ನವದೆಹಲಿ, (ನ11): ಪ್ರಧಾನಿ ನರೇಂದ್ರ ಮೋದಿ ಅವರು 25,000 ಕೋಟಿ ರೂಪಾಯಿಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲು ಇಂದಿನಿಂದ ಎರಡು ದಿನಗಳ ದಕ್ಷಿಣದ ನಾಲ್ಕು ರಾಜ್ಯಗಳಿಗೆ ಭೇಟಿ ನೀಡಲಿದ್ದಾರೆ. ಪ್ರಧಾನಿ ಮೋದಿ ಅವರು ನವೆಂಬರ್ 11 ಮತ್ತು 12 ರಂದು ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣಕ್ಕೆ ಪ್ರವಾಸ ಕೈಗೊಳ್ಳುತ್ತಿದ್ದಾರೆ.

ಪ್ರಧಾನಿ ಕಾರ್ಯಾಲಯದ ಪ್ರಕಾರ, ನವೆಂಬರ್ 11 ರಂದು ಬೆಳಿಗ್ಗೆ 9:45 ರ ಸುಮಾರಿಗೆ, ಬೆಂಗಳೂರಿನ ವಿಧಾನಸೌಧದಲ್ಲಿ ಸಂತ ಕವಿ ಶ್ರೀ ಕನಕದಾಸರ ಪ್ರತಿಮೆಗಳಿಗೆ ಮತ್ತು ಮಹರ್ಷಿ ವಾಲ್ಮೀಕಿ ಅವರ ಪ್ರತಿಮೆಗಳಿಗೆ ಪ್ರಧಾನಿ ಪುಷ್ಪ ನಮನ ಸಲ್ಲಿಸಲಿದ್ದಾರೆ.

ಬೆಳಗ್ಗೆ 10:20ರ ಸುಮಾರಿಗೆ ಬೆಂಗಳೂರಿನ ಕೆಎಸ್‌ಆರ್ ರೈಲು ನಿಲ್ದಾಣದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ಮತ್ತು ಭಾರತ್ ಗೌರವ್ ಕಾಶಿ ದರ್ಶನ ರೈಲಿಗೆ ಚಾಲನೆ ನೀಡಲಿದ್ದಾರೆ. ಬೆಳಗ್ಗೆ 11:30 ರ ಸುಮಾರಿಗೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ಅನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ. ನಂತರ ಮಧ್ಯಾಹ್ನ 12 ಗಂಟೆಗೆ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದು, ನಂತರ 12:30 ಗಂಟೆಗೆ ಬೆಂಗಳೂರಿನಲ್ಲಿ ಸಾರ್ವಜನಿಕ ಕಾರ್ಯಕ್ರಮ ನಡೆಯಲಿದೆ.
ಮಧ್ಯಾಹ್ನ 3:30ರ ಸುಮಾರಿಗೆ ತಮಿಳುನಾಡಿನ ದಿಂಡಿಗಲ್‌ನಲ್ಲಿರುವ ಗಾಂಧಿಗ್ರಾಮ್ ರೂರಲ್ ಇನ್‌ಸ್ಟಿಟ್ಯೂಟ್‌ನ 36 ನೇ ಘಟಿಕೋತ್ಸವ ಸಮಾರಂಭದಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ.
ನವೆಂಬರ್ 12 ರಂದು ಬೆಳಿಗ್ಗೆ 10:30 ರ ಸುಮಾರಿಗೆ ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ಪ್ರಧಾನ ಮಂತ್ರಿಗಳು ಬಹು ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಲಿದ್ದಾರೆ. ಮಧ್ಯಾಹ್ನ 3:30 ರ ಸುಮಾರಿಗೆ ತೆಲಂಗಾಣದ ರಾಮಗುಂಡಂನಲ್ಲಿರುವ RFCL ಸ್ಥಾವರಕ್ಕೆ ಭೇಟಿ ನೀಡಲಿದ್ದಾರೆ. ನಂತರ ಸಂಜೆ 4:15 ರ ಸುಮಾರಿಗೆ ರಾಮಗುಂಡಂನಲ್ಲಿ ಪ್ರಧಾನಮಂತ್ರಿಯವರು ಬಹುವಿಧ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….
