ಬೆಂಗಳೂರು, (ಫೆ.16): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ನೇ ಸಾಲಿನ ಕರ್ನಾಟಕ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಮಂಡನೆ ಮಾಡುತ್ತಿರುವ 15ನೇ ಬಜೆಟ್ ಇದಾಗಿದ್ದು, ಹಿಂದುಳಿದ ವರ್ಗಗಳ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ, ವಸತಿ ಇಲಾಖೆ ಕೊಟ್ಟ ಅನುದಾನ ಈ ಕೆಳಕಂಡಂತಿದೆ.
ಇದರನ್ವಯ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಶೈಕ್ಷಣಿಕ ಅನುಕೂಲಕ್ಕಾಗಿ 4 ಕ್ರಮಗಳನ್ನು ಕೈಗೊಳ್ಳಲಾಗುವುದು.
• 100 ಸಂಖ್ಯಾಬಲದ ಮೆಟ್ರಿಕ್ ನಂತರದ 75 ಬಾಲಕರ ಮತ್ತು 75 ಬಾಲಕಿಯರ ವಸತಿನಿಲಯಗಳನ್ನು ಜಿಲ್ಲಾ ಕೇಂದ್ರಗಳಲ್ಲಿ ಪ್ರಾರಂಭಿಸಲಾಗುವುದು.
• ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ 100 ಸಂಖ್ಯಾಬಲದ 150 ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ಹಾಗೂ 174 ಮೊರಾರ್ಜಿ ದೇಸಾಯಿ ವಸತಿ ಶಾಲೆ/ ಕಾಲೇಜುಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳನ್ನು 200 ಕೋಟಿ ರೂ. ವೆಚ್ಚದಲ್ಲಿ ಹಂತ ಹಂತವಾಗಿ ಒದಗಿಸಲಾಗುವುದು.
• ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 30 ವಿದ್ಯಾರ್ಥಿನಿಲಯಗಳಿಗೆ ನಾಲ್ಕು ಕೋಟಿ ರೂ. ಗಳ ಘಟಕ ವೆಚ್ಚದಲ್ಲಿ ಸ್ವಂತ ಕಟ್ಟಡಗಳನ್ನು ನಿರ್ಮಾಣ ಮಾಡಲಾಗುವುದು.
• ಹಳೆಯ ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿ ಇಲಾಖೆಯ ವಸತಿ ನಿಲಯಗಳನ್ನು ಅಭಿವೃದ್ಧಿಪಡಿಸಲು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಆಶ್ರಮ ಶಾಲೆಗಳನ್ನು ಡಿ.ದೇವರಾಜು ಅರಸು ವಸತಿ ಶಾಲೆಗಳೆಂದು ಮರುನಾಮಕರಣ ಮಾಡಲಾಗುವುದು.
ರಾಜ್ಯದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ CLAT, MAT ಮತ್ತು Chartered Accountant ಫೌಂಡೇಷನ್ ಪರೀಕ್ಷೆಗಳಿಗೆ ಸಿದ್ಧಗೊಳಿಸಲು ಪರೀಕ್ಷಾ ಪೂರ್ವ ತರಬೇತಿ ನೀಡಲಾಗುವುದು.
ದೇಶದ ಪ್ರತಿಷ್ಠಿತ ಇಂಜಿನಿಯರಿಂಗ್ ಹಾಗೂ ವೈದ್ಯಕೀಯ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆಯಲು ಪ್ರಸಕ್ತ ಸಾಲಿನಲ್ಲಿ 500 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ತರಬೇತಿ ಸಂಸ್ಥೆಗಳಿಂದ ಎರಡು ವರ್ಷಗಳ JEE/NEET ತರಬೇತಿಯನ್ನು ಉಚಿತವಾಗಿ ನೀಡಲಾಗುವುದು.
ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳ ಆರ್ಥಿಕ ಹಾಗೂ ಸಾಮಾಜಿಕ ಸ್ಥಿತಿಗತಿಗಳ ಬಗ್ಗೆ ಅಧ್ಯಯನ ಮಾಡಲು ʻಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಆಯೋಗʼ ರಚಿಸಲಾಗುವುದು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ನಿಗಮಗಳಿಂದ 2024-25ನೇ ವರ್ಷದಲ್ಲಿ ಒಟ್ಟಾರೆಯಾಗಿ 1,600 ಕೋಟಿ ರೂ.ಗಳ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಲಾಗುವುದು.
ಅಲ್ಪಸಂಖ್ಯಾತರ ಕಲ್ಯಾಣ: ಅಲ್ಪಸಂಖ್ಯಾತ ಸಮುದಾಯಗಳಲ್ಲಿ ಶಿಕ್ಷಣಕ್ಕೆ ಪ್ರಾಮುಖ್ಯತೆ ನೀಡುವ ಮೂಲಕ ಅವರ ಸಾಮಾಜಿಕ ಮತ್ತು ಆರ್ಥಿಕ ಸಬಲೀಕರಣಕ್ಕಾಗಿ ಹಲವು ಕ್ರಮಗಳನ್ನು ಕೈಗೊಳ್ಳಲಾಗುವುದು;
• 50 ಸಂಖ್ಯಾಬಲವುಳ್ಳ 50 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ಪ್ರಾರಂಭಿಸಲಾಗುವುದು.
• 100 ಸಂಖ್ಯಾಬಲವುಳ್ಳ 100 ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳನ್ನು ಪ್ರಾರಂಭಿಸಲಾಗುವುದು.
• 100 ಹೊಸ ಮೌಲಾನಾ ಆಜಾದ್ ಶಾಲೆಗಳನ್ನು ತೆರೆಯಲಾಗುವುದು.
• ಸ್ವಂತ ಕಟ್ಟಡವನ್ನು ಹೊಂದಿರುವ 25 ಶಾಲೆಗಳಲ್ಲಿ ಪದವಿ ಪೂರ್ವ ಶಿಕ್ಷಣವನ್ನು ಪ್ರಾರಂಭಿಸಲಾಗುವುದು.
ಸರ್ಕಾರಿ/ಖಾಸಗಿ ಕಾಲೇಜುಗಳಲ್ಲಿ ಬಿ.ಎಸ್ಸಿ. ನರ್ಸಿಂಗ್/ ಜಿ.ಎನ್.ಎಂ ನರ್ಸಿಂಗ್ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಶುಲ್ಕ ಭರಿಸುವ ಯೋಜನೆಯನ್ನು ಪುನಃ ಪ್ರಾರಂಭ ಮಾಡಲಾಗುವುದು.
ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದ ಉದ್ಯಮಶೀಲರು ಸ್ಥಾಪಿಸುವ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕಾ ಹೊಸ ಘಟಕಗಳನ್ನು ಸ್ಥಾಪಿಸಲು ಹಾಗೂ ಅಸ್ತಿತ್ವದಲ್ಲಿರುವ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕಾ ಘಟಕಗಳ ಉನ್ನತೀಕರಣಕ್ಕೆ KSFC ಮೂಲಕ ಪಡೆಯುವ 10 ಕೋಟಿ ರೂ.ವರೆಗಿನ ಸಾಲಕ್ಕೆ ಶೇ.6ರಷ್ಟು ಬಡ್ಡಿ ಸಹಾಯಧನ ನೀಡಲಾಗುವುದು.
ರೇಷ್ಮೆ ನೂಲು ಬಿಚ್ಚಾಣಿಕೆಯಲ್ಲಿ ತೊಡಗಿರುವ ಅಲ್ಪಸಂಖ್ಯಾತ ಫಲಾನುಭವಿಗಳ ಆರ್ಥಿಕ ಸ್ಥಿತಿಯನ್ನು ಉತ್ತಮಪಡಿಸಲು ರೇಷ್ಮೆ ಇಲಾಖೆ ಮೂಲಕ ತರಬೇತಿ ಮತ್ತು ಕೆ.ಎಂ.ಡಿ.ಸಿ ಮೂಲಕ ಸಾಲ ಸೌಲಭ್ಯಗಳನ್ನು ನೀಡಲಾಗುವುದು.
ಅಲ್ಪಸಂಖ್ಯಾತ ಸಮುದಾಯದ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ವಿವಿಧ ರೀತಿಯ ಸ್ವಯಂ ಉದ್ಯೋಗ ಚಟುವಟಿಕೆಗಳಿಗೆ ಉತ್ತೇಜನ ನೀಡಲು 10 ಕೋಟಿ ರೂ. ಒದಗಿಸಲಾಗುವುದು.
ರಾಜ್ಯದಲ್ಲಿನ ವಕ್ಫ್ ಆಸ್ತಿಗಳ ಸಂರಕ್ಷಣೆ ಹಾಗೂ ಅಭಿವೃದ್ಧಿಗಾಗಿ 100 ಕೋಟಿ ರೂ. ಅನುದಾನ ಒದಗಿಸಲಾಗುವುದು ಹಾಗೂ ಭಾರತೀಯ ಪುರಾತತ್ವ ಇಲಾಖೆಯ ವ್ಯಾಪ್ತಿಯಲ್ಲಿರುವ ವಕ್ಫ್ ಆಸ್ತಿಗಳನ್ನು ಆದ್ಯತೆಯ ಮೇರೆಗೆ ಅಭಿವೃದ್ಧಿಪಡಿಸಲಾಗುವುದು.
ವಕ್ಫ್ ಸಂಸ್ಥೆಯ ಧಾರ್ಮಿಕ ಗುರುಗಳಿಗೆ ಹಾಗೂ ಮುತವಲ್ಲಿಗಳಿಗೆ ಪ್ರಚಲಿತ ವಿದ್ಯಮಾನಗಳ ಬಗ್ಗೆ ಅರಿವು ಮೂಡಿಸಲು ತರಬೇತಿ ಕಾರ್ಯಗಾರಗಳನ್ನು ಏರ್ಪಡಿಸಲಾಗುವುದು.
ರಾಜ್ಯದಲ್ಲಿನ ಪ್ರಮುಖ ಧಾರ್ಮಿಕ ಸ್ಥಳಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು 20 ಕೋಟಿ ರೂ. ಅನುದಾನ ಒದಗಿಸಲಾಗುವುದು.
ಮಂಗಳೂರಿನ ಹಜ್ ಭವನದ ನಿರ್ಮಾಣ ಕಾಮಗಾರಿಯನ್ನು 10 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುವುದು.
ಜೈನರ ಪ್ರಮುಖ ಧಾರ್ಮಿಕ ಸ್ಥಳಗಳ ಅಭಿವೃದ್ಧಿಗಾಗಿ 50 ಕೋಟಿ ರೂ. ಅನುದಾನ ಒದಗಿಸಲಾಗುವುದು.
ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿಗಾಗಿ 200 ಕೋಟಿ ರೂ. ಒದಗಿಸಲಾಗುವುದು.
ಬೌದ್ಧರ ಪವಿತ್ರ ಗ್ರಂಥಗಳಾದ ತ್ರಿಪಿಟಕಗಳನ್ನು ಪಾಲಿ ಭಾಷೆಯಿಂದ ಕನ್ನಡಕ್ಕೆ ಅನುವಾದ ಮಾಡಲು ಸೂಕ್ತ ಅನುದಾನ ಒದಗಿಸಲಾಗುವುದು.
ರಾಜ್ಯದಲ್ಲಿ ವಾಸಿಸುತ್ತಿರುವ ಸಿಖ್ಖ್ ಲಿಗಾರ್ ಸಮುದಾಯದ ಜನರ ಆರ್ಥಿಕ ಸಬಲೀಕರಣಕ್ಕಾಗಿ ಎರಡು ಕೋಟಿ ರೂ. ಅನುದಾನದಲ್ಲಿ ಹೊಸ ಯೋಜನೆಗಳನ್ನು ರೂಪಿಸಲಾಗುವುದು.
ಬೀದರ್ನಲ್ಲಿರುವ ಶ್ರೀ ನಾನಕ್ ಝೀರಾ ಸಾಹೇಬ್ ಗುರುದ್ವಾರದ ಅಭಿವೃದ್ಧಿಗಾಗಿ ಒಂದು ಕೋಟಿ ರೂ. ಅನುದಾನ ನೀಡಲಾಗುವುದು.
ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ 2024-25ನೇ ವರ್ಷದಲ್ಲಿ ಒಟ್ಟಾರೆಯಾಗಿ 393 ಕೋಟಿ ರೂ.ಗಳ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಲಾಗುವುದು
ವಸತಿ; ಎಲ್ಲಾ ವಸತಿರಹಿತರಿಗೆ ಸೂರು ಒದಗಿಸುವ ಧ್ಯೇಯ ನಮ್ಮ ಸರ್ಕಾರದ್ದಾಗಿದೆ. ನಮ್ಮ ಹಿಂದಿನ ಅವಧಿಯಲ್ಲಿ 14.54 ಲಕ್ಷ ಮನೆಗಳನ್ನು ನಿರ್ಮಿಸಲಾಗಿತ್ತು. 2019 ರಿಂದ 2023ರ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಿರ್ಮಿಸಲಾದ ಮನೆಗಳ ಸಂಖ್ಯೆ ಕೇವಲ 5.19 ಲಕ್ಷ. ಬಾಕಿ ಉಳಿದಿರುವ 12 ಲಕ್ಷ ಮನೆಗಳ ನಿರ್ಮಾಣದ ಹೊಣೆಗಾರಿಕೆ ನಮ್ಮ ಸರ್ಕಾರದ ಮುಂದಿದ್ದು, 2023-2024ನೇ ಸಾಲಿನಲ್ಲಿ 3 ಲಕ್ಷ ಮನೆಗಳ ನಿರ್ಮಾಣ ಪೂರ್ಣಗೊಳಿಸಲಾಗುತ್ತಿದೆ. 2024-25ರಲ್ಲಿ 3 ಲಕ್ಷ ಮನೆಗಳ ನಿರ್ಮಾಣದ ಗುರಿ ಹೊಂದಲಾಗಿದೆ. ಇದಲ್ಲದೇ, ರಾಜ್ಯದಲ್ಲಿ ವಸತಿರಹಿತರ ಸಂಖ್ಯೆಯನ್ನು ಗುರುತಿಸಲು ಒಂದು ಸಮೀಕ್ಷೆಯನ್ನು ನಡೆಸಲಾಗುವುದು.
ಕೊಳಗೇರಿ ಅಭಿವೃದ್ಧಿ ಮಂಡಳಿಯ ವ್ಯಾಪ್ತಿಯಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ (ಎ.ಎಚ್.ಪಿ.) ಅಡಿ 1,18,359 ಮನೆಗಳನ್ನು ನಿರ್ಮಿಸಲಾಗುತ್ತಿದೆ. ಬಹುತೇಕ ಫಲಾನುಭವಿಗಳು ಬಡ ಕುಟುಂಬದವರಾಗಿದ್ದು, ತಮ್ಮ ಪಾಲಿನ ವಂತಿಗೆಯಾದ ಐದು ಲಕ್ಷ ರೂ.ಗಳನ್ನು ಪಾವತಿಸಲು ಸಾಧ್ಯವಾಗದೇ ಯೋಜನೆಯು ಮಂದಗತಿಯಲ್ಲಿ ಸಾಗುತ್ತಿತ್ತು. ಇದನ್ನು ಮನಗಂಡು ನಮ್ಮ ಸರ್ಕಾರವು ಫಲಾನುಭವಿಗಳು ಪಾವತಿಸಬೇಕಾದ ವಂತಿಗೆಯನ್ನು
ಒಂದು ಲಕ್ಷ ರೂ.ಗಳಿಗೆ ಸೀಮಿತಗೊಳಿಸಿ ಹೆಚ್ಚುವರಿ ನಾಲ್ಕು ಲಕ್ಷ ರೂ.ವರೆಗಿನ ಫಲಾನುಭವಿ ವಂತಿಗೆಯನ್ನು ಭರಿಸಲು ತೀರ್ಮಾನಿಸಿದೆ. ಅದರಂತೆ ಶೀಘ್ರದಲ್ಲಿಯೇ 48,796 ಮನೆಗಳನ್ನು ಪೂರ್ಣಗೊಳಿಸಿ ಕೊಳಗೇರಿ ನಿವಾಸಿಗಳಿಗೆ ಹಸ್ತಾಂತರಿಸಲಾಗುವುದು.
ನಗರ ಪ್ರದೇಶದ ಬಡ ನಿವಾಸಿಗಳಿಗೆ ಕೈಗೆಟಕುವ ದರದಲ್ಲಿ ವಸತಿ ಸೌಲಭ್ಯ ಒದಗಿಸಲು ಸಂಪನ್ಮೂಲ ಕ್ರೋಢೀಕರಣಕ್ಕಾಗಿ ವಸತಿ ಇಲಾಖೆಯು ಹಲವು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಿದೆ;
• Asset Monetisation, ವಸತಿ ಸೆಸ್ ಮತ್ತು ವಿವಿಧ ಶಾಸನ ಬದ್ಧ ಶುಲ್ಕಗಳನ್ನು ವಿಧಿಸುವ ಮೂಲಕ ಸಂಪನ್ಮೂಲ ಕ್ರೊಢೀಕರಿಸಿ Karnataka Affordable Housing Fund ಅನ್ನು (KAHF) ಸ್ಥಾಪಿಸಲಾಗುವುದು.
• ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನೆ ಕಾಯ್ದೆಯಡಿ ಕೊಳೆಗೇರಿ ಸೆಸ್ ದರ ಪರಿಷ್ಕರಣೆ ಮಾಡುವುದು.
• ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿಯ ಸ್ಥಿರ ಆಸ್ತಿಗಳಿಂದ ಸಂಪನ್ಮೂಲ ಸೃಜಿಸಲಾಗುವುದು.
ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರವು ರಿಯಲ್ ಎಸ್ಟೇಟ್ ವಲಯದಲ್ಲಿ ಪಾರದರ್ಶಕತೆ, ವಿಶ್ವಾಸಾರ್ಹತೆ ಹಾಗೂ ದಕ್ಷತೆಯನ್ನು ಹೆಚ್ಚಿಸಲು ಹಾಗೂ ಮನೆ ಖರೀದಿದಾರರ ಹಿತರಕ್ಷಣೆಗಾಗಿ ಕಾರ್ಯನಿರ್ವಹಿಸುತ್ತಿದೆ. 2023-24 ನೇ ಸಾಲಿನಲ್ಲಿ ಡೆವಲಪರ್ಗಳಿಗೆ 40 ಕೋಟಿ ರೂ. ದಂಡ ವಿಧಿಸಲಾಗಿರುತ್ತದೆ. ಮುಂದಿನ ದಿನಗಳಲ್ಲಿ ದಕ್ಷ ಹಾಗೂ ಪರಿಣಾಮಕಾರಿ ಕಾರ್ಯನಿರ್ವಹಣೆಯ ಮೂಲಕ ಜನರ ಹಿತರಕ್ಷಣೆಗೆ ಆದ್ಯತೆ ನೀಡಲಾಗುವುದು ಎಂದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….