ದೊಡ್ಡಬಳ್ಳಾಪುರ: ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ವಿ.ಆಂಜನಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಕಾಂಗ್ರೆಸ್,ಜೆಡಿಎಸ್ ಹೊಂದಾಣಿಕೆಯೊಂದಿಗೆ ಆಡಳಿತ ನಡೆಸುತ್ತಿರುವ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದಲ್ಲಿ ಒಂದುವರೆ ವರ್ಷಗಳಿಂದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಡಿ.ಸಿದ್ದರಾಮಯ್ಯ ಅಧ್ಯಕ್ಷರಾಗಿದ್ದರು. ಪೂರ್ವ ನಿಗದಿತ ಒಪ್ಪಂದದಂತೆ ಮಂಗಳವಾರ ಅಧ್ಯಕ್ಷ ಸ್ಥಾನಕ್ಕೆ ವಿ.ಆಂಜನಗೌಡ ಆಯ್ಕೆಯಾಗಿದ್ದಾರೆ.
ಅಧ್ಯಕ್ಷ ಸ್ಥಾನ ಸ್ವೀಕರಿಸಿದ ಮಾತನಾಡಿದ ವಿ.ಆಂಜನಗೌಡ, ತಾಲ್ಲೂಕಿನ ಹಿರಿಯ ರಾಜಕೀಯ ನಾಯಕರು ಸ್ಥಾಪನೆ ಮಾಡಿರುವ ಸಂಘವು ಇಂದು ಇಡೀ ಜಿಲ್ಲೆಯಲ್ಲಿಯೇ ಲಾಭದಾಯಕವಾಗಿ ನಡೆಯುತ್ತಿರುವ ಸಂಸ್ಥೆಯಾಗಿದೆ. ರೈತರು ಸೇರಿದಂತೆ ಎಲ್ಲಾ ವರ್ಗದವರಿಗು ನ್ಯಾಯಯುತ ಬೆಲೆಯಲ್ಲಿ ದಿನಸಿ, ಔಷಧಿ ಸೇರಿದಂತೆ ಹಲವಾರು ಸೇವೆಗಳನ್ನು ನೀಡುತ್ತಿದೆ. ಸಂಘದ ಹಿರಿಯನ್ನು ಮತ್ತಷ್ಟು ಹೆಚ್ಚಿಸಲು ಶ್ರಮಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಸಂಘದ ನಿಕಟಪೂರ್ವ ಅಧ್ಯಕ್ಷ ಡಿ.ಸಿದ್ದರಾಮಯ್ಯ, ಹಿರಿಯ ನಿರ್ದೇಶಕರಾದ ಟಿ.ವಿ.ಲಕ್ಷ್ಮೀನಾರಾಯಣ್, ಎಂ.ಗೋವಿಂದರಾಜ್, ಜೆಡಿಎಸ್ ಜಿಲ್ಲಾ ಅಧ್ಯಕ್ಷ ಬಿ.ಮುನೇಗೌಡ, ಜೆಡಿಎಸ್ ನಗರ ಘಟಕದ ಅಧ್ಯಕ್ಷ ವಡ್ಡರಹಳ್ಳಿರವಿ, ತಾಲ್ಲೂಕು ಘಟಕದ ಅಧ್ಯಕ್ಷ ಲಕ್ಷ್ಮೀಪತಯ್ಯ, ಮುಖಂಡರಾದ ಎ.ನರಸಿಂಹಯ್ಯ, ಜಿ.ಸತ್ಯನಾರಾಯಣ, ಆರ್.ಕೆಂಪರಾಜ್, ರಂಗಸ್ವಾಮಿ, ಶಿವಕುಮಾರ್ ಅಭಿನಂದಿಸಿದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….