ಬೆಂಗಳೂರು, (ಮೇ.20): ಕನ್ನಡ ಸಾಹಿತ್ಯ ಪರಿಷತ್ತು 2021, 2022 ಹಾಗೂ 2023ನೇ ಸಾಲಿನ ‘ಕಂಡ್ಲೂರು ಗಿರಿಜಮ್ಮ ಮತ್ತು ನರಸಿಂಹ ಜೋಗಿ ದತ್ತಿ ಪ್ರಶಸ್ತಿʼ ಕನ್ನಡ ನಾಟಕ ಕ್ಷೇತ್ರದಲ್ಲಿ ದುಡಿಯುತ್ತಿರುವ ಕಲಾವಿದರಿಗೆ ಆಯ್ಕೆ ಮಾಡಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಂಡ್ಲೂರು ಗಿರಿಜಮ್ಮ ಮತ್ತು ನರಸಿಂಹ ಜೋಗಿ ದತ್ತಿ ಪ್ರಶಸ್ತಿಯನ್ನು ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಈ ದತ್ತಿಯನ್ನು ಸ್ಥಾಪಿಸಿ ಕನ್ನಡ ರಂಗಭೂಮಿಯಲ್ಲಿ ದುಡಿಯುತ್ತಿರುವ ಕಲಾವಿದರೊಬ್ಬರಿಗೆ ಪ್ರತಿ ವರ್ಷ ಗುರುತಿಸಿ ಪ್ರಸ್ತುತ ಪ್ರಶಸ್ತಿಯನ್ನು ಪ್ರಧಾನ ಮಾಡಲಾಗುತ್ತದೆ.
ಈ ಪ್ರಶಸ್ತಿಯು 5000(ಐದು ಸಾವಿರ)ರೂ. ನಗದು ಹಾಗೂ ಸ್ಮರಣಿಕೆ ಹಾಗೂ ಫಲ ತಾಂಬೂಲಗಳನ್ನೂ ಒಳಗೊಂಡಿರುತ್ತದೆ. ದಾನಿಗಳ ಮೂಲ ಉದ್ದೇಶದಂತೆ ಕರ್ನಾಟಕದಲ್ಲಿ ನಾಟಕ ಕ್ಷೇತ್ರದಲ್ಲಿ ನಿರಂತರ ಸೇವೆ ಸಲ್ಲಿಸುತ್ತಿರುವ ರಂಗ ಕಲಾವಿದರನ್ನು ಗುರುತಿಸಿ ಅವರ ಪ್ರತಿಭೆಯನ್ನು ಹಾಗೂ ಅವರ ಸಾಧನೆಗಳನ್ನು ಗಮನಿಸಿ ಕಂಡ್ಲೂರು ಗಿರಿಜಮ್ಮ ಮತ್ತು ನರಸಿಂಹ ಜೋಗಿ ದತ್ತಿ ಪ್ರಶಸ್ತಿ ಆಯ್ಕೆ ಸಮಿತಿ ಆಯ್ಕೆ ಮಾಡಿದೆ.
ಇದುವರೆಗೆ ಏಳು ಜನ ರಂಗ ಕಲಾವಿದರಿಗೆ ಕಂಡ್ಲೂರು ಗಿರಿಜಮ್ಮ ಮತ್ತು ನರಸಿಂಹ ಜೋಗಿ ದತ್ತಿ ಪ್ರಶಸ್ತಿಯನ್ನು ಪ್ರಧಾನ ಮಾಡಲಾಗಿದೆ. ಕರೊನಾ ಹಿನ್ನೆಲೆಯಲ್ಲಿ ಎರಡೂ ವರ್ಷಗಳ ಕಾಲ ಯಾವುದೇ ಕಾರ್ಯಕ್ರಮ ನಡೆಯದೇ ಇರುವ ಹಿನ್ನೆಲೆಯಲ್ಲಿ ಈ ಪ್ರಶಸ್ತಿಯ ಪ್ರಕಟಣೆ ಬಾಕಿ ಇತ್ತು.
ಪ್ರಸ್ತುತ ನಾಡೋಜ ಡಾ. ಮಹೇಶ ಜೋಶಿ ಅವರ ಅಧ್ಯಕ್ಷ ಅವಧಿಯಲ್ಲಿ ಬಾಕಿ ಉಳಿದಿದ್ದ ದತ್ತಿ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತಿದೆ.
2021ನೆಯ ಸಾಲಿನ ಕಂಡ್ಲೂರು ಗಿರಿಜಮ್ಮ ಮತ್ತು ನರಸಿಂಹ ಜೋಗಿ ದತ್ತಿ ಪ್ರಶಸ್ತಿಗೆ ಹಿರಿಯ ರಂಗ ಕರ್ಮಿ ಕಾಸರಗೋಡು ಚಿನ್ನ ಅವರಿಗೆ, 2022ನೆಯ ಸಾಲಿನ ಪ್ರಶಸ್ತಿಗೆ ರಂಗ ಕಲಾವಿದೆ ಭಾರತಿ ಬಿಜಾಪುರ ಹಾಗೂ 2023ನೆಯ ಸಾಲಿನ ಪ್ರಶಸ್ತಿಗೆ ಬೆಂಗಳೂರಿನ ಹಿರಿಯ ನಾಟಕ ಕಲಾವಿದ ರಂಗಶ್ರೀ ರಂಗಸ್ವಾಮಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಡಾ.ಮಹೇಶ ಜೋಶಿ ಅವರು ತಿಳಿಸಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ.ಮಹೇಶ ಜೋಶಿ ಅಧ್ಯಕ್ಷತೆಯಲ್ಲಿ ನಡೆದ ಆಯ್ಕೆ ಸಮಿತಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ನೇ.ಭ.ರಾಮಲಿಂಗ ಶೆಟ್ಟಿ, ಡಾ.ಪದ್ಮಿನಿ ನಾಗರಾಜು ಹಾಗೂ ಗೌರವ ಕೋಶಾಧ್ಯಕ್ಷ ಡಾಬಿ.ಎಂ.ಪಟೇಲ್ ಪಾಂಡು ಅವರು ಉಪಸ್ಥಿತರಿದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….