ಚಿಕ್ಕಬಳ್ಳಾಪುರ: ದೇವನಹಳ್ಳಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅನಾವರಣಗೊಳ್ಳಲಿರುವ ನಾಡಪ್ರಭು ಕೆಂಪೇಗೌಡರ 108 ಅಡಿಯ ಕಂಚಿನ ಪ್ರತಿಮೆ ಉದ್ಘಾಟನೆ ಅಂಗವಾಗಿ ಚಿಕ್ಕಬಳ್ಳಾಪುರ ಜಿಲ್ಲಾದ್ಯಂತ “ಪವಿತ್ರ ಮಣ್ಣು (ಮೃತ್ತಿಕೆ) ಮತ್ತು ನೀರು ಸಂಗ್ರಹ ಮಾಡಿರುವ ಕೆಂಪೇಗೌಡ ರಥದ ವಾಹನಕ್ಕೆ ಜಿಲ್ಲಾಧಿಕಾರಿ ಎನ್.ಎಂ. ನಾಗರಾಜ್ ಅವರು ಇಂದು ಜಿಲ್ಲಾಡಳಿತ ಭವನದ ಮುಂಭಾಗದಿಂದ ಭಕ್ತಿಪೂರ್ವಕವಾಗಿ ಬೀಳ್ಕೊಡುಗೆ ನೀಡಿ ಪುತ್ಥಳಿ ಅನಾವರಣ ಸ್ಥಳಕ್ಕೆ ಕಳುಹಿಸಿ ಕೊಟ್ಟರು.

ಈ ವೇಳೆ ಶುಭ ಕೋರಿ ಮಾತನಾಡಿದ ಅವರು, ನಾಡಪ್ರಭು ಕೆಂಪೇಗೌಡ ರಥ ವಾಹನವು ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರಿಂದ ಚಾಲನೆಗೊಂಡು ಅಕ್ಟೋಬರ್ 25 ರಿಂದ ಈ ವರೆಗೆ ಜಿಲ್ಲೆಯಾದ್ಯಂತ ಸಂಚರಿಸಿ 157 ಗ್ರಾಮ ಪಂಚಾಯಿತಿಗಳಲ್ಲಿ ಹಾಗೂ ಜಿಲ್ಲೆಯ ಪ್ರಸಿದ್ಧ ಪಾರಂಪರಿಕ ಸ್ಥಳಗಳು ಮತ್ತು ಪುಣ್ಯ ಕ್ಷೇತ್ರಗಳಲ್ಲಿ ಪವಿತ್ರ ಮೃತ್ತಿಕೆ ಮತ್ತು ನೀರನ್ನು ಸಂಗ್ರಹಿಸಿದೆ. ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಈ ವಾಹನವನ್ನು ಕಳುಹಿಸಿಕೊಡಲಾಗುತ್ತಿದೆ.

ಪ್ರಮುಖವಾಗಿ ಜಿಲ್ಲೆಯ ಪ್ರಸಿದ್ಧ ಸ್ಥಳಗಳಾದ ವಿದುರಾಶ್ವತ್ಥ, ಕೈವಾರ, ರಂಗಸ್ಥಳ, ನಂದಿ, ಆಲಂಗಿರಿ, ಮುದ್ದೇನಹಳ್ಳಿ ಇನ್ನೂ ಮುಂತಾದ ಪುಣ್ಯ ಕ್ಷೇತ್ರಗಳಲ್ಲಿ ಮಣ್ಣು ಮತ್ತು ನೀರನ್ನು ಸಂಗ್ರಹಿಸಲಾಗಿದೆ. ಈ ಮೃತ್ತಿಕೆ ಮತ್ತು ನೀರನ್ನು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅನಾವರಣಗೊಳ್ಳಲಿರುವ ನಾಡಪ್ರಭು ಕೆಂಪೇಗೌಡರ 108 ಅಡಿಯ ಕಂಚಿನ ಪ್ರತಿಮೆಯ ಬಳಿ ನೂತನವಾಗಿ ನಿರ್ಮಾಣವಾಗುತ್ತಿರುವ ಉದ್ಯಾನವನ (ಥೀಮ್ ಪಾರ್ಕ್) ಕ್ಕೆ ಉಪಯೋಗಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಪಿ.ಶಿವಶಂಕರ್, ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ, ಉಪವಿಭಾಗಾಧಿಕಾರಿ ಡಾ.ಜಿ.ಸಂತೋಷ್ ಕುಮಾರ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಶಿವಕುಮಾರ್ ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಜರಿದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….
