ಬೆಂ.ಗ್ರಾ.ಜಿಲ್ಲೆ, (ನ.07): ನವೆಂಬರ್ 11 ರಂದು ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಸಮೃದ್ಧಿ ಪ್ರತಿಮೆ ಅನಾವರಣ ಹಾಗೂ ಥೀಮ್ ಪಾರ್ಕ್ ಶಂಕುಸ್ಥಾಪನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ, ಜಿಲ್ಲೆಯ ವಿವಿಧ ಇಲಾಖೆಗಳ ಅಧಿಕಾರಿಗಳು ತಮಗೆ ವಹಿಸಿದ ಜವಾಬ್ದಾರಿ ಮತ್ತು ಕರ್ತವ್ಯಗಳನ್ನು ಪರಸ್ಪರ ಸಮನ್ವಯದೊಂದಿಗೆ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಆರ್.ಲತಾ ಸೂಚನೆ ನೀಡಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿ ಇಂದು ಸಂಜೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಾರ್ಯಕ್ರಮವು ಅತ್ಯಂತ ಮಹತ್ವದ್ದಾಗಿದ್ದು, ಸರ್ಕಾರದ ಉನ್ನತ ಮಟ್ಟದಲ್ಲಿ ಸಿದ್ಧತೆಗಳು ನಡೆಯುತ್ತಿವೆ.ಜಿಲ್ಲಾಡಳಿತದ ವಿವಿಧ ಇಲಾಖೆಗಳ ಅಧಿಕಾರಿಗಳು ತಮಗೆ ವಹಿಸಿದ ಜವಾಬ್ದಾರಿ ಮತ್ತು ಕರ್ತವ್ಯಗಳನ್ನು ಪರಸ್ಪರ ಸಮನ್ವಯದೊಂದಿಗೆ, ಯಾವುದೇ ಲೋಪಗಳಿಗೆ ಅವಕಾಶ ನೀಡದಂತೆ ಎಚ್ಚರಿಕೆಯಿಂದ ನಿರ್ವಹಿಸಬೇಕು.
ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರಿಗೆ ಅಂದು ಬೆಳಿಗ್ಗೆಯಿಂದಲೇ ಭೋಜನದ ವ್ಯವಸ್ಥೆ ಮಾಡಲಾಗುತ್ತಿದೆ. ಸ್ಥಾಪಿಸಲಾಗುವ ಊಟದ ವಿತರಣೆ ಕೌಂಟರುಗಳ ಸಂಖ್ಯೆ ಆಧರಿಸಿ ಅವುಗಳ ಉಸ್ತುವಾರಿಗೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳನ್ನು ನಿಯೋಜಿಸಲಾಗುವುದು.
ಆಹಾರವು ಚೆಲ್ಲಿ, ಎಲ್ಲೆಡೆ ಹರಡದ ಹಾಗೆ ಸ್ವಚ್ಛತೆಗೆ ಹೆಚ್ಚು ಕ್ರಮವಹಿಸಿ, ಸಾಕಷ್ಟು ಪ್ರಮಾಣದಲ್ಲಿ ಆಹಾರ ತ್ಯಾಜ್ಯದ ಸಂಗ್ರಹಕ್ಕೆ ತೊಟ್ಟಿಗಳನ್ನು ನಿಗದಿತ ಸ್ಥಳಗಳಲ್ಲಿ ಇರಿಸಬೇಕು.
ಪೌರ ಕಾರ್ಮಿಕರನ್ನು ನಿಯೋಜಿಸಬೇಕು. ಆಹಾರದ ಗುಣಮಟ್ಟದ ಬಗ್ಗೆಯೂ ಅಧಿಕಾರಿಗಳು ನಿಗಾ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.
ಕೋವಿಡ್ ತಪಾಸಣೆ ಕಡ್ಡಾಯ: ಕರ್ತವ್ಯಕ್ಕೆ ನಿಯೋಜಿಸಲ್ಪಡುವ ಅಧಿಕಾರಿಗಳು ಮತ್ತು ಸಿಬ್ಬಂದಿ ಕಡ್ಡಾಯವಾಗಿ ಕೋವಿಡ್ ತಪಾಸಣೆ ಮಾಡಿಸಿಕೊಂಡು, ನೆಗೆಟಿವ್ ವರದಿ ಹೊಂದಿರುವುದು ಕಡ್ಡಾಯವಾಗಿದೆ. ಸ್ವ್ಯಾಬ್ ಸಂಗ್ರಹಿಸಲು ಜಿಲ್ಲಾಡಳಿತ ಭವನದಲ್ಲಿ ಕೌಂಟರ್ ಸ್ಥಾಪಿಸಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ರೇವಣಪ್ಪ, ಉಪಕಾರ್ಯದರ್ಶಿ ಡಾ.ನಾಗರಾಜ,ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಶಾಲಿನಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕಿ ಗಿರಿಜಾದೇವಿ,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವಿಜಯೇಂದ್ರ, ಮಹಿಳಾ ಮತ್ತು ಮಕ್ಕಳ ಇಲಾಖೆ ಉಪನಿರ್ದೇಶಕ ನಟರಾಜ,ವಾರ್ತಾ ಇಲಾಖೆ ಉಪನಿರ್ದೇಶಕ ಮಂಜುನಾಥ ಡೊಳ್ಳಿನ, ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕ ಮೋಹನ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ತಹಸೀಲ್ದಾರರು, ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….
