ದೊಡ್ಡಬಳ್ಳಾಪುರ, (ಡಿ.16): ತಾಲೂಕಿನ ಸಾಸಲು ಗ್ರಾಮದಲ್ಲಿ ನಡೆಯಲಿರುವ 12ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಹಾರ – ತುರಾಯಿಗೆ ಕೊಕ್ ನೀಡಲಾಗುತ್ತಿದೆ.

ನಗರದ ಕನ್ನಡ ಜಾಗೃತ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತಂತೆ ಮಾಹಿತಿ ನೀಡಿದ ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಪಿ.ಗೋವಿಂದರಾಜು, ಇದೇ ಪ್ರಥಮ ಬಾರಿಗೆ ಸಾಸಲು ಹೋಬಳಿ ಕೇಂದ್ರದಲ್ಲಿ ಡಿಸೆಂಬರ್ 18- 19ರಂದು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದೆ. ಈ ಸಮ್ಮೇಳನದಲ್ಲಿ ಸನ್ಮಾನಕ್ಕೆ ಹಾರ-ತುರಾಯಿಗಳನ್ನು ಬಳಸದೆ ಪುಸ್ತಕವನ್ನು ಕಾಣಿಕೆಯಾಗಿ ನೀಡಲಾಗುತ್ತಿದೆ.

ಸಮ್ಮೇಳನದಲ್ಲಿ ಭಾಗವಹಿಸುವ ಶಿಕ್ಷಕರಿಗೆ ಅನ್ಯ ಕಾರ್ಯನಿಯಮಿತ್ತ(ಒಒಡಿ) ಸೌಲಭ್ಯ ದೊರೆಯಲಿದೆ. ತಾಲ್ಲೂಕಿನ ಎಲ್ಲಾ ಇಲಾಖೆಯ ಅಧಿಕಾರಿಗಳು, ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳು ಸಮ್ಮೇಳನದ ಯಶಸ್ಸಿಗೆ ಸಹಕಾರ ನೀಡಿದ್ದಾರೆ.
ಡಿ.18ರಂದು ಬೆಳಿಗ್ಗೆ 8.30ಕ್ಕೆ ಸಾಸಲು ಗ್ರಾಮದಲ್ಲಿನ ಶ್ರೀಆಂಜನೇಯ ಸ್ಚಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸುವ ಮೂಲಕ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಶ್ರೀನಾಥಗೌಡ ಅವರು, ಸಮ್ಮೇಳನಾಧ್ಯಕ್ಷ ಚಿನ್ನುಪ್ರಕಾಶ್ ಶ್ರೀರಾಮನಹಳ್ಳಿ ಅವರ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ.
ಸಾದ್ವಿಮಣಿ ಸಾಸಲು ಚಿನ್ನಮ್ಮ ವೇದಿಕೆಯಲ್ಲಿ ಬೆಳಿಗ್ಗೆ 10 ಗಂಟೆಗೆ ಕಾನೂನು ತಜ್ಞರಾದ ಸಿ.ಎಚ್.ಹನುಮಂತರಾಯ ಅವರು ಸಮ್ಮೇಳನ ಉದ್ಘಾಟಿಸಲಿದ್ದಾರೆ.
ಸಮ್ಮೇಳನದ ಅಧ್ಯಕ್ಷತೆಯನ್ನು ಶಾಸಕ ಟಿ.ವೆಂಕಟರಮಣಯ್ಯ ವಹಿಸಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಸಂಸದ ಬಿ.ಎನ್.ಬಚ್ಚೇಗೌಡ, ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್, ಮೈಸೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನ್ಯಾಯಾದೀಶರಾದ ದೊಡ್ಡೇಗೌಡರು ಸೇರಿದಂತೆ ವಿವಿಧ ಗಣ್ಯರು ಭಾಗವಹಿಸಲಿದ್ದಾರೆ.
ಸಮ್ಮೇಳನದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಪ್ರೊ.ಬಿ.ಎನ್.ಕೃಷ್ಣಪ್ಪ ಅವರು ಹರಿಭಾಸ್ಕರ ಪಾರ್ಥ ಸಾರಥಿ ಎಂಬ ವಿಠಲದಾಸರ ಸಮಗ್ರ ಕೃತಿ ಶ್ರೇಣಿ, ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ ಪ್ರಕಟಿಸಿರುವ ಸಾಧಕ ಕೃಷಿಕರು ಹಾಗೂ ಸಮ್ಮೇಳಾನಾಧ್ಯಕ್ಷರ ನುಡಿ ಕೈಪುಡಿ ಪುಸ್ತಕಗಳನ್ನು ಬಿಡುಗಡೆ ಮಾಡಲಿದ್ದಾರೆ.
ಸಮ್ಮೇಳನದಲ್ಲಿ ಭಾಗವಹಿಸುವ ಅಥಿತಿಗಳಿಗೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಗಣ್ಯರಿಗೆ ನಡೆಯುವ ಗೌರವ ಸಮರ್ಪಣೆಯಲ್ಲಿ ಮಣಿಹಾರ,ಶಾಲುಗಳನ್ನು ಬಳಸದೆ ಕನ್ನಡ ಪುಸ್ತಕ, ಅಭಿನಂದನ ಪತ್ರಗಳನ್ನು ನೀಡಲಾಗುತ್ತಿದೆ. ಎರಡು ದಿನಗಳು ವಿವಿಧ ವಿಷಯಗಳ ಕುರಿತಂತೆ ವಿಚಾರಗೋಷ್ಠಿ, ಕವಿಗೋಷ್ಠಿ,ಶಾಲಾ ಮಕ್ಕಳು ಹಾಗೂ ಸ್ಥಳೀಯ ಕಲಾವಿದರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.
ಸುದ್ದಿಗೋಷ್ಠಿಯಲ್ಲಿ ಸಮ್ಮೇಳನದ ಅಧ್ಯಕ್ಷ ಚಿನ್ನುಪ್ರಕಾಶ್, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಗೌರವ ಕಾರ್ಯದರ್ಶಿ ಕೆ.ಆರ್.ರವಿಕಿರಣ್, ಸಾಸಲು ಹೋಬಳಿ ಘಟಕದ ಅಧ್ಯಕ್ಷ ಜಿ.ಎಂ.ನಾಗರಾಜು, ಗೌರವ ಕಾರ್ಯದರ್ಶಿ ಕೇಶವಮೂರ್ತಿ, ಕೋಶಾಧ್ಯಕ್ಷ ಹರೀಶ್ ಕುಮಾರ್ ಮತ್ತಿತರರಿದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….
