ಬೆಂ.ಗ್ರಾ.ಜಿಲ್ಲೆ, (ಸೆ.05): ಖಾಸಗಿ ಶಾಲೆಗಳಲ್ಲಿ ನೀಡುವಂತಹ ಶಿಕ್ಷಣ ಸೌಲಭ್ಯವು ಸರ್ಕಾರಿ ಶಾಲೆಗಳಲ್ಲಿ ಸಿಗುವಂತಾಗಬೇಕು, ಗುಣಮಟ್ಟದ ಶಿಕ್ಷಣವನ್ನು ನೀಡಿ ವಿದ್ಯಾರ್ಥಿಗಳನ್ನು ಉನ್ನತ ಹುದ್ದೆಗಳಿಗೆ ಕೊಂಡೊಯ್ಯಲು ಶಿಕ್ಷಕರು ಶ್ರಮವಹಿಸಬೇಕೆಂದು ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಶಿಕ್ಷಣ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಹೊಸಕೋಟೆ ಟೌನ್ ನ ಸ್ವಾಮಿ ವಿವೇಕಾನಂದ ನಗರದ ಶ್ರೀವಾರಿ ಕಲ್ಯಾಣ ಮಂಟಪ ದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪರವರು ದೀಪ ಬೆಳಗುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, ಬಳಿಕ ಮಾಜಿ ರಾಷ್ಟ್ರಪತಿಗಳಾದ ಡಾ.ಸರ್ವೆಪಲ್ಲಿ ರಾಧಾಕೃಷ್ಣನ್ ಮತ್ತು ಭಾರತದ ಮೊದಲ ಮಹಿಳಾ ಶಿಕ್ಷಕಿ ಸಾವಿತ್ರಿ ಬಾಯಿ ಫುಲೆ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿನ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಸಿ.ಎಸ್.ಆರ್ ಅನುದಾನವನ್ನು ಬಳಸಿಕೊಳ್ಳಲು ಕ್ರಮವಹಿಸಲಾಗುವುದು. ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಿ ಗುಣಮಟ್ಟದ ಶಿಕ್ಷಣವನ್ನು ನೀಡಿ, ವಿದ್ಯಾರ್ಥಿಗಳ ಕಲಿಕೆಗೆ ಪ್ರೋತ್ಸಾಹಿಸಬೇಕು. ಖಾಸಗಿ ಶಾಲೆಗಳಿಗಿಂತ ಸರ್ಕಾರಿ ಶಾಲೆಗಳೇ ಮೇಲುಗೈ ಸಾಧಿಸಬೇಕು, ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸಲು ಶಿಕ್ಷಕರ ಕೊಡುಗೆ ಅಪಾರವಾದದ್ದು ಎಂದರು.
ಸಂಸದರಾದ ಬಿ.ಎನ್.ಬಚ್ಚೇಗೌಡ ಅವರು ಮಾತನಾಡಿ ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ ಎಂಬ ನಾಣ್ಣುಡಿ ಯಂತೆ ಶಿಕ್ಷಣ ವ್ಯವಸ್ಥೆಯಲ್ಲಿ ಹೆಣ್ಣುಮಕ್ಕಳ ಪಾತ್ರ ಅಪಾರವಾದದ್ದು, ಪರೀಕ್ಷಾ ಫಲಿತಾಂಶಗಳಲ್ಲಿ ಹೆಚ್ಚಾಗಿ ಹೆಣ್ಣು ಮಕ್ಕಳೇ ಮೇಲುಗೈ ಸಾಧಿಸುತ್ತಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.
ನಿವೃತ್ತ ನ್ಯಾಯಮೂರ್ತಿಗಳಾದ ಎಚ್.ಎನ್.ನಾಗಮೋಹನ ದಾಸ್ ಅವರು ಮಾತನಾಡಿ ಶಾಲೆಗಳಲ್ಲಿ ಮಕ್ಕಳಿಗೆ ಸುಲಭ ರೀತಿಯಲ್ಲಿ ಅರ್ಥವಾಗುವಂತೆ ಕಥೆಗಳ ರೂಪದಲ್ಲಿ ಪಾಠಗಳನ್ನು ಬೋಧನೆ ಮಾಡಬೇಕು. ವಿದ್ಯಾವಂತರು ಉನ್ನತ ಮಟ್ಟಕ್ಕೆ ತಲುಪುತ್ತಾರೆ ಅವಿದ್ಯಾವಂತರು ಹಾಗೆಯೇ ಉಳಿಯುತ್ತಾರೆ. ಮೌಲ್ಯಯುತ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹೊಸಕೋಟೆ ವಿಧಾನಸಭಾ ಕ್ಷೇತ್ರ ಶಾಸಕರಾದ ಶರತ್ ಕುಮಾರ್ ಬಚ್ಚೇಗೌಡ ಅವರು ವಹಿಸಿದ್ದರು.
ಈ ಸಂದರ್ಭದಲ್ಲಿ ಜಿಲ್ಲೆಯ 17 ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ. ಶಿವಶಂಕರ ಎನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಟಿ.ಕೆ ರಮೇಶ್, ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಶ್ರೀಕಂಠಯ್ಯ ಸೇರಿದಂತೆ ಜಿಲ್ಲಾಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಶಿಕ್ಷಕ ವೃಂದ, ಸಾರ್ವಜನಿಕರು ಭಾಗವಹಿಸಿದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….