ಮೇ.20: ರಾಜ್ಯದ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಸಂಪುಟದ ಇತರ ಸದಸ್ಯರ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಅದ್ದೂರಿ ಸಿದ್ಧತೆ ನಡೆದಿದೆ.
ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನಗಳೊಂದಿಗೆ ಸ್ಪಷ್ಟ ಬಹುಮತ ಪಡೆದಿರುವ ಕಾಂಗ್ರೆಸ್, ನೂತನ ಸಂಪುಟದ ಪ್ರಮಾಣವಚನ ಸ್ವೀಕಾರ ಸಮಾರಂಭವನ್ನು ವಿಜಯೋತ್ಸವದ ಮಾದರಿಯಲ್ಲಿ ನಡೆಸಲು ಮುಂದಾಗಿದೆ. ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು ಎಂದು ಅಂದಾಜಿಸಲಾಗಿದೆ.
ಸಿದ್ದರಾಮಯ್ಯ ಅವರು 2013ರಲ್ಲಿ ಮುಖ್ಯಮಂತ್ರಿ ಆದಾಗಲೂ ಕಂಠೀರವ ಕ್ರೀಡಾಂಗಣದಲ್ಲೇ ಪ್ರಮಾಣವಚನ ಸ್ವೀಕರಿಸಿದ್ದರು. ಆಗಲೂ ಭಾರಿ ಜನಸ್ತೋಮ ಕಾರ್ಯಕ್ರಮಕ್ಕೆ ಸೇರಿತ್ತು. ಈ ಬಾರಿ ಬಹುತೇಕ ಪೂರ್ಣ ಸಂಪುಟದೊಂದಿಗೆ ಅದೇ ಸ್ಥಳದಲ್ಲಿ ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ.
ಅದ್ದೂರಿ ಸಿದ್ಧತೆ: ಸಮಾರಂಭಕ್ಕಾಗಿ ಕಂಠೀರವ ಕ್ರೀಡಾಂಗಣವನ್ನು ಅದ್ದೂರಿಯಾಗಿ ಸಿಂಗರಿಸಲಾಗಿದೆ. ಕ್ರೀಡಾಂಗಣದಲ್ಲಿ ಮೂರು ವೇದಿಕೆಗಳನ್ನು ನಿರ್ಮಿಸಿದ್ದು, ಮಧ್ಯದಲ್ಲಿರುವ ಪ್ರಧಾನ ವೇದಿಕೆಯಲ್ಲಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಮತ್ತು ಸಚಿವರ ಪ್ರಮಾಣವಚನ ಸ್ವೀಕಾರ ನಡೆಯಲಿದೆ. ಇಕ್ಕೆಲಗಳಲ್ಲಿರುವ ವೇದಿಕೆಗಳನ್ನು ಅತಿಗಣ್ಯ ಅತಿಥಿಗಳು ಮತ್ತು ನೂತನ ಸಚಿವರು ಕುಳಿತುಕೊಳ್ಳುವುದಕ್ಕಾಗಿ ಮೀಸಲಿಡಲಾಗಿದೆ.
ವೇದಿಕೆಯ ಹಿಂಭಾಗವನ್ನು ಕೇಸರಿ, ಬಿಳಿ, ಹಸಿರು ಬಣ್ಣದ ವಸ್ತ್ರಗಳಿಂದ ಅಲಂಕರಿಸಲಾಗಿದೆ. ವೇದಿಕೆಯ ಮುಂಭಾಗದಲ್ಲಿ ಹಲವು ಸಾವಿರ ಕುರ್ಚಿಗಳನ್ನು ಇರಿಸಲಾಗಿದೆ. ಕ್ರೀಡಾಂಗಣ ಪ್ರವೇಶಿಸುವ ಎಲ್ಲ ಮಾರ್ಗಗಳಲ್ಲೂ ಹೂ, ಫ್ಲೆಕ್ಸ್ ಬಳಸಿ ಅಲಂಕರಿಸಲಾಗಿದೆ.
ಕ್ರೀಡಾಂಗಣದ ಒಳಭಾಗದ ಅಲ್ಲಲ್ಲಿ ಕಾರ್ಯಕ್ರಮ ವೀಕ್ಷಣೆಗೆ ಬೃಹತ್ ಎಲ್‌ಇಡಿ ಪರದೆಗಳನ್ನು ಅಳವಡಿಸಲಾಗಿದೆ. ಕ್ರೀಡಾಂಗಣವನ್ನು ಸಂಪರ್ಕಿಸುವ ಮಾರ್ಗಗಳಲ್ಲೂ ಎಲ್‌ಇಡಿ ಪರದೆ ಅಳವಡಿಸಲು ಸಿದ್ಧತೆ ನಡೆದಿದೆ.
ಸೋನಿಯಾ ರಾಹುಲ್ ಸೇರಿ ಗಣ್ಯರು: ಎಐಸಿಸಿ ಮಾಜಿ ಅಧ್ಯಕ್ಷರಾದ ಸೋನಿಯಾ ಗಾಂಧಿ ರಾಹುಲ್ ಗಾಂಧಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಸೇರಿದಂತೆ ಹಲವು ಗಣ್ಯರು ಪ್ರಮಾಣವಚನ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಆಹ್ವಾನ ನೀಡಲಾಗಿತ್ತು. ಅವರ ಬದಲಿಗೆ ಲೋಕಸಭೆಯಲ್ಲಿ ತೃಣಮೂಲ ಕಾಂಗ್ರೆಸ್ ಉಪ ನಾಯಕ ಕಕೋಲಿ ಘೋಷ್ ದಸ್ತಿದಾರರ ಪಾಲ್ಗೊಳ್ಳಲಿದ್ದಾರೆ.
ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಪುದುಚೇರಿ ಮುಖ್ಯಮಂತ್ರಿ ಎನ್. ರಂಗಸ್ವಾಮಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಮತ್ತು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೋರೇನ್ ಅವರಿಗೆ ಆಹ್ವಾನ ನೀಡಲಾಗಿದೆ. ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿಗಳಾದ ಫಾರೂಕ್ ಅಬ್ದುಲ್ಲಾ ಮೆಹಬೂಬಾ ಮುಫ್ತಿ ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಸಿಪಿಐ ಪ್ರಧಾನ ಕಾರ್ಯದರ್ಶಿ ಡಿ. ರಾಜಾ ಜೆಡಿಯು ಅಧ್ಯಕ್ಷ ಲಲ್ಲನ್ ಸಿಂಗ್ ಎಂಡಿಎಂಕೆ ಅಧ್ಯಕ್ಷ ವೈಕೋ ಆರ್‌ಎಸ್‌ಪಿ ಅಧ್ಯಕ್ಷ ಎನ್.ಕೆ. ಪ್ರೇಮಚಂದ್ರನ್ ಸಿಪಿಎಂಎಲ್ ಪ್ರಧಾನ ಕಾರ್ಯದರ್ಶಿ ದೀಪಾಂಕರ್ ಭಟ್ಟಾಚಾರ್ಯ ವಿಸಿಕೆ ಅಧ್ಯಕ್ಷ ತೋಳ್ ತಿರುಮಾವಳನ್ ಆರ್‌ಎಲ್‌ಡಿ ಅಧ್ಯಕ್ಷ ಜಯಂತ್ ಚೌಧರಿ ಕೇರಳ ಕಾಂಗ್ರೆಸ್ ಅಧ್ಯಕ್ಷ ಜೋಸ್ ಕೆ. ಮಣಿ ಮತ್ತು ಐಯುಎಂಎಲ್ ಅಧ್ಯಕ್ಷ ಸಾದಿಕ್ ಅಲಿ ತಂಙಳ್ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎನ್ನಲಾಗಿದೆ.
ಬಿಜೆಪಿ ಜೆಡಿಎಸ್ ನಾಯಕರಿಗೂ ಆಹ್ವಾನ: ‘ನೂತನ ಸಂಪುಟ ಸದಸ್ಯರ ಪ್ರಮಾಣವಚನ ಸಮಾರಂಭಕ್ಕೆ ಬಿಜೆಪಿ ಮತ್ತು ಜೆಡಿಎಸ್ ನಾಯಕರಿಗೂ ಆಹ್ವಾನ ನೀಡುತ್ತೇವೆ. ಅವರು ಅನ್ಯತಾ ಭಾವಿಸದೇ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು’ ಎಂದು ನಿಯೋಜಿತ ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಸುದ್ದಿಗಾರರ ಜತೆ ಶುಕ್ರವಾರ ಮಾತನಾಡಿದ ಅವರು ‘ನೀವು ಕೂಡ ಸರ್ಕಾರದ ಭಾಗ. ಈ ಕಾರಣಕ್ಕಾಗಿ ಸಮಾರಂಭದಲ್ಲಿ ಭಾಗವಹಿಸುವಂತೆ ನಿಮ್ಮಲ್ಲಿ ಮನವಿ ಮಾಡುತ್ತೇವೆ’ ಎಂದು ಬಿಜೆಪಿ ಜೆಡಿಎಸ್ ನಾಯಕರನ್ನುದ್ದೇಶಿಸಿ ಹೇಳಿದರು. ಪಕ್ಷವು ಘೋಷಿಸಿರುವ ‘ಗ್ಯಾರಂಟಿ’ ಘೋಷಣೆಗಳ ಅನುಷ್ಠಾನವನ್ನು ಸರ್ಕಾರ ರಚನೆಯಾದ ತಕ್ಷಣದಲ್ಲೇ ಆರಂಭಿಸಲಾಗುವುದು ಎಂದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….