ಬೆಂಗಳೂರು, (ಆಗಸ್ಟ್.04); ದಾವಣಗೆರೆ ಲೋಕಸಭೆ ಕ್ಷೇತ್ರದಿಂದ ಆಯ್ಕೆಯಾಗಿರುವ ಕಾಂಗ್ರೆಸ್ ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಅವರು ತಮಗೆ ಮೊದಲ ಬಾರಿಗೆ ಬಂದ ಸಂಸದ ಸ್ಥಾನದ ವೇತನವನ್ನು ವಯನಾಡು ಭೂಕುಸಿತದ ಸಂತ್ರಸ್ತರಿಗೆ ನೀಡುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಲೋಕಸಭೆ ಅಧಿವೇಶನದಲ್ಲಿ ಕನ್ನಡದಲ್ಲಿ ಮಾತನಾಡುವ ಮೂಲಕ ಎಲ್ಲರ ಗಮನ ಸೆಳೆದಿದ್ದ ಪ್ರಭಾ ಮಲ್ಲಿಕಾರ್ಜುನ್ ಅವರು, ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮಂಡನೆ ಮಾಡಿದ ವಿಚಾರ ಎಲ್ಲರ ಮನ ಸೆಳೆದಿತ್ತು.
ಪ್ರಭಾ ಮಲ್ಲಿಕಾರ್ಜುನ್ ಅವರು ರಾಜಕೀಯಕ್ಕೆ ಹೊಸಬರು. ಮೊದಲ ಬಾರಿಗೆ ಸಂಸತ್ ಪ್ರವೇಶಿಸಿದವರು. ಮೊದಲ ತಿಂಗಳ ವೇತನವನ್ನು ಸಂತ್ರಸ್ತರಿಗೆ ನೀಡುವ ಮೂಲಕ ಮಾದರಿಯಾಗಿದ್ದಾರೆ.
ವಯನಾಡ್ ಭೂಕುಸಿತದಿಂದ ಸಂಕಷ್ಟಕ್ಕೊಳಗಾಗಿರುವ ಜನರ ಸಂಕಷ್ಟಕ್ಕೆ ಕರ್ನಾಟಕ ಸರ್ಕಾರವು ಸ್ಪಂದಿಸಿ ರಕ್ಷಣೆ ಮತ್ತು ಪರಿಹಾರ ಕಾರ್ಯಗಳಲ್ಲಿ ನೆರವಾಗಿದೆ. ವಯನಾಡಿನಲ್ಲಿ ಮನೆ ಕಳೆದುಕೊಂಡ ಸಂತ್ರಸ್ತರಿಗೆ ನೂರು ಮನೆಗಳನ್ನು ನಿರ್ಮಿಸಿಕೊಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇರಳ ಸಿಎಂ ಪಿಣರಾಯಿ ವಿಜಯನ್ ಅವರಿಗೆ ಭರವಸೆ ನೀಡಿದ್ದಾರೆ.
ರಾಜ್ಯದ ನಾನಾ ಕಂಪೆನಿಗಳು, ಉದ್ಯಮಿಗಳು, ಸೇವಾ ಸಂಸ್ಥೆಗಳು ಕೂಡ ವಯನಾಡು ಸಂತ್ರಸ್ತರಿಗೆ ನೆರವಿನ ಹಸ್ತ ಚಾಚಿವೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….