ಬೆಂಗಳೂರು, (ನ.18): ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯ 15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ 1:1 ಅನುಪಾತದಲ್ಲಿ ‘ತಾತ್ಕಾಲಿಕ ಆಯ್ಕೆ’ ಪಟ್ಟಿ ಬಿಡುಗಡೆ ಮಾಡಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
ಈ ಕುರಿತಂತೆ ಮಾಹಿತಿ ನೀಡಿರುವ ಅವರು, ರಾಜ್ಯದ ಸರ್ಕಾರಿ ಶಾಲೆಗಳ ಶೈಕ್ಷಣಿಕ ಗುಣಮಟ್ಟ ಸುಧಾರಣೆ, ಮೂಲಸೌಕರ್ಯ ಅಭಿವೃದ್ಧಿಯೊಂದಿಗೆ, ವಿದ್ಯಾರ್ಥಿಗಳು, ಶಿಕ್ಷಕರ ಸ್ನೇಹಿಯಾಗಿ ಭವಿಷ್ಯದ ಶೈಕ್ಷಣಿಕ ಕ್ಷೇತ್ರದ ಸಮಗ್ರ ಅಭಿವೃದ್ಧಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕಾರ್ಯ ನಿರ್ವಹಿಸುತ್ತಿದೆ.
ನ.14ರಂದು 7,601 ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಶಂಕು ಸ್ಥಾಪನೆ ನೆರವೇರಿಸಲಾಗಿದೆ. ಇಂದು 15 ಸಾವಿರ ಶಿಕ್ಷಕರ ನೇಮಕಾತಿ ಸಂಬಂಧಿಸಿದ 1:1 ಅನುಪಾತದ ‘ತಾತ್ಕಾಲಿಕ ಆಯ್ಕೆ’ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.
ಒಟ್ಟು 15,000 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿತ್ತು. ಅದರಲ್ಲಿ 13,363 ಹುದ್ದೆಗಳಿಗೆ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ.
ಲಿಂಗತ್ವ ಅಲ್ಪಸಂಖ್ಯಾತರಿಗೆ ಶಿಕ್ಷಕರ ನೇಮಕಾತಿಯಲ್ಲಿ ಶೇ.1ರಷ್ಟು ಮೀಸಲಾತಿ ನೀಡಲಾಗಿತ್ತು. ಪ್ರಪ್ರಥಮ ಬಾರಿಗೆ ಮೂವರು ಲಿಂಗತ್ವ ಅಲ್ಪಸಂಖ್ಯಾತರು 1:1 ಪಟ್ಟಿಯಲ್ಲಿ ಆಯ್ಕೆಯಾಗಿದ್ದಾರೆ.
ಮೊದಲ ಬಾರಿಗೆ ಅರ್ಹ ಎಂಜಿನಿಯರಿಂಗ್ ಪದವೀಧರರಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. 19 ಜನರು 1:1 ಪಟ್ಟಿಯಲ್ಲಿ ಆಯ್ಕೆಯಾಗಿದ್ದಾರೆ.
15 ಸಾವಿರ ಶಿಕ್ಷಕರ ನೇಮಕ ಪ್ರಕ್ರಿಯೆಯನ್ನು ಕಾಲಮಿತಿಯಲ್ಲಿ ಕಟ್ಟು ನಿಟ್ಟಾಗಿ ಪೂರ್ಣಗೊಳಿಸುವ ಗುರಿಯನ್ನು ಹೊಂದಲಾಗಿತ್ತು. ಅದರಂತೆ ಅಧಿಸೂಚನೆ ಹೊರಡಿಸಿದ ದಿನದಿಂದ 1:1 ಅನುಪಾತದ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆವರೆಗಿನ ಪ್ರಕ್ರಿಯೆಯನ್ನು 9 ತಿಂಗಳ ಒಳಗೆ ಪೂರ್ಣಗೊಳಿಸಲಾಗಿದೆ ಎಂದು ನಾಗೇಶ್ ತಿಳಿಸಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

