ಬೆಂಗಳೂರು, (ಅ.12): ಶಿರಹಟ್ಟಿಯ ಮಾಜಿ ಶಾಸಕ ರಾಮಪ್ಪ ಲಮಾಣಿ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಈ ವೇಳೆ ಮಾತನಾಡಿದ ರಾಮಪ್ಪ ಲಮಾಣಿ ಬಿಜೆಪಿಯಲ್ಲಿ ಅನುಭವಿಸಿದ ನೋವಿನಿಂದಾಗಿ ಕಾಂಗ್ರೆಸ್ ಸೇರಿದ್ದಾಗಿ ಹೇಳಿದ್ದಾರೆ.
ನಗರದ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಕ್ಷಸೇರ್ಪಡೆಗೊಂಡ ಅವರು, ಕಾಂಗ್ರೆಸ್ ಪಕ್ಷಕ್ಕೆ ನಾನು ಯಾವುದೇ ಷರತ್ತು ವಿಧಿಸಿಲ್ಲ ಯಾವುದೇ ಚುನಾವಣೆಯ ಟಿಕೆಟ್‌ಗೆ ಬೇಡಿಕೆಯಿಟ್ಟಿಲ್ಲ ಎಂದು ನುಡಿದಿದ್ದಾರೆ.
ನನ್ನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಚೆನ್ನಾಗಿ ತಿಳಿದಿದೆ. ರಾಮಪ್ಪ ಲಮಾಣಿ ಇದ್ದರೆ ಒಳಿತಾಗುತ್ತದೆ ಎಂಬ ಭರವಸೆಯಿಂದ ನನ್ನನ್ನು ಕಾಂಗ್ರೆಸ್ ಪಕ್ಷಕ್ಕೆ ಕರೆತಂದಿದ್ದಾರೆ. ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಗಳನ್ನು ಒಪ್ಪಿಕೊಂಡು ನಾನು ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದೇನೆ ಎಂದು ತಿಳಿಸಿದರು.
ಜಗದೀಶ್ ಶೆಟ್ಟರ್ ಹಾಗೂ ಡಿಕೆ ಶಿವಕುಮಾರ್ ಅವರು ಉತ್ತರ ಕರ್ನಾಟಕ ಭಾಗದ ಅನೇಕ ನಾಯಕರ ಸಂಪರ್ಕದಲ್ಲಿದ್ದು, ಮುಂದಿನ ದಿನಗಳಲ್ಲಿ ಅನೇಕರು ಕಾಂಗ್ರೆಸ್ ಪಕ್ಷಕ್ಕೆ ಸೇರಲಿದ್ದಾರೆ.
ಮುಂದಿನ 10 ವರ್ಷಗಳ ಕಾಲ ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ಮಾಡಲಿದೆ. ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಯ ಅನೇಕ ಶಾಸಕರು ಕೇವಲ 1500 ಕ್ಕಿಂತ ಕಡಿಮೆ ಮತಗಳ ಅಂತರದಿಂದ ಗೆದ್ದಿದ್ದಾರೆ. ಇಲ್ಲದಿದ್ದರೆ, ಬಿಜೆಪಿ 40 ಸ್ಥಾನಗಳಿಗೆ ನಿಲ್ಲುತ್ತಿತ್ತು. ಮುಂದಿನ ದಿನಗಳಲ್ಲಿ ಬಿಜೆಪಿ ಇನ್ನಷ್ಟು ಧೂಳಿಪಟವಾಗಲಿದೆ ಎಂದು ರಾಮಪ್ಪ ಲಮಾಣಿ ಆಕ್ರೋಶ ಹೊರಹಾಕಿದರು.
ಪಕ್ಷ ಇನ್ನು ಮುಂದೆ ಯಾವುದೇ ಅಭ್ಯರ್ಥಿಗೆ ಟಿಕೆಟ್ ನೀಡಿದರೂ ಅವರ ಪರವಾಗಿ ಕೆಲಸ ಮಾಡುವುದಾಗಿ ಲಮಾಣಿ ಹೇಳಿದರು.
ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ, ಉಪ ಮುಖ್ಯಮಂತ್ರಿ ಡಿಕೆ. ಶಿವಕುಮಾರ್, ಮಾಜಿ ಸಿಎಂ ಜಗದೀಶ್ ಶೆಟ್ಟರ್, ಶಾಸಕ ಲಕ್ಷ್ಮಣ್ ಸವದಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….