ಬೆಂಗಳೂರು: ಶಾಲೆಗಳಿಂದ ಕೋವಿಡ್ ಸೋಂಕು ಹರಡುತ್ತದೆ ಎಂದು ಎಲ್ಲೂ ಸಾಬೀತಾಗಿಲ್ಲ. ಆ ಕಾರಣ ರಾಜ್ಯವ್ಯಾಪಿ ಶಾಲೆಗಳನ್ನು ಮುಚ್ಚುವ ಪ್ರಸ್ತಾಪ ಇಲ್ಲ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಮಾತ್ರ ಕೋವಿಡ್ ಸೋಂಕು ಹೆಚ್ಚಾಗಿದೆ. ಹೀಗಾಗಿ ಇಲ್ಲಿ ಮಾತ್ರ ಶಾಲೆ ಬಂದ್ ಮಾಡಿದ್ದೇವೆ. ಆದರೆ ರಾಜ್ಯದ ಇತರ ಭಾಗಗಳಲ್ಲಿ ಇದೇ ಪರಿಸ್ಥಿತಿ ಇಲ್ಲ. ಪಾಸಿಟಿವಿಟಿ ಹೆಚ್ಚಿರುವ ಜಿಲ್ಲೆಗಳಲ್ಲಿ ಭೌತಿಕ ತರಗತಿ ಸ್ಥಗಿತಗೊಳಿಸಿ ಆನ್‌ಲೈನ್ ತರಗತಿ ನಡೆಸುತ್ತೇವೆ ಎಂದು ಹೇಳಿದ್ದಾರೆ.
ತಾಲೂಕು ಮಟ್ಟದಲ್ಲಿ ಪಾಸಿಟಿವಿಟಿ ದರ ಹೆಚ್ಚಾದರೆ ಶಾಲೆಯನ್ನು ಮುಚ್ಚುವ ಬಗ್ಗೆ ಆಯಾ ಜಿಲ್ಲಾಧಿಕಾರಿಗಳು ನಿರ್ಧಾರ ತೆಗೆದುಕೊಳ್ಳುತ್ತಾರೆ. ಶಾಲೆಗಳಿಂದ ಕೋವಿಡ್ ಹಬ್ಬುತ್ತದೆ ಎಂಬ ಬಗ್ಗೆ ಯಾವುದೇ ಅಧ್ಯಯನ ವರದಿ ಇಲ್ಲ ಎಂದು ಹೇಳಿದರು.
ಶಾಲೆಯಲ್ಲಿ ಕೋವಿಡ್ ಸೋಂಕು ದೃಢವಾದರೆ ಆ ಶಾಲೆಯನ್ನು ತಾತ್ಕಾಲಿಕವಾಗಿ ನಾಲ್ಕು ದಿನ ಮುಚ್ಚಬಹುದು. ಆದರೆ ಇಡಿ ರಾಜ್ಯದಲ್ಲಿ ಶಾಲಾ ತರಗತಿ ಬಂದ್ ಮಾಡುವ ಪರಿಸ್ಥಿತಿ ಸದ್ಯಕ್ಕೆ ಇಲ್ಲ. ಶಾಲೆಗೆ ಮಕ್ಕಳನ್ನು ಕಳುಹಿಸಲು ಪೋಷಕರು ಉತ್ಸುಕರಾಗಿದ್ದಾರೆ ಎಂದು ಹೇಳಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….