ಬೆಂ.ಗ್ರಾ.ಜಿಲ್ಲೆ: ರಾಜ್ಯದಲ್ಲಿ ಕೋವಿಡ್-19 ರೂಪಾಂತರಿ ‘ಓಮಿಕ್ರೋನ್ ವೈರಾಣು ಸೋಂಕು ಹರಡುತ್ತಿರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರವು ಪೂರ್ವಭಾವಿಯಾಗಿ ಹೆಚ್ಚುವರಿ ನಿಯಂತ್ರಣ ಕ್ರಮಗಳನ್ನು ಜಾರಿಗೊಳಿಸಿದ್ದು, ಪ್ರತಿ ದಿನ ರಾತ್ರಿ 10 ರಿಂದ ಮರುದಿನ ಬೆಳಿಗ್ಗೆ 5 ಗಂಟೆಯವರೆಗೆ ರಾತ್ರಿ ಕರ್ಫ್ಯೂವನ್ನು ಹಾಗೂ ಶುಕ್ರವಾರ ರಾತ್ರಿ 10 ಗಂಟೆಯಿಂದ ಸೋಮವಾರ ಬೆಳಿಗ್ಗೆ 5.00 ಗಂಟೆಯವರೆಗೆ ವಾರಾಂತ್ಯದ ಕರ್ಫ್ಯೂವನ್ನು
ಜಾರಿಗೊಳಿಸಲಾಗಿದ್ದು, ಕರ್ಪ್ಯೂ ಅವಧಿಯಲ್ಲಿ ಆಗತ್ಯ ಸೇವೆ ಹೊರತುಪಡಿಸಿ ಇತರ ಎಲ್ಲಾ ವ್ಯಕ್ತಿಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ ಹಾಗೂ ಜನವರಿ 15ರಂದು ಮಕರ ಸಂಕ್ರಾಂತಿ ಹಬ್ಬದ ಆಚರಣೆಯ ಸಂದರ್ಭದಲ್ಲಿ ಸಾರ್ವಜನಿಕರು ಕೋವಿಡ್-19 ವೈರಾಣು ನಿಯಂತ್ರಣ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ತಿಳಿಸಿದ್ದಾರೆ.
ಸಂಕ್ರಾಂತಿ ಹಬ್ಬದ ಪ್ರಯುಕ್ತ ದೇವಾಲಯದ ಶಾಸ್ತ್ರ ಸಂಪ್ರದಾಯದಂತೆ ದೇವಾಲಯಗಳ ಒಳ ಆವರಣದಲ್ಲಿ ಮಾತ್ರ ದೈನಂದಿನ ಪೂಜಾ ಕೈಂಕರ್ಯಗಳನ್ನು ನಡೆಸಲು ಅನುಮತಿಸಲಾಗಿದೆ.
ಹಬ್ಬಗಳ ಆಚರಣೆಯ ಸಲುವಾಗಿ ಯಾವುದೇ ರೀತಿಯ ಮರವಣಿಗೆ, ಮನೋರಂಜನಾ ಕಾರ್ಯಕ್ರಮಗಳು ಇತ್ಯಾದಿಗಳನ್ನು ಆಯೋಜಿಸುವಂತಿಲ್ಲ.
ಈ ಕ್ರಮಗಳನ್ನು ಉಲ್ಲಂಘಿಸುವ ಯಾವುದೇ ಆಡಳಿತ ಮಂಡಳಿ/ ಟ್ರಸ್ಟ್‌ಗಳು ಭಾರತ ದಂಡ ಸಂಹಿತೆಯ 188ನೇ ಪ್ರಕರಣದಡಿ ಹಾಗೂ ಅನ್ವಯವಾಗಬಹುದಾದ ಇತರ ಕಾನೂನು
ಉಪಬಂಧಗಳಡಿಯಲ್ಲಿನ ಕಾನೂನು ಕ್ರಮದ ಜೊತೆಗೆ ವಿಪತ್ತು ನಿರ್ವಹಣಾ ಅಧಿನಿಯಮ, 2005ರ ಸೆಕ್ಷನ್ 51 ರಿಂದ 60ರನ್ವಯ ಕಾನೂನು ಕ್ರಮಕ್ಕೆ ಒಳಪಡಿಸಲಾಗುವುದೆಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….