ಬೆಂ.ಗ್ರಾ.ಜಿಲ್ಲೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇ. 96 ರಷ್ಟು ಮೊದಲ ಡೋಸ್ ಹಾಗೂ ಶೇ. 86 ರಷ್ಟು ಎರಡನೇ ಡೋಸ್ ಕೋವಿಡ್ ಲಸಿಕಾ ಪ್ರಗತಿ ಸಾಧಿಸಲಾಗಿದ್ದು, ಜಿಲ್ಲಾಡಳಿತ, ವೈದ್ಯಾಧಿಕಾರಿಗಳ ತಂಡ ಹಾಗೂ ಆಶಾ ಕಾರ್ಯಕರ್ತೆಯರು ಸಹಕಾರದಿಂದ ಕಾರ್ಯ ನಿರ್ವಹಿಸುವ ಮೂಲಕ ಲಸಿಕೆ ಪಡೆಯದವರಿಗೆ ಲಸಿಕೆ ನೀಡಿ, ಶೇಕಡಾ ನೂರರಷ್ಟು ಲಸಿಕಾ ಪ್ರಗತಿ ಸಾಧಿಸಬೇಕು ಎಂದು ಪೌರಾಡಳಿತ ಮತ್ತು ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವರಾದ ಎನ್.ನಾಗರಾಜು (ಎಂ.ಟಿ.ಬಿ) ಅವರು ತಿಳಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದಲ್ಲಿರುವ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿಂದು ನಡೆದ “15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮ”ಕ್ಕೆ ಚಾಲನೆ ನೀಡಿ, ಅವರು ಮಾತನಾಡಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 15 ರಿಂದ 18 ವರ್ಷದೊಳಗಿನ 48,865 ಮಕ್ಕಳಿಗೆ ಲಸಿಕೆ ನೀಡಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದ್ದು, ದೇವನಹಳ್ಳಿ ತಾಲ್ಲೂಕಿನಲ್ಲಿ 10414, ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 15022, ಹೊಸಕೋಟೆ ತಾಲ್ಲೂಕಿನಲ್ಲಿ 13148 ಹಾಗೂ ನೆಲಮಂಗಲ ತಾಲ್ಲೂಕಿನಲ್ಲಿ 10281 ಮಕ್ಕಳಿಗೆ ಕೋವಿಡ್ ಲಸಿಕೆ ನೀಡಲು ಕ್ರಮ ವಹಿಸಲಾಗಿದೆ ಎಂದರು.
15 ವರ್ಷ ಮೇಲ್ಪಟ್ಟ ಹಾಗೂ 18 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ಲಸಿಕೆ ನೀಡುವ ಮೂಲಕ ಮಕ್ಕಳನ್ನು ಕೋವಿಡ್ ಸೋಂಕಿನಿಂದ ಸುರಕ್ಷಿತರನ್ನಾಗಿಸುವುದು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಉದ್ದೇಶವಾಗಿದೆ.
ಮಹಾರಾಷ್ಟ್ರ, ದೆಹಲಿಯಲ್ಲಿ ಕೋವಿಡ್ ಸೋಂಕು ಉಲ್ಬಣಗೊಂಡಿದ್ದು, ದಿನೇ ದಿನೇ ರಾಜ್ಯದಲ್ಲಿಯೂ ಸಾವಿರಾರು ಕೋವಿಡ್ ಪ್ರಕರಣಗಳು ದಾಖಲಾಗುತ್ತಿರುವುದರಿಂದ ಜಾಗ್ರತೆ ವಹಿಸುವುದು ಅಗತ್ಯವಾಗಿದೆ ಎಂದು ಹೇಳಿದರು.
ಕೋವಿಡ್ ಎರಡನೇ ಅಲೆಯ ಸಂದರ್ಭದಲ್ಲಿ ಯುವಕರು, ವಯಸ್ಕರು ಸೇರಿದಂತೆ ರಾಜ್ಯದಲ್ಲಿ 48 ಸಾವಿರ ಜನರು ಸಾವನ್ನಪ್ಪಿದ್ದು, ಅಪಾರ ಸಾವು ನೋವು ಸಂಭವಿಸಿರುವುದರಿಂದ, ಮುನ್ನೆಚ್ಚರಿಕೆಯಾಗಿ ಯುವಜನತೆಗೆ ಲಸಿಕೆಯನ್ನು ನೀಡಲಾಗುತ್ತಿದೆ ಎಂದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವಾರು ಸಭೆಗಳನ್ನು ನಡೆಸಿ, ಕೇಂದ್ರ ಸರ್ಕಾರದ ನಿಯಮಾವಳಿ ಹಾಗೂ ಸೂಚನೆಗಳಂತೆ ರಾಜ್ಯದಲ್ಲಿ 37 ಲಕ್ಷ ವಿದ್ಯಾರ್ಥಿಗಳಿಗೆ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಲಾಗಿದೆ ಎಂದು ಹೇಳಿದರು.
ಮೂರನೇ ಅಲೆ ಎದುರಿಸಲು ಅಗತ್ಯ ವೈದ್ಯಕೀಯ ತಯಾರಿಯೊಂದಿಗೆ, ಮುಂಜಾಗ್ರತೆಯಿಂದ ಜಿಲ್ಲಾಡಳಿತದೊಂದಿಗೆ ಎಲ್ಲಾ ಇಲಾಖೆಗಳ ಅಧಿಕಾರಿಗಳು ಕೈಜೋಡಿಸಿ, ಮಹಾಮಾರಿ ಕೋವಿಡ್ ಸೋಂಕನ್ನು ನಿಯಂತ್ರಣಕ್ಕೆ ತರಲು ಶ್ರಮಿಸಬೇಕು ಎಂದು ತಿಳಿಸಿದರು.
ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯು ಆರೋಗ್ಯ ಕ್ಷೇತ್ರದಲ್ಲಿ ಬಹುಮುಖ್ಯ ಯೋಜನೆಯಾಗಿದ್ದು, ರೋಗಿಗಳು ತಮ್ಮ ಪಡಿತರ ಚೀಟಿ ಮತ್ತು ಆಧಾರ್ ಕಾರ್ಡ್‌ನೊಂದಿಗೆ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಹೋದರೆ, ಅದೇ ಸರ್ಕಾರಿ ಆಸ್ಪತ್ರೆಯು ಚಿಕಿತ್ಸೆ ನೀಡುವ ಸಾಮರ್ಥ್ಯ ಹೊಂದಿದ್ದಲ್ಲಿ ಅಲ್ಲಿಯೇ ರೋಗಿಗೆ ಚಿಕಿತ್ಸೆ ನೀಡಲಾಗುತ್ತದೆ. ಸರ್ಕಾರಿ ಆಸ್ಪತೆಯು ಚಿಕಿತ್ಸೆ ನೀಡುವ ಸಾಮರ್ಥ್ಯವನ್ನು ಹೊಂದಿಲ್ಲದಿದ್ದರೆ, ರೆಫರಲ್ ಪಡೆದುಕೊಂಡ ರೋಗಿಯು ತಾನು ಇಚ್ಛಿಸುವ ಯಾವುದೇ ನೋಂದಾಯಿತ ಖಾಸಗಿ ಅಥವಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬಹುದು ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ನಿಸರ್ಗ ನಾರಾಯಣಸ್ವಾಮಿ ಅವರು ಲಸಿಕೆ ಹಾಗೂ ಮುಂಜಾಗ್ರತಾ ಕ್ರಮಗಳು ಮಾತ್ರ ಜನರನ್ನು ಕೋವಿಡ್ ಮಹಾಮಾರಿಯಿಂದ ಸಂರಕ್ಷಿಸಲು ಸಾಧ್ಯ. ಕಳೆದ ಎರಡು ವರ್ಷ, ದೇಶ ಹಾಗೂ ರಾಜ್ಯದ ಪ್ರಗತಿಯ ವೇಗವನ್ನು ತಡೆದಿರುವ ಕೋವಿಡ್ ಸೋಂಕು, ಮಾನವ ಕುಲಕ್ಕೆ ದೊಡ್ಡ ಸಮಸ್ಯೆಯಾಗಿ ಮಾರ್ಪಾಡಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ದೇವನಹಳ್ಳಿ ಪುರಸಭೆ ಸದಸ್ಯರಾದ ಮುನಿಕೃಷ್ಣ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ರೇವಣಪ್ಪ, ಅಪರ ಜಿಲ್ಲಾಧಿಕಾರಿ ವಿಜಯ.ಈ.ರವಿಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ತಿಪ್ಪೇಸ್ವಾಮಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಗಂಗಮಾರೇಗೌಡ ಹಾಗೂ ಇತರೆ ಗಣ್ಯರು ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….