ಮೂರು ಅಂತಸ್ತಿನ ಕಟ್ಟಡ ಕುಸಿತ: 8 ಮಂದಿ ದುರ್ಮರಣ, 28 ಮಂದಿಗೆ ಗಾಯ..!

ಉತ್ತರ ಪ್ರದೇಶ, (ಸೆ.08); ಲಖನೌ ನಗರದಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿತ ಉಂಟಾಗಿ ಎಂಟು ಮಂದಿ ಮೃತಪಟ್ಟಿದ್ದಾರೆ. ಅವಶೇಷಗಳಡಿ ಸಿಲುಕಿ ಮೃತಪಟ್ಟವರ ಮೃತದೇಹಗಳನ್ನು ಹೊರತೆಗೆಯಲಾಗುತ್ತಿದೆ.

ರಾಜ್ ಕಿಶೋರ್ (27 ವರ್ಷ), ರುದ್ರ ಯಾದವ್ (24 ವರ್ಷ) ಮತ್ತು ಜಗರುಪ್ ಸಿಂಗ್ (35ವರ್ಷ) ಎಂದು ಗುರುತಿಸಲಾದ ಮೂವರ ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ಕಮಿಷನ‌ರ್ ಜಿ.ಎಸ್‌. ನವೀನ್ ಕುಮಾರ್ ತಿಳಿಸಿದ್ದಾರೆ.

ಶನಿವಾರ ಸಂಜೆ 5 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ. ಕಟ್ಟಡವನ್ನು ಉಗ್ರಾಣವಾಗಿ ಬಳಸಲಾಗುತ್ತಿತ್ತು. ಮೂರು ಅಂತಸ್ತಿನ ಕಟ್ಟಡದಲ್ಲಿ ಕೆಲವು ನಿರ್ಮಾಣ ಕಾರ್ಯಗಳು ನಡೆಯುತ್ತಿದ್ದವು. ಸುಮಾರು ನಾಲ್ಕು ವರ್ಷಗಳ ಹಿಂದೆ ಕಟ್ಟಡವನ್ನು ನಿರ್ಮಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯಲ್ಲಿ 28 ಮಂದಿ ಗಾಯಗೊಂಡಿದ್ದು, ಅವರನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಜತೆಗೆ, ರಕ್ಷಣಾ ಕಾರ್ಯಾಚರಣೆಯನ್ನು ಮುಂದುವರಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್‌) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆಯ (ಎಸ್‌ಡಿಆರ್‌ಎಫ್) ರಕ್ಷಣಾ ತಂಡಗಳನ್ನು ನಿಯೋಜಿಸಲಾಗಿದೆ.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಸಂತಾಪ ಸೂಚಿಸಿದ್ದು, ರಕ್ಷಣಾ ಕಾರ್ಯಾಚರಣೆಯನ್ನು ಚುರುಕುಗೊಳಿಸುವುದರ ಜತೆಗೆ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆಯೂ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….