ದೊಡ್ಡಬಳ್ಳಾಪುರ, (ಜೂ.26): ಮಾದಕ ವಸ್ತುಗಳ ಸೇವನೆಯು ಮನುಷ್ಯನ ಆರೋಗ್ಯಕ್ಕೆ ಹಾನಿಕರವಾಗಿದೆ, ಆರೋಗ್ಯಯುತ ದೇಶದ ನಿರ್ಮಾಣದಲ್ಲಿ ಪ್ರತಿಯೊಬ್ಬರ ಸಹಕಾರ ಅಗತ್ಯವೆಂದು ನಗರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಪ್ರೀತಂ ಶ್ರೇಯಕರ ತಿಳಿಸಿದರು.
ನಗರದ ವಿದ್ಯಾನಿಧಿ ಕಾಲೇಜಿನಲ್ಲಿ ಆಯೋಜಿಸಿದ್ದ ಮಾದಕ ವಸ್ತು ಮತ್ತು ಸಂಚಾರಿ ನಿಯಮಗಳ ಕುರಿತು ಜಾಗೃತಿ ಸಭೆಯಲ್ಲಿ ಅವರು ಮಾತನಾಡಿದರು.
ದೇಶದ ಜನಸಂಖ್ಯೆಯಲ್ಲಿ 8ರಿಂದ 11 ವರ್ಷದೊಳಗಿನ ಮಕ್ಕಳು ಮಾದಕ ವಸ್ತುಗಳ ಸೇವನೆಯ ಚಟಕ್ಕೆ ಬಲಿಯಾಗುತ್ತಿದ್ದಾರೆ. ಇದು ಆತಂಕಕಾರಿಯಾಗಿದ್ದು, ಅವರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ದೇಶದ ಆರೋಗ್ಯ ಮತ್ತು ಆರ್ಥಿಕ ವ್ಯವಸ್ಥೆಯ ಮೇಲೆ ದುಷ್ಪರಿಣಾಮ ಬೀರುತ್ತದೆ. ಗಾಂಜಾ ಬೆಳೆಯುವುದು ಭಾರತ ಸಂವಿಧಾನದ 41, 47ನೇ ವಿಧಿಯ ಪ್ರಕಾರ ಅಪರಾಧವಾಗಿದೆ.
ಮಾದಕ ವಸ್ತುಗಳ ಸೇವನೆ ಯಾರೂ ಮಾಡಬಾರದು. ಆರೋಗ್ಯಯುತ ದೇಶದ ನಿರ್ಮಾಣದಲ್ಲಿ ಪ್ರತಿಯೊಬ್ಬರ ಸಹಕಾರ ಅಗತ್ಯವಿದೆ. ಇದು ಜವಾಬ್ದಾರಿಯೂ ಕೂಡ ಆಗಿದೆ ಎಂದು ಹೇಳಿದರು.
ಮುಂದುವರಿದು ಸಂಚಾರಿ ನಿಯಮಗಳ ಕುರಿತು ಮಾತನಾಡಿ, ಅನೇಕ ಅಪಘಾತಗಳು ನಮ್ಮ ತಪ್ಪುಗಳಿಂದಲೇ ಆಗುತ್ತವೆ. ಚಾಲಕರು ವಾಹನದಲ್ಲಿ ಕುಳಿತ ಕೂಡಲೇ ತಮ್ಮ ಕುಟುಂಬದವರನ್ನು ನೆನಪಿಸಿಕೊಳ್ಳಬೇಕು. ಎಲ್ಲಕಿಂತ ಜೀವ ಮುಖ್ಯ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು. ಕುಡಿದು ವಾಹನ ಚಾಲನೆ ಮಾಡುವುದು, ಮೊಬೈಲ್‌ನಲ್ಲಿ ಮಾತನಾಡುತ್ತಾ ಚಾಲನೆ ಮಾಡುವುದನ್ನು ಕಡ್ಡಾಯವಾಗಿ ನಿಲ್ಲಿಸಬೇಕು.
ದ್ವಿಚಕ್ರವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿರಬೇಕು. ಸಂಚಾರಿ ನಿಯಮಗಳನ್ನು ಪಾಲನೆ ಮಾಡಿದರೆ ಸಾಕಷ್ಟು ಅಪಘಾತಗಳನ್ನು ತಡೆಗಟ್ಟಬಹುದು ಎಂದರು. ಚಾಲಕರು ರಸ್ತೆ ನಿಯಮಗಳನ್ನು ಹಾಗೂ ಸಂಚಾರ ಚಿಹ್ನೆಗಳನ್ನು ಚೆನ್ನಾಗಿ ಅರಿತುಕೊಳ್ಳಬೇಕು. ವಾಹನ ದಾಖಲೆಗಳನ್ನು ಸರಿಯಾಗಿ ಇಟ್ಟುಕೊಳ್ಳಬೇಕು. ಸ್ವಲ್ಪವೂ ಬೇಜವಾಬ್ದಾರಿ ಅಥವಾ ನಿರ್ಲಕ್ಷ್ಯ ತೋರದೆ ಸಂಚಾರಿ ನಿಯಮಗಳನ್ನು ಪಾಲನೆ ಮಾಡಬೇಕು ಎಂದರು.
ಸಭೆಯಲ್ಲಿ ಎಎಸ್ಐ ಅನಿತಾ, ಸಿಬ್ಬಂದಿಗಳಾದ ರೂಪೇಶ್ ಯಾದವ್, ಸುನೀಲ್ ಬಾಸಗಿ ಸೇರಿದಂತೆ ಕಾಲೇಜಿನ ಸಿಬ್ಬಂದಿಗಳು ಇದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….