ಬೆಂಗಳೂರು,(ಜುಲೈ.18): 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಟಕ್ಕರ್ ಕೊಡಲು ಹಾಗೂ ಪ್ರಧಾನಿ ನರೇಂದ್ರ ಮೋದಿಯವರನ್ನು ಕಟ್ಟಿಹಾಕಲು ಕಾಂಗ್ರೆಸ್ ರಣತಂತ್ರ ಹೆಣೆಯುತ್ತಿದೆ.
ಈ ಬಗ್ಗೆ ಸಭೆ ನಡೆಸಲು ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಬೆಂಗಳೂರಿಗೆ ಆಗಮಿಸಿದ್ದಾರೆ. ಇಂದು ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ವಿಪಕ್ಷಗಳ ಮಹಾ ಮೈತ್ರಿಕೂಟದ ಸಭೆ ಹಮ್ಮಿಕೊಳ್ಳಲಾಗಿದೆ. ಬೆಳಗ್ಗೆ 11 ಗಂಟೆಗೆ ಸಭೆಯಲ್ಲಿ ಖರ್ಗೆ ಪ್ರಾಸ್ತಾವಿಕ ಭಾಷಣ ನಡೆಸಲಿದ್ದು ಬೆಳಗ್ಗೆ 11.10ರಿಂದ 6 ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ನಡೆಯಲಿದೆ.
ಸೋಮವಾರ ಮಧ್ಯಾಹ್ನ 23 ಪಕ್ಷಗಳ ನಾಯಕರು ಬೆಂಗಳೂರಿಗೆ ಆಗಮಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎಲ್ಲರನ್ನೂ ಆದರದಿಂದ ಬರಮಾಡಿಕೊಂಡರು. ರಾತ್ರಿ ವಿಶೇಷ ಭೋಜನ ಕೂಟವೂ ನಡೆಯಿತು. ಮಂಗಳವಾರದ ಸಭೆಯ ಅಜೆಂಡಾ ಕುರಿತು ಮತ್ತು ಇತ್ತೀಚಿನ ರಾಜಕೀಯ ಬೆಳವಣಿಗೆಯ ಕುರಿತು ಅನೌಪಚಾರಿಕ ಚರ್ಚೆ ಕೂಡ ನಡೆಯಿತು. ಸುದ್ದಿಗಾರರೊಂದಿಗೆ ಮಾತನಾಡಿದ ಎಐಸಿಸಿ ಪ್ರಧಾನಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ದೇಶದಲ್ಲಿ ಪ್ರಜಾಪ್ರಭುತ್ವ ರಕ್ಷಣೆ, ಸಾಂವಿಧಾನಿಕ ಹಕ್ಕುಗಳು ಹಾಗೂ ಸ್ವಾಯತ್ತ ಸಂಸ್ಥೆಗಳ ರಕ್ಷಣೆಯ ಸದುದ್ದೇಶದಿಂದ ವಿರೋಧ ಪಕ್ಷಗಳು ಒಂದಾಗಿವೆ. ಬಿಜೆಪಿ ಸರ್ಕಾರ ವಿರೋಧ ಪಕ್ಷಗಳ ಧ್ವನಿ ಅಡಗಿಸಲು ಸಾಂವಿಧಾನಿಕ ಸಂಸ್ಥೆಗಳಾದ ಇಡಿ, ಸಿಬಿಐ, ಐಟಿಗಳನ್ನು ಅಸ್ತ್ರವಾಗಿ ಬಳಸುತ್ತಿದೆ. ರಾಹುಲ್ ಗಾಂಧಿ ಅವರ ಅನರ್ಹತೆ, ಮಹಾರಾಷ್ಟ್ರದ ಬೆಳವಣಿಗೆ ಇದಕ್ಕೆ ಸಾಕ್ಷಿ ಎಂದರು.
ಮುಂಬರುವ ಲೋಕಸಭಾ ಚುನಾವಣೆಯ ದೃಷ್ಟಿಯಿಂದ ಕಾಂಗ್ರೆಸ್ ನೇತೃತ್ವದಲ್ಲಿ ಎರಡು ದಿನ ವಿಪಕ್ಷ ನಾಯಕರ ಸಭೆ ನಡೆಸಲಾಗುತ್ತಿದೆ. ರಾಜ್ಯಗಳಲ್ಲಿ ಚುನಾವಣಾ ಮೈತ್ರಿ, ಹೊಂದಾಣಿಕೆ ಹಾಗೂ ಕಾರ್ಯತಂತ್ರಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆಗಳಿವೆ.
ಎರಡು ದಿನಗಳ ಕಾಲ ನಡೆಯಲಿರುವ ಸಭೆಯ ಹಿನ್ನೆಲೆಯಲ್ಲಿ ಅಂತಿಮ ಹಂತದ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಸಂಚಾರ ವ್ಯವಸ್ಥೆಯಲ್ಲೂ ಕೆಲವೊಂದು ಬದಲಾವಣೆ ಮಾಡಿಕೊಳ್ಳಲಾಗಿದೆ. ರೇಸ್ ಕೋರ್ಸ್ ರಸ್ತೆ ಹಾಗೂ ಸಭೆ ನಡೆಯುವ ಹೋಟೆಲ್ ಸುತ್ತ ಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಯುಪಿಎ ಅಧ್ಯಕ್ಷೆ ಸೋನಿಯಾಗಾಂಧಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮತ್ತಿತರ ನಾಯಕರ ಫೋಸ್ಟರ್ ಗಳು ರಾಜಧಾನಿಯಲ್ಲಿ ರಾರಾಜಿಸುತ್ತಿವೆ.
40ಕ್ಕೂ ಹೆಚ್ಚು ನಾಯಕರು: ತಾಜ್ ವೆಸ್ಟೆಂಡ್ ಹೋಟೆಲ್ನಲ್ಲಿ ಆಯೋಜಿಸಿದ್ದ ಔತಣಕೂಟದಲ್ಲಿ ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಬಿಹಾರ ಸಿಎಂ ನಿತೀಶ್ ಕುಮಾರ್, ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್, ಪಂಜಾಬ್ ಸಿಎಂ ಭಗವಂತ ಮಾನ್, ವಿವಿಧ ರಾಜ್ಯಗಳ ಮಾಜಿ ಸಿಎಂಗಳಾದ ಉದ್ದವ್ ಠಾಕ್ರೆ, ಅಖಿಲೇಶ್ ಯಾದವ್, ಲಾಲೂ ಪ್ರಸಾದ್ ಯಾದವ್, ಮೆಹಬೂಬಾ ಮುಫ್ತಿ, ಓಮರ್ ಅಬ್ದುಲ್ಲಾ ಅಲ್ಲದೆ, ಸೀತಾರಾಂ ಯೆಚೂರಿ, ಡಿ.ರಾಜಾ, ಸುಪ್ರಿಯಾ ಸುಳೆ, ಸಂಜಯ್ ರಾವತ್, ಆದಿತ್ಯ ಠಾಕ್ರೆ ಸೇರಿದಂತೆ ಹಲ ನಾಯಕರು ಉಪಸ್ಥಿತರಿದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….