ಬೆಂಗಳೂರು, (ಸೆ.04); ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಬಿ.ಮುನೇಗೌಡ ದಂಪತಿ ಇಂದು ಜೆಡಿಎಸ್ ವರಿಷ್ಠರಾದ ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರ ಮನೆಯಲ್ಲಿ ಬಾಗಿನ ಕಾರ್ಯಕ್ರಮವನ್ನು ಆಯೋಜಿಸಿದ್ದರು.
ಈ ಬಾಗಿನ ಕಾರ್ಯಕ್ರಮವನ್ನು ದೇವೇಗೌಡರ ಪತ್ನಿ ಚೆನ್ನಮ್ಮ ದೇವೇಗೌಡ ಅವರು ಚಾಲನೆ ನೀಡಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ ಮಹಿಳಾ ಘಟಕದ ಪದಾಧಿಕಾರಿಗಳಿಗೆ ಪದ್ಮಾವತಿ ಮುನೇಗೌಡ ಮತ್ತು ಬಿ.ಮುನೇಗೌಡ ದಂಪತಿಗಳು ಬಾಗಿನ ನೀಡಿದರು.
ನಂತರ ದೇವೇಗೌಡರನ್ನು ಭೇಟಿಯಾದ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಬಿ.ಮುನೇಗೌಡ, ಜಿಪಂ ಮಾಜಿ ಸದಸ್ಯ ಹೆಚ್.ಅಪ್ಪಯ್ಯಣ್ಣ ಅವರು ಕಮಲ-ದಳ ಮೈತ್ರಿ, ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆ, ವಿಧಾನಸಭೆ ಚುನಾವಣೆಯಲ್ಲಿ ಕೈಗೊಳ್ಳಬೇಕಾದ ನಿರ್ಣಯಗಳನ್ನು ಚರ್ಚಿಸಿದರು.
ಈ ವೇಳೆ ಮಾತನಾಡಿದ ಮಾಜಿ ಪ್ರಧಾನಿ ದೇವೇಗೌಡರು ಪಕ್ಷದಲ್ಲಿ ಯಾವುದೇ ಗೊಂದಲಕ್ಕೆ ಅವಕಾಶ ನೀಡದಂತೆ ಇಬ್ಬರು ಒಟ್ಟಾಗಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಶ್ರಮಿಸುವಂತೆ ಕೈಕೈ ಒಂದು ಮಾಡಿ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಹಿರಿಯ ಮಹಿಳಾ ಮುಖಂಡರಾದ ಲೀಲಾದೇವಿ ಆರ್ ಪ್ರಸಾದ್, ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ರಶ್ಮಿ ರಾಮೇಗೌಡ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ದೇವರಾಜಮ್ಮ, ವಕ್ತಾರ ಕುಂಟನಹಳ್ಳಿ ಮಂಜುನಾಥ್, ಸಂಘಟನಾ ಕಾರ್ಯದರ್ಶಿ ಮುನಿರಾಮಣ್ಣ, ದೊಡ್ಡಬಳ್ಳಾಪುರ ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ಶಾಂತಮ್ಮ, ದೇವನಹಳ್ಳಿ ಅಧ್ಯಕ್ಷೆ ಮೀನಾಕ್ಷಮ್ಮ ಸೇರಿದಂತೆ ಇತರ ತಾಲೂಕಿನ ಅಧ್ಯಕ್ಷರು, ಪದಾಧಿಕಾರಿಗಳು ಭಾಗವಹಿಸಿದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….