ಬೆಂಗಳೂರು, (ಆ.21): ಕಾವೇರಿ ನೀರಿನ ವಿಷಯದಲ್ಲಿ ರಾಜ್ಯ ಸರ್ಕಾರ ರಾಜ್ಯದ ಜನರು ಹಾಗೂ ರೈತರ ಹಿತ ಕಾಪಾಡಲಿ, ನಾವು ಅವರಿಗೆ ಸಹಕಾರ ನೀಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ರಾಜ್ಯ ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗಳಿಗೆ ಮಾತನಾಡಿದ ಅವರು, ಕಾವೇರಿ ನೀರು ಹಂಚಿಕೆ ವಿಚಾರವಾಗಿ ಸುಪ್ರೀಂ ಕೋರ್ಟ್ ಹೊಸ ಪೀಠ ರಚನೆ ಮಾಡಿದೆ. ರಾಜ್ಯ ಸರಕಾರ ಇದನ್ನು ಗಂಭಿರವಾಗಿ ಪರಿಗಣಿಸಬೇಕು. ಈಗಾಗಲೇ ಟ್ರಿಬ್ಯುನಲ್ ಆದೇಶ ಬಂದು ಒಂದು ವ್ಯವಸ್ಥೆ ಇರುವ ಸಂದರ್ಭದಲ್ಲಿ ಈಗಿರುವ ವ್ಯವಸ್ಥೆಯಡಿ ಕಾರ್ಯ ನಿರ್ವಹಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಒಂದೆಡೆ ನೀರು ಬಿಡುತ್ತದೆ ಮತ್ತೊಂದೆಡೆ ವಾದ ಮಾಡುತ್ತಾರೆ. ಸುಪ್ರೀಂ ಕೋರ್ಟ್ ನಲ್ಲಿ ಕಾನೂನಾತ್ಮಕವಾಗಿ ಹೋರಾಟ ಮಾಡಲು ಪ್ರಯತ್ನ ಮಾಡಬೇಕು. ನಾವು ವಿರೋಧ ಪಕ್ಷವಾಗಿ ಎಲ್ಲ ರೀತಿಯ ಸಹಕಾರ ನೀಡಲು ಸಿದ್ದರಿದ್ದೇವೆ ಎಂದು ಹೇಳಿದರು.
ಮಂಡ್ಯ ಮೈಸೂರು ಭಾಗದ ರೈತರು ಧರಣಿ ಸತ್ಯಾಗ್ರಹ ಮಾಡುತ್ತಿದ್ದಾರೆ. ಇಡೀ ವರ್ಷ ನೀರಿನ ಕೊರತೆ ನಿರ್ವಹಣೆ ಮಾಡಬೇಕಿದೆ. ರಾಜ್ಯದ ರೈತರ ಕೂಗಿಗೆ ಸ್ಪಂದಿಸುವ ಕೆಲಸ ಮಾಡಬೇಕು ಎಂದರು.
ಜಲ ಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಬಿಜೆಪಿ , ಜೆಡಿಎಸ್ ನವರಿಗೆ ಉತ್ತರ ಕೊಡಬೇಕಿಲ್ಲ ಎಂದು ಹೇಳಿರುವ ಕುರಿತು ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ. ಅವರು, ಡಿ.ಕೆ. ಶಿವಕುಮಾರ್ ನೀರಾವರಿ ಸಚಿವರು ಅವರು ರಾಜ್ಯದ ಜನತೆಗೆ, ರೈತರಿಗೆ, ಬೆಂಗಳೂರಿನ ಜನತೆಗೆ ಉತ್ತರ ಕೊಡಲಿ, ನಾವು ವಿರೋಧ ಪಕ್ಷವಾಗಿ ನಮ್ಮ ಅಭಿಪ್ರಾಯ ಹೇಳಿದ್ದೇವೆ. ರೈತರನ್ನು ಕೋರ್ಟ್ ಗೆ ಹೋಗಿ ಎಂದರೆ ಹೇಗೆ ಅವರು ರಾಜ್ಯದ ಜನರ ಹಿತ ಕಾಯಲಿ ನಾವು ಅವರಿಗೆ ಸಹಕಾರ ನೀಡುತ್ತೇವೆ ಎಂದು ಹೇಳಿದರು.
ಇದಕೆ ಮುನ್ನ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಬೆಳಿಗ್ಗೆ ಬಿಜೆಪಿ ಕೋರ್ ಕಮಿಟಿ ಸಭೆ ನಡೆಸಲಾಯಿತು.
ಈ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್, ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಾಜ್ಯದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ, ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ರಾಜ್ಯದ ಮಾಜಿ ಸಚಿವರಾದ ಗೋವಿಂದ ಕಾರಜೋಳ, ಕೆ.ಎಸ್. ಈಶ್ವರಪ್ಪ, ಆರ್. ಅಶೋಕ್, ಡಾ|| ಸಿ.ಎನ್. ಅಶ್ವತ್ಥನಾರಾಯಣ, ಬಿ. ಶ್ರೀರಾಮುಲು, ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾಣಾ, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ ಅವರು ಪಾಲ್ಗೊಂಡಿದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….