ತಿಬೆಲೆ ಮತಗಟ್ಟೆ ಪ್ರದೇಶದಕ್ಕೆ ಬೆಂಗಳೂರು ಗ್ರಾಮಾಂತರ ಮತದಾರರ ಪಟ್ಟಿ ವೀಕ್ಷಕರಾದ ಡಾ.ಬಿ.ಆರ್.ಮಮತ ಅವರು ಭೇಟಿ ನೀಡಿ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಸಮರ್ಪಕವಾಗಿ ನಡೆಯುತ್ತಿರುವ ಬಗ್ಗೆ ಪರಿಶೀಲಿಸಿದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….