ದೊಡ್ಡಬಳ್ಳಾಪುರ: ಮೇಕೆದಾಟು ಯೋಜನೆಯನ್ನು ಶೀಘ್ರವಾಗಿ ಆರಂಭಿಸಬೇಕೆಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಲು, ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ಜ.9ರಿಂದ ಹಮ್ಮಿಕೊಂಡಿರುವ ಪಾದಯಾತ್ರೆಯಲ್ಲಿ ದೊಡ್ಡಬಳ್ಳಾಪುರದಿಂದ ಸಹಸ್ರಾರು ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಶಾಸಕ ಟಿ.ವೆಂಕಟರಮಣಯ್ಯ ತಿಳಿಸಿದ್ದಾರೆ.
ನಗರದ ಪ್ರವಾಸಿ ಮಂದಿರದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ನಡೆದ ಮೇಕೆದಾಟಿಗೆ ಪಾದಯಾತ್ರೆ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಕುರಿತು ಮಾಹಿತಿ ನೀಡಿದ ಅವರು, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೆ.ಸಿ.ವ್ಯಾಲಿ, ಎಚ್.ಎನ್.ವ್ಯಾಲಿ ಯೋಜನೆ ಜಾರಿಗೆ ತರಲಾಗಿದೆ. ಬಿಜೆಪಿ ಸರ್ಕಾರ ಬಂದ ನಂತರ ಯೋಜನೆಗೆ ವೇಗ ಸಿಗಲಿಲ್ಲ, ನೀರಾವರಿ ಯೋಜನೆಗಳು ಅನುಷ್ಠಾನಗೊಳ್ಳಬೇಕಾದರೆ, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಬೇಕಿದೆ. ಮೇಕೆದಾಟು ಯೋಜನೆಗೆ 2013ರಲ್ಲಿಯೇ ಸಮಗ್ರ ಕ್ರಿಯಾ ಯೋಜನೆ ಸಿದ್ದವಾಗಿತ್ತು. ಆದರೆ ಬಿಜೆಪಿ ಸರ್ಕಾರ ಈ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಿದೆ.
ನಮ್ಮ ನೀರು, ನಮ್ಮ ಹಕ್ಕು ಮೇಕೆದಾಟಿಗೆ ಪಾದಯಾತ್ರೆ ಜ.9ರಂದು ಮೇಕೆದಾಟು ಬಳಿ ಆರಂಭವಾಗಿ ಜ.19ರಂದು ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಸಮಾರೋಪಗೊಳ್ಳಲಿದೆ.
ಜ.18ರಂದು ತಾಲೂಕಿನಿಂದ 3ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು, ಸಾರ್ವಜನಿಕರು ಪಾದಯಾತ್ರೆಯಲ್ಲಿ ಪಕ್ಷಾತೀತವಾಗಿ ಭಾಗವಹಿಸಲಿದ್ದಾರೆ. ಪಾದಯಾತ್ರೆಯಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಲಾಗುವುದು. ಪಾದಯಾತ್ರೆಗೆ ನಿರ್ಬಂಧ ಹೇರಿದರೆ, ಕಾಂಗ್ರೆಸ್ ವರಿಷ್ಟರು ಮುಂದಿನ ತೀರ್ಮಾನಗಳನ್ನು ಕೈಗೊಳ್ಳಲಿದ್ದಾರೆ ಎಂದರು.
ಎಂಎಸ್‍ಜಿಪಿ ವಿರೋಧಿಸಿ ಉಪವಾಸ ಸತ್ಯಾಗ್ರಹ: ತಾಲೂಕಿನ ಚಿಗರೇನಹಳ್ಳಿ ಬಳಿಯ ಎಂಎಸ್‍ಜಿಪಿ ಬಿಬಿಎಂಪಿ ಕಸ ವಿಲೇವಾರಿ ಘಟಕವನ್ನು ಸ್ಥಗಿತಗೊಳಿಸುವಂತೆ ಸರ್ಕಾರವನ್ನು ಒತ್ತಾಯಿಸಲಾಗುತ್ತಿದೆ.
ಈ ಬಗ್ಗೆ ಪ್ರತಿಭಟನೆಗಳನ್ನು ಮಾಡಲಾಗಿದೆ. ಮುಖ್ಯಮಂತ್ರಿಗಳ ಬಳಿಗೆ ನಿಯೋಗ ತೆರಳುವಂತೆ ಜಿಲ್ಲಾ ಉಸ್ತುವಾರಿ ಸಚಿವರು ಭರವಸೆ ನೀಡಿದ್ದರೂ ಇನ್ನೂ ಯಾವುದೇ ಪ್ರಕ್ತಿಯೆಗಳಾಗಿಲ್ಲ. ಈ ಹಿಂದೆ ಟೆರ್ರಾಫರ್ಮಾ ಘಟಕ ನಿಲ್ಲಿಸುವ ಕುರಿತು ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿ 6 ತಿಂಗಳಲ್ಲಿ ಘಟಕವನ್ನು ನಿಲ್ಲಿಸಿದ್ದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜ.20ರೊಳಗೆ ಸೂಕ್ತ ನಿರ್ಧಾರ ತಿಳಿಸದಿದ್ದರೆ, ತಾಲೂಕಿನ ವಿವಿಧ ಸಂಘಟನೆಗಳು ಹಾಗೂ ಗ್ರಾಮಸ್ಥರೊಡಗೂಡಿ ಉಪವಾಸ ಸತ್ಯಾಗ್ರಹ ಕೈಗೊಳ್ಳಲಾಗುವುದು ಎಂದರು.
ಈ ವೇಳೆ ಕಾಂಗ್ರೆಸ್ ತಾಲೂಕು ಘಟಕದ ಅಧ್ಯಕ್ಷ ಬೈರೇಗೌಡ, ನಗರ ಘಟಕದ ಅಧ್ಯಕ್ಷ ಕೆ.ಪಿ.ಜಗನ್ನಾಥ್, ಎಪಿಎಂಸಿ ಅಧ್ಯಕ್ಷ ವಿಶ್ವನಾಥರೆಡ್ಡಿ, ಟಿಎಪಿಎಂಸಿಎಸ್ ನಿರ್ದೇಶಕ ಗೋವಿಂದರಾಜು, ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್, ಮುಖಂಡರಾದ ಶಶಿಧರ್, ಅಪ್ಪಿ ವೆಂಕಟೇಶ್, ಕೆಂಪೇಗೌಡ, ಮುನಿನಾರಾಯಣಪ್ಪ ಮೊದಲಾದವರು ಹಾಜರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….